ಉಡುಪಿ: ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕೊಡವೂರಿನಲ್ಲಿ ನಡೆದ ಎಕೆಎಂಎಸ್ ಬಸ್ ಮಾಲೀಕ ಸೈಫುದ್ದೀನ್ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೋರ್ವ ಆರೋಪಿಯನ್ನು ಮಲ್ಪೆ ಪೊಲೀಸರು ಬಂಧಿಸಿದ್ದಾರೆ. ಮಾಲಿ ಮೊಹಮ್ಮದ್ ಸಿಯಾನ್ (31) ಬಂಧಿತ ಆರೋಪಿ.

ಇದೇ ಸೆಪ್ಟೆಂಬರ್ 27ರಂದು ಕೊಡವೂರಿನಲ್ಲಿ ಸೈಫುದ್ದೀನ್ ಅವರ ಹತ್ಯೆ ನಡೆದಿದ್ದು, ಈ ಸಂಬಂಧ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ ಪ್ರಕರಣದಲ್ಲಿ ಈಗಾಗಲೇ ನಾಲ್ವರು ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಆರೋಪಿಗಳು ಸದ್ಯ ನ್ಯಾಯಾಂಗ ಬಂಧನದಲ್ಲಿದ್ದಾರೆ. ಈ ಪ್ರಕರಣದ ಮತ್ತೋರ್ವ ಆರೋಪಿ ಮಾಲಿ ಮೊಹಮ್ಮದ್ ಸಿಯಾನ್ ಪ್ರಕರಣದ ಬಳಿಕ ನಾಪತ್ತೆಯಾಗಿದ್ದ. ಸೋಮವಾರ ಬೆಳಿಗ್ಗೆ 10.30 ಗಂಟೆಗೆ ಉಡುಪಿ ಎಂಜಿಎಂ ಕಾಲೇಜು ಬಸ್ ನಿಲ್ದಾಣದ ಬಳಿ ಆರೋಪಿ ಪತ್ತೆಯಾಗಿದ್ದು ಮಲ್ಪೆ ಠಾಣೆಯ ಎಎಸ್ಐ ಹರೀಶ್ ಹಾಗೂ ಪಿಸಿ ಶರಣಬಸಪ್ಪ ಅವರು ವಶಕ್ಕೆ ಪಡೆದಿದ್ದಾರೆ.

ಬಂಧಿತ ಆರೋಪಿಯಿಂದ ಕೃತ್ಯಕ್ಕೆ ಬಳಸಿದ್ದ ಗ್ಲಾಂಜಾ ಕಾರು ಹಾಗೂ ಕೃತ್ಯಕ್ಕೆ ಬಳಸಿದ್ದ ಮೊಬೈಲ್ ಫೋನ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.



