ಉಡುಪಿ : ಜಿಲ್ಲೆಯಲ್ಲಿರುವ ಎಲ್ಲಾ ಕಾಲುಸಂಕಗಳ ಗುಣಮಟ್ಟವನ್ನು ತಾಂತ್ರಿಕ ತಂಡದೊಂದಿಗೆ ಪರಿಶೀಲಿಸಿ, ಅವುಗಳ ಸ್ಥಿತಿಗತಿ ಕುರಿತು ಸಮಗ್ರ ವರದಿ ಸಲ್ಲಿಸುವಂತೆ ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಸೂಚನೆ ನೀಡಿದರು. ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ 600ಕ್ಕೂ ಹೆಚ್ಚು ಕಾಲುಸಂಕಗಳಿದ್ದು, ಶಿಥಿಲಾವಸ್ಥೆಯಲ್ಲಿರುವ ಕಾಲುಸಂಕಗಳ ಮೂಲಕ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಸಂಚರಿಸುವುದರಿಂದ ಜೀವಹಾನಿ ಸಂಭವಿಸುವ ಸಾಧ್ಯತೆ ಇದೆ. ಆದ್ದರಿಂದ ಹೊಸ ಕಾಲುಸಂಕಗಳ ನಿರ್ಮಾಣದ ಜತೆಗೆ ಈಗಾಗಲೇ ಇರುವ ಕಾಲುಸಂಕಗಳ ದುರಸ್ತಿಗೂ ಆದ್ಯತೆ ನೀಡಿ ಯಾವುದೇ ಅವಘಡ ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಜಿಲ್ಲೆಯಲ್ಲಿ ಪ್ರಸಕ್ತ ವರ್ಷದಲ್ಲಿ ವಾಡಿಕೆಯಂತೆ 1,959 ಮಿ.ಮೀ. ಮಳೆಯಾಗಬೇಕಿದ್ದರೆ, ಇದುವರೆಗೆ 1,182 ಮಿ.ಮೀ. ಮಾತ್ರ ಮಳೆಯಾಗಿದ್ದು, ಶೇ.40ರಷ್ಟು ಮಳೆ ಕೊರತೆ ದಾಖಲಾಗಿದೆ. ಪೂರ್ವ ಮುಂಗಾರು ಮಳೆಯಿಂದ ಸಂಭವಿಸಿದ ಮಾನವ ಹಾಗೂ ಜಾನುವಾರು ಜೀವಹಾನಿ ಪ್ರಕರಣಗಳಿಗೆ ಸಂಬಂಧಿಸಿದ ಪರಿಹಾರ ವಿತರಣೆಯಲ್ಲಿ ವಿಳಂಬವಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ಜಿಲ್ಲೆಯಲ್ಲಿ ಮುಂದಿನ 44 ವಾರಗಳಿಗೆ ಸಾಕಾಗುವಷ್ಟು ಜಾನುವಾರು ಮೇವಿನ ದಾಸ್ತಾನು ಲಭ್ಯವಿದೆ. ರೈತರ ಬೇಡಿಕೆಗೆ ಅನುಗುಣವಾಗಿ ಬಿತ್ತನೆ ಬೀಜಗಳನ್ನು ಹಂತಹಂತವಾಗಿ ಪೂರೈಸಬೇಕು. ರಸಗೊಬ್ಬರ ವಿತರಣೆಯಲ್ಲಿ ಯಾವುದೇ ರೀತಿಯ ಕೊರತೆ ಅಥವಾ ಕೃತಕ ಅಭಾವ ಉಂಟಾಗದಂತೆ ನೋಡಿಕೊಳ್ಳಬೇಕು. ಜಿಲ್ಲೆಯಲ್ಲಿ ಪ್ರಸ್ತುತ 4,720 ಮೆಟ್ರಿಕ್ ಟನ್ ರಸಗೊಬ್ಬರ ದಾಸ್ತಾನು ಇದ್ದು, ಸಮತೋಲಿತ ಗೊಬ್ಬರ ಬಳಕೆ ಹಾಗೂ ಮಣ್ಣು ಪರೀಕ್ಷೆ ಆಧಾರಿತ ಪೋಷಕಾಂಶಗಳ ಬಳಕೆಯ ಕುರಿತು ರೈತರಿಗೆ ಜಾಗೃತಿ ಮೂಡಿಸಬೇಕು ಎಂದು ಸೂಚಿಸಿದರು.

ಜನವರಿಯಿಂದ ಜೂನ್‌ವರೆಗೆ 9.34 ಹೆಕ್ಟೇರ್ ಪ್ರದೇಶದಲ್ಲಿ ಅಡಿಕೆ ಹಾಗೂ ತೆಂಗು ಬೆಳೆ ಹಾನಿಯಾಗಿ 28.64 ಲಕ್ಷ ನಷ್ಟ ಸಂಭವಿಸಿದ್ದು, ಬೆಳೆಹಾನಿ ಪರಿಹಾರವನ್ನು ಶೀಘ್ರ ವಿತರಿಸಬೇಕು. ಅಡಿಕೆ ಬೆಳೆಗಾರರಿಗೆ ಸಕಾಲದಲ್ಲಿ ಸಸಿಗಳನ್ನು ವಿತರಿಸುವುದರ ಜೊತೆಗೆ ಕೀಟ ನಿರ್ವಹಣೆ ಹಾಗೂ ಕೊಳೆರೋಗ ನಿಯಂತ್ರಣ ಕುರಿತು ತಾಲೂಕು ಮಟ್ಟದಲ್ಲಿ ತರಬೇತಿ ಮತ್ತು ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು.

ಕಾರ್ಕಳ, ಕುಂದಾಪುರ, ಉಡುಪಿ, ಬೈಂದೂರು, ಬ್ರಹ್ಮಾವರ, ಕಾಪು ಹಾಗೂ ಹೆಬ್ರಿ ತಾಲೂಕುಗಳ 94 ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯ 146 ಗ್ರಾಮಗಳಲ್ಲಿ ಮುಂದಿನ ದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಸಾಧ್ಯತೆ ಇರುವುದರಿಂದ ಪರ್ಯಾಯ ಮೂಲಗಳಿಂದ ನೀರು ಪೂರೈಸಲು ಈಗಿನಿಂದಲೇ ಅಗತ್ಯ ಸಿದ್ಧತೆ ಕೈಗೊಳ್ಳಬೇಕು ಎಂದು ಸೂಚಿಸಿದರು. ಜಿಲ್ಲೆಯ ಶಾಲೆಗಳು ಹಾಗೂ ಅಂಗನವಾಡಿ ಕಟ್ಟಡಗಳ ಸುರಕ್ಷತೆಯನ್ನು ಲೋಕೋಪಯೋಗಿ ಇಲಾಖೆ, ಪಂಚಾಯತ್ ರಾಜ್ ಇಲಾಖೆ ಹಾಗೂ ಶಿಕ್ಷಣ ಇಲಾಖೆ ಅಧಿಕಾರಿಗಳು ಜಂಟಿಯಾಗಿ ಪರಿಶೀಲಿಸಬೇಕು. ಶಿಥಿಲಾವಸ್ಥೆಯಲ್ಲಿರುವ ಕಟ್ಟಡಗಳಲ್ಲಿ ತರಗತಿಗಳನ್ನು ನಡೆಸದೆ ಪರ್ಯಾಯ ವ್ಯವಸ್ಥೆ ಕಲ್ಪಿಸುವಂತೆ ಜಿಲ್ಲಾಧಿಕಾರಿ ಸೂಚನೆ ನೀಡಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ , ಡಿಎಫ್‌ಒ ರುಥ್ರೇನ್ ಪಿ., ವನ್ಯಜೀವಿ ವಿಭಾಗದ ಡಿಎಫ್‌ಒ ಶಿವರಾಮ ಎಂ. ಬಾಬು, ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್, ಸಹಾಯಕ ಆಯುಕ್ತೆ ರಶ್ಮಿ, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ತಾಲೂಕು ತಹಶೀಲ್ದಾರರು ಉಪಸ್ಥಿತರಿದ್ದರು.


