ಉಡುಪಿ : ಕನ್ನಡ ನಾಡು-ನುಡಿ, ಸಂಸ್ಕೃತಿ ಹಾಗೂ ಪರಂಪರೆಯನ್ನು ಬಿಂಬಿಸುವ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಮತ್ತು ವಿಜೃಂಭಣೆಯಿಂದ ಆಚರಿಸಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅಧಿಕಾರಿಗಳಿಗೆ ಸೂಚನೆ ನೀಡಿದರು. ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಕನ್ನಡ ರಾಜ್ಯೋತ್ಸವ ಆಚರಣೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ನವೆಂಬರ್ 1ರಂದು ಉಡುಪಿ ನಗರದ ಅಜ್ಜರಕಾಡು ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ 71ನೇ ಕನ್ನಡ ರಾಜ್ಯೋತ್ಸವ ನಡೆಯಲಿದ್ದು, ಬೆಳಿಗ್ಗೆ 9 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವರು ಧ್ವಜಾರೋಹಣ ನೆರವೇರಿಸಿ ರಾಜ್ಯೋತ್ಸವ ಸಂದೇಶ ನೀಡಲಿದ್ದಾರೆ ಎಂದರು.

ಕಾರ್ಯಕ್ರಮಕ್ಕೂ ಮುನ್ನ ನಗರದ ಬೋರ್ಡ್ ಹೈಸ್ಕೂಲ್ ಆವರಣದಲ್ಲಿ ತಾಯಿ ಭುವನೇಶ್ವರಿಗೆ ಪೂಜೆ ಸಲ್ಲಿಸಲಾಗುವುದು. ಬಳಿಕ ಅಲ್ಲಿಂದ ಅಜ್ಜರಕಾಡು ಕ್ರೀಡಾಂಗಣದವರೆಗೆ ಭುವನೇಶ್ವರಿ ದೇವಿಯ ಭಾವಚಿತ್ರದ ಮೆರವಣಿಗೆ ನಡೆಯಲಿದೆ. ಕರ್ನಾಟಕದ ಇತಿಹಾಸ, ಪರಂಪರೆ, ಸಂಸ್ಕೃತಿ ಮತ್ತು ಸಂಪ್ರದಾಯಗಳನ್ನು ಬಿಂಬಿಸುವ ಸಾಂಸ್ಕೃತಿಕ ಕಲಾತಂಡಗಳು ಹಾಗೂ ವಿವಿಧ ಇಲಾಖೆಗಳ ಯೋಜನೆಗಳನ್ನು ಪರಿಚಯಿಸುವ ಸ್ತಬ್ಧಚಿತ್ರಗಳು ಮೆರವಣಿಗೆಯಲ್ಲಿ ಪಾಲ್ಗೊಳ್ಳಲಿವೆ ಎಂದು ತಿಳಿಸಿದರು.

ಪೊಲೀಸ್, ಅಬಕಾರಿ, ಅರಣ್ಯ ಇಲಾಖೆ, ಗೃಹರಕ್ಷಕ ದಳ, ಎನ್ಎಸ್ಎಸ್, ಎನ್ಸಿಸಿ, ಸ್ಕೌಟ್ಸ್ ಮತ್ತು ಗೈಡ್ಸ್, ಭಾರತ ಸೇವಾದಳ ಹಾಗೂ ವಿವಿಧ ಶಾಲೆಗಳ ವಿದ್ಯಾರ್ಥಿಗಳಿಂದ ಪಥಸಂಚಲನ ನಡೆಯಲಿದೆ. ಇದಕ್ಕೆ ಅಗತ್ಯವಾದ ಪೂರ್ವಸಿದ್ಧತೆಗಳನ್ನು ಮೂರು ದಿನ ಮುಂಚಿತವಾಗಿ ಪೂರ್ಣಗೊಳಿಸಬೇಕು. ಶಾಲಾ ವಿದ್ಯಾರ್ಥಿಗಳಿಂದ ನಡೆಯಲಿರುವ ಗುಂಪು ಸಾಂಸ್ಕೃತಿಕ ಕಾರ್ಯಕ್ರಮಗಳಿಗೂ ಮುಂಚಿತವಾಗಿ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಸೂಚಿಸಿದರು.

ಜನಪ್ರತಿನಿಧಿಗಳು ಹಾಗೂ ಗಣ್ಯರಿಗೆ ಶಿಷ್ಟಾಚಾರದಂತೆ ಆಹ್ವಾನ ಪತ್ರಿಕೆ ಮುದ್ರಿಸಿ ಆಹ್ವಾನಿಸಬೇಕು. ಅಧಿಕಾರಿಗಳು, ಸಿಬ್ಬಂದಿ, ಸಂಘ-ಸಂಸ್ಥೆಗಳು, ವಿದ್ಯಾರ್ಥಿಗಳು, ಪೋಷಕರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಬೇಕು ಎಂದರು.

ಕಾರ್ಯಕ್ರಮದ ಸುಸೂತ್ರ ನಿರ್ವಹಣೆಗಾಗಿ ವಿವಿಧ ಉಪಸಮಿತಿಗಳನ್ನು ರಚಿಸಲಾಗಿದ್ದು, ಪ್ರತಿಯೊಂದು ಸಮಿತಿಯೂ ತನಗೆ ವಹಿಸಿರುವ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು. ವೇದಿಕೆ, ಆಸನ ವ್ಯವಸ್ಥೆ, ಕುಡಿಯುವ ನೀರು, ಪಥಸಂಚಲನದಲ್ಲಿ ಭಾಗವಹಿಸುವ ವಿದ್ಯಾರ್ಥಿಗಳಿಗೆ ಉಪಾಹಾರ ಹಾಗೂ ಆಂಬುಲೆನ್ಸ್ ವ್ಯವಸ್ಥೆ ಕಲ್ಪಿಸಬೇಕು ಎಂದು ತಿಳಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಎಸ್.ಎಸ್. ಕಾದ್ರೋಳ್ಳಿ, ನಗರಸಭೆ ಪೌರಾಯುಕ್ತ ಮಹಾಂತೇಶ್ ಹಂಗರಗಿ ಹಾಗೂ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.


