ಉಡುಪಿ: ಡಾ. ಶಿವರಾಮ ಕಾರಂತರ ಕಾದಂಬರಿಗಳಲ್ಲಿ ಸ್ವಾತಂತ್ರ್ಯ ಪೂರ್ವ ಮತ್ತು ಸ್ವಾತಂತ್ರ್ಯೋತ್ತರ ಕಾಲದ ಕರಾವಳಿ ಪ್ರದೇಶದ ಬದುಕು ಜೀವಂತವಾಗಿ ಚಿತ್ರಿತವಾಗಿದ್ದು, ಆ ಕೃತಿಗಳು ಕರಾವಳಿ ಸಮಾಜದ ಚಾರಿತ್ರಿಕ ದಾಖಲೆಗಳಂತೆ ಕಾಣಿಸುತ್ತವೆ ಎಂದು ಸೈಂಟ್ ಸಿರಿಯನ್ ಕಾಲೇಜು ಬ್ರಹ್ಮಾವರದ ಸಹ ಪ್ರಾಧ್ಯಾಪಕಿ ಡಾ. ವಿದ್ಯಾಲತಾ ಡಿ ಹೇಳಿದರು.

ಅವರು ಕೋಟ ಪಡುಕೆರೆಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಡಾ. ಶಿವರಾಮ ಕಾರಂತ ಟ್ರಸ್ಟ್, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಹಾಗೂ ಉಡುಪಿ ಜಿಲ್ಲಾ ಲೇಖಕಿಯರ ಮತ್ತು ವಾಚಕಿಯರ ಸಂಘದ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ಮಹಿಳಾ ದಿನಾಚರಣಾ ಸಪ್ತಾಹದ ಉಪನ್ಯಾಸ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.

ಕಾರಂತರ ಕಾದಂಬರಿಗಳಲ್ಲಿ ಕರಾವಳಿ ಪ್ರದೇಶದ ಸಾಮಾಜಿಕ ವ್ಯವಸ್ಥೆ, ಜಾತಿ ವ್ಯವಸ್ಥೆ, ಲಿಂಗ ಅಸಮಾನತೆ ಹಾಗೂ ಪ್ರಕೃತಿ ಮತ್ತು ಮನುಷ್ಯನ ನಡುವಿನ ಸಂಬಂಧಗಳ ಚಿತ್ರಣ ಸ್ಪಷ್ಟವಾಗಿ ಕಾಣಿಸುತ್ತದೆ ಎಂದು ಅವರು ತಿಳಿಸಿದರು. ಕಾರ್ಯಕ್ರಮದಲ್ಲಿ ಆಶಯ ಭಾಷಣ ಮಾಡಿದ ಡಾ. ಶಿವರಾಮ ಕಾರಂತ ಟ್ರಸ್ಟ್ ಅಧ್ಯಕ್ಷ ಡಾ. ಗಣನಾಥ ಎಕ್ಕಾರು ಮಾತನಾಡಿ, ಕಾರಂತರು ತಮ್ಮ ಕೃತಿಗಳ ಮೂಲಕ ಸಂವಿಧಾನಿಕ ಮೌಲ್ಯಗಳನ್ನು ಸಮಾಜಕ್ಕೆ ತಿಳಿಸಲು ಪ್ರಯತ್ನಿಸಿದ್ದಾರೆ. ಕಾರಂತರ ವಿಚಾರಗಳನ್ನು ಕೇಂದ್ರವಾಗಿಟ್ಟುಕೊಂಡು ಯುವ ಸಮೂಹಕ್ಕೆ ಸಂವಿಧಾನಿಕ ಮೌಲ್ಯಗಳನ್ನು ತಲುಪಿಸುವುದು ಟ್ರಸ್ಟಿನ ಮುಖ್ಯ ಉದ್ದೇಶವಾಗಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಧ್ಯಾಪಕ ರಮೇಶ್ ಆಚಾರ್, ಉಡುಪಿ ಜಿಲ್ಲಾ ಲೇಖಕಿಯರ ಮತ್ತು ವಾಚಕಿಯರ ಸಂಘದ ಸಂಘಟನಾ ಕಾರ್ಯದರ್ಶಿ ಶಾಲಿನಿ ಯು.ಬಿ ಉಪಸ್ಥಿತರಿದ್ದರು. ಕಾಲೇಜಿನ ಉಪನ್ಯಾಸಕ ರಾಮಚಂದ್ರ ಭಟ್ ಸ್ವಾಗತಿಸಿದರು. ಕನ್ನಡ ವಿಭಾಗದ ಸಹ ಪ್ರಾಧ್ಯಾಪಕ ಡಾ. ಪ್ರಕಾಶ್ ಕಾರ್ಯಕ್ರಮವನ್ನು ನಿರೂಪಿಸಿ ವಂದಿಸಿದರು.



