ಉಡುಪಿ : ಕರ್ಕಶ ಶಬ್ದ ಮಾಡುವ ಸೈಲೆನ್ಸರ್ ಅಳವಡಿಸಿಕೊಂಡು ಸಾರ್ವಜನಿಕರಿಗೆ ತೊಂದರೆ ಉಂಟುಮಾಡುತ್ತಿದ್ದ ಬೈಕ್‌ಗಳ ವಿರುದ್ಧ ಕುಂದಾಪುರ ಸಂಚಾರ ಠಾಣೆ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿ 6ಕ್ಕೂ ಅಧಿಕ ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ನಗರದ ಕಾಲೇಜು ಪ್ರದೇಶ, ಆಸ್ಪತ್ರೆ ಆವರಣ, ವಿದ್ಯಾರ್ಥಿಗಳ ಹಾಸ್ಟೆಲ್‌ಗಳ ಸುತ್ತಮುತ್ತ ಹಾಗೂ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲ ಯುವಕರು ಬೈಕ್‌ಗಳ ಮೂಲ ಸೈಲೆನ್ಸರ್‌ಗಳನ್ನು ಮಾರ್ಪಾಡು ಮಾಡಿ ಅತಿವೇಗದಲ್ಲಿ ಸಂಚರಿಸುತ್ತಿರುವ ಬಗ್ಗೆ ಸಾರ್ವಜನಿಕರಿಂದ ಪೊಲೀಸರಿಗೆ ದೂರುಗಳು ಬಂದಿದ್ದವು.

ಈ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ ಅವರ ನಿರ್ದೇಶನದಂತೆ, ಕುಂದಾಪುರ ಡಿವೈಎಸ್ಪಿ ಎಚ್.ಡಿ. ಕುಲಕರ್ಣಿ ಹಾಗೂ ನಗರ ಠಾಣೆ ಪೊಲೀಸ್ ನಿರೀಕ್ಷಕ ಜಯರಾಮ ಗೌಡ ಅವರ ಮಾರ್ಗದರ್ಶನದಲ್ಲಿ ಎರಡು ದಿನಗಳ ವಿಶೇಷ ಕಾರ್ಯಾಚರಣೆ ಕೈಗೊಳ್ಳಲಾಯಿತು. ಕುಂದಾಪುರ ಟ್ರಾಫಿಕ್ ಠಾಣೆ ಉಪನಿರೀಕ್ಷಕರಾದ ಅನೂಪ್ ನಾಯಕ್, ಸುಧಾ ಪ್ರಭು ಹಾಗೂ ಸಿಬ್ಬಂದಿಗಳ ತಂಡ ನಗರದ ವಿವಿಧ ಭಾಗಗಳಲ್ಲಿ ತಪಾಸಣೆ ನಡೆಸಿ ಕಾನೂನುಬಾಹಿರವಾಗಿ ಸೈಲೆನ್ಸರ್ ಮಾರ್ಪಾಡು ಮಾಡಿದ್ದ ಬೈಕ್‌ಗಳನ್ನು ಪತ್ತೆಹಚ್ಚಿ ವಶಕ್ಕೆ ಪಡೆದಿದೆ. ವಶಪಡಿಸಿಕೊಂಡ ವಾಹನಗಳ ದಾಖಲೆಗಳು, ಚಾಲನಾ ಪರವಾನಗಿ ಹಾಗೂ ತಾಂತ್ರಿಕ ಲೋಪಗಳನ್ನು ಪರಿಶೀಲಿಸಿ ಸಂಬಂಧಪಟ್ಟ ವಾಹನ ಸವಾರರ ವಿರುದ್ಧ ಪ್ರಕರಣ ದಾಖಲಿಸುವ ಪ್ರಕ್ರಿಯೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ರಸ್ತೆ ಅಪಘಾತಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಂಚಾರ ನಿಯಮ ಪಾಲನೆ ಅತ್ಯಗತ್ಯವಾಗಿದೆ. ಅತಿವೇಗ, ನಿರ್ಲಕ್ಷ್ಯ ಚಾಲನೆ ಹಾಗೂ ಕರ್ಕಶ ಶಬ್ದ ಉಂಟುಮಾಡುವ ವಾಹನಗಳ ವಿರುದ್ಧ ಮುಂದೆಯೂ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಂಚಾರ ಠಾಣೆ ಉಪನಿರೀಕ್ಷಕ ಅನೂಪ್ ನಾಯಕ್ ತಿಳಿಸಿದ್ದಾರೆ. ನಗರದಲ್ಲಿ ಶಾಂತಿ ಮತ್ತು ರಸ್ತೆ ಸುರಕ್ಷತೆ ಕಾಪಾಡುವ ನಿಟ್ಟಿನಲ್ಲಿ ಪೊಲೀಸರ ಈ ಕಾರ್ಯಾಚರಣೆಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.



