ಉಡುಪಿ: ಗಣೇಶ ಚತುರ್ಥಿಯಂದು ಕುಂಭಾಶಿ ಶ್ರೀ ವಿನಾಯಕ ದೇವಸ್ಥಾನದಲ್ಲಿ ಜನಜಂಗುಳಿಯ ನಡುವೆ ಪ್ರದಕ್ಷಿಣೆ ಹಾಕುತ್ತಿದ್ದ 75 ವರ್ಷದ ವೃದ್ಧೆಯ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಸುಲಿಗೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡು ಮೂಲದ ಮೂವರು ಮಹಿಳೆಯರನ್ನು ಕುಂದಾಪುರ ಪೊಲೀಸರು ವಶಕ್ಕೆ ಪಡೆದು, ಸುಲಿಗೆಯಾದ ಚಿನ್ನದ ಸರವನ್ನು ವಶಪಡಿಸಿಕೊಂಡಿದ್ದಾರೆ. ಬೈಂದೂರು ತಾಲೂಕಿನ ನಾಡ ಗುಡ್ಡೆಯಂಗಡಿ ನಿವಾಸಿ ಮುತ್ತು (75) ಅವರು ಸೆ.14ರಂದು ಗಣೇಶ ಚತುರ್ಥಿಯ ಪ್ರಯುಕ್ತ ಕುಂಭಾಶಿ ಶ್ರೀ ವಿನಾಯಕ ದೇವಸ್ಥಾನಕ್ಕೆ ತೆರಳಿದ್ದರು. ದೇವಸ್ಥಾನದ ಒಳಗೆ ಭಕ್ತರ ಜನಜಂಗುಳಿಯ ನಡುವೆ ಪ್ರದಕ್ಷಿಣೆ ಹಾಕುತ್ತಿದ್ದ ಸಂದರ್ಭದಲ್ಲಿ ದುಷ್ಕರ್ಮಿಗಳು ಅವರ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಸುಲಿಗೆ ಮಾಡಿಕೊಂಡು ಪರಾರಿಯಾಗಿದ್ದರು. ಈ ಕುರಿತು ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ತನಿಖೆ ವೇಳೆ ಚಿನ್ನದ ಸರ ಸುಲಿಗೆ ಮಾಡಿದ ಆರೋಪಿಗಳಾದ ತಮಿಳುನಾಡು ಮೂಲದ ವಲ್ಲಿಯಮ್ಮ, ದೇವಿ ಅಲಿಯಾಸ್ ತಿಲೋತ್ತಮ ಹಾಗೂ ಪೊನ್ನಿ ಎಂಬವರನ್ನು ಕೇರಳದ ವಯನಾಡು ಜಿಲ್ಲೆಯ ಮಾನಂತವಾಡಿ ತಾಲೂಕಿನ ತಿರುನೆಲ್ಲಿ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದರು.

ಬಳಿಕ ಕುಂದಾಪುರ ಉಪವಿಭಾಗದ ಪೊಲೀಸ್ ಉಪಾಧೀಕ್ಷಕರ ನಿರ್ದೇಶನದಂತೆ ಕುಂದಾಪುರ ಪೊಲೀಸ್ ಠಾಣೆಯ ನಿರೀಕ್ಷಕರು ತನಿಖೆ ಮುಂದುವರಿಸಿದರು. ನ್ಯಾಯಾಲಯದ ಅನುಮತಿ ಪಡೆದು ಕೇರಳದ ವಯನಾಡು ಜಿಲ್ಲೆಯ ಮಾನಂತವಾಡಿ ಜೈಲಿನಲ್ಲಿದ್ದ ಮೂವರು ಆರೋಪಿಗಳನ್ನು ಈ ಪ್ರಕರಣಕ್ಕೆ ಸಂಬಂಧಿಸಿ ವಶಕ್ಕೆ ಪಡೆದು ಕುಂದಾಪುರಕ್ಕೆ ಕರೆತಂದು ವಿಚಾರಣೆ ನಡೆಸಿದ್ದಾರೆ.

ಈ ವೇಳೆ ಆರೋಪಿಗಳು ಸುಲಿಗೆ ಮಾಡಿದ್ದ ಸುಮಾರು 15.340 ಗ್ರಾಂ ತೂಕದ, ಅಂದಾಜು 2 ಲಕ್ಷ ರೂ. ಮೌಲ್ಯದ ಚಿನ್ನದ ಸರವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಪ್ರಕರಣದ ತನಿಖೆಯಲ್ಲಿ ಕುಂದಾಪುರ ಪೊಲೀಸ್ ಠಾಣೆಯ ಪಿಎಸ್ಐಗಳು ಹಾಗೂ ಸಿಬ್ಬಂದಿ ಸಹಕರಿಸಿದ್ದಾರೆ.


