ಉಡುಪಿ : ಉಡುಪಿ–ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಎರ್ಮಾಳು ನಾರಾಳ್ತಾಯ ಗುಡಿಯ ಬಳಿ ಭಾನುವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸ್ಕೂಟಿ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಗೂಡ್ಸ್ ವಾಹನ ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತರನ್ನು ಅದಮಾರು ವಕೀಲರ ತೋಟದ ನಿವಾಸಿ ಗುರುರಾಜ ರಾವ್ (63) ಎಂದು ಗುರುತಿಸಲಾಗಿದೆ. ಅವರು ಪತ್ನಿ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.

ಪೊಲೀಸ್ ಮೂಲಗಳ ಪ್ರಕಾರ, ಗುರುರಾಜ ರಾವ್ ಅವರು ಸ್ಕೂಟಿಯಲ್ಲಿ ರಾಂಗ್ ಸೈಡ್ನಿಂದ ಬರುತ್ತಿದ್ದ ವೇಳೆ ಎದುರಿನಿಂದ ಬಂದ ಗೂಡ್ಸ್ ವಾಹನಕ್ಕೆ ಡಿಕ್ಕಿ ಹೊಡೆದಿದ್ದಾರೆ. ಡಿಕ್ಕಿಯ ತೀವ್ರತೆಗೆ ಅವರು ರಸ್ತೆಗೆ ಎಸೆಯಲ್ಪಟ್ಟು ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಅಪಘಾತದ ಪರಿಣಾಮ ಗೂಡ್ಸ್ ವಾಹನ ರಸ್ತೆ ಬದಿಗೆ ಪಲ್ಟಿಯಾಗಿದ್ದು, ಮಂಗಳೂರು ಮೂಲದ ಚಾಲಕ ವಿಜಯ ಕಾಮತ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ತಕ್ಷಣ ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯ ಮಾಹಿತಿ ತಿಳಿದು ಪಡುಬಿದ್ರಿ ಪೊಲೀಸ್ ಠಾಣೆಯ ಪಿಎಸ್ಐ ಅನಿಲ್ ಕುಮಾರ್ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಮುಂದುವರೆಸಲಾಗಿದೆ.



