ಉಡುಪಿ: ಉಡುಪಿ ಸಮೀಪದ ಕುತ್ಪಾಡಿಯಲ್ಲಿರುವ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜು, ಆಸ್ಪತ್ರೆ ಮತ್ತು ಸಂಶೋಧನ ಕೇಂದ್ರದಲ್ಲಿ ಕಾಲೇಜಿನ ಐಕ್ಯೂಎಸಿ, ಆಂತರಿಕ ದೂರು ಸಮಿತಿ ಹಾಗೂ ಸಾಹಿತ್ಯ ಸಮಿತಿಗಳ ಸಂಯುಕ್ತ ಆಶ್ರಯದಲ್ಲಿ ವಿಶ್ವ ಮಹಿಳಾ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಕುಂದಾಪುರದ ಉಪವಿಭಾಗಾಧಿಕಾರಿ ಶ್ರೀಮತಿ ರಶ್ಮಿ ಎಸ್.ಆರ್. ಅವರು ಮಾತನಾಡಿ, ವೈದ್ಯಕೀಯ ವಿದ್ಯಾರ್ಥಿಗಳು ಕೇವಲ ಚಿಕಿತ್ಸಾ ಕ್ಷೇತ್ರಕ್ಕೆ ಸೀಮಿತವಾಗದೆ ನಾಗರಿಕ ಸೇವಾ ಪರೀಕ್ಷೆಗಳಾದ ಯುಪಿಎಸ್ಸಿ ಮತ್ತು ಕೆಎಎಸ್ ಕಡೆಗೂ ಗಮನ ಹರಿಸಬೇಕು ಎಂದು ಹೇಳಿದರು. ಆಡಳಿತ ಸೇವೆಯಲ್ಲಿ ಜನಸಾಮಾನ್ಯರಿಗೆ ಸೇವೆ ಸಲ್ಲಿಸಲು ಅಪಾರ ಅವಕಾಶಗಳಿವೆ ಎಂದು ಅವರು ವಿದ್ಯಾರ್ಥಿಗಳನ್ನು ಹುರಿದುಂಬಿಸಿದರು.

ಕಾಲೇಜಿನ ಪ್ರಾಂಶುಪಾಲೆ ಡಾ. ಮಮತಾ ಕೆ.ವಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಆಯುರ್ವೇದದಲ್ಲಿ ನೂತನ ಪಾಕಪದ್ಧತಿ ಎಂಬ ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆಯ ವಿಜೇತರನ್ನು ಈ ಸಂದರ್ಭದಲ್ಲಿ ಪ್ರಕಟಿಸಲಾಯಿತು. ಸ್ಪರ್ಧೆಯ ತೀರ್ಪುಗಾರರಾಗಿ ಸಹಕರಿಸಿದ ಸ್ವಸ್ಥವೃತ್ತ ವಿಭಾಗದ ಮುಖ್ಯಸ್ಥ ಡಾ. ವಿಜಯ್ ನೆಗ್ಲೂರು ಹಾಗೂ ಅಗದತಂತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ. ಶುಭಾ ಪಿ.ಯು ಅವರನ್ನು ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಗೌರವ ಅತಿಥಿಗಳಾಗಿ ಭಾಗವಹಿಸಿದ್ದ ನಿವೃತ್ತ ಪ್ರಾಂಶುಪಾಲೆ ಶ್ರೀಮತಿ ಎ. ಲಕ್ಷ್ಮೀಬಾಯಿ, ಐಕ್ಯೂಎಸಿ ಡೀನ್ ಡಾ. ಶ್ರೀಲತಾ ಕೆ. ಉಪಸ್ಥಿತರಿದ್ದರು. ಐಸಿಸಿ ಸಮಿತಿ ಸದಸ್ಯೆ ಡಾ. ಲಿಖಿತಾ ಡಿ.ಎನ್. ಸ್ವಾಗತಿಸಿದರು. ಡಾ. ತೇಜಸ್ವಿ ಐ. ನಾಯ್ಕ್ ಅತಿಥಿಗಳನ್ನು ಪರಿಚಯಿಸಿದರು. ಡಾ. ಲಿಖಿತಾ ಎಚ್.ಕೆ. ಬಹುಮಾನ ವಿಜೇತರ ಪಟ್ಟಿ ವಾಚಿಸಿದರು. ಡಾ. ಆಶಾ ಗುರುಕೃಪಾ ರಾವ್ ವಂದಿಸಿದರು. ಸ್ನಾತಕೋತ್ತರ ವಿದ್ಯಾರ್ಥಿನಿ ಡಾ. ಸಿಮ್ರನ್ ಖರೋಶಿ ಕಾರ್ಯಕ್ರಮ ನಿರೂಪಿಸಿದರು. ಐಸಿಸಿ ಸಮಿತಿಯ ಅಧ್ಯಕ್ಷೆ ಡಾ. ಚೈತ್ರಾ ಅವರ ಮಾರ್ಗದರ್ಶನದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಕಾಲೇಜಿನ ಬೋಧಕ ಸಿಬ್ಬಂದಿ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳು ಭಾಗವಹಿಸಿದ್ದರು.



