ಉಡುಪಿ : ರಾಷ್ಟ್ರಕವಿ ಕುವೆಂಪು ರವರ ವಿಶ್ವ ಮಾನವ ಸಂದೇಶ ಪರಿಕಲ್ಪನೆಯನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಂಡಾಗ ಸಮಾಜ ಸುಧಾರಣೆ ಸಾಧ್ಯ ಎಂದು ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ.ಎ. ಗಫೂರ್ ಹೇಳಿದರು. ಅವರು ಉಡುಪಿಯ ಸರಕಾರಿ ಪದವಿ ಪೂರ್ವ ಕಾಲೇಜು (ಬೋರ್ಡ್ ಹೈಸ್ಕೂಲ್) ಜನತಾ ಸಭಾಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಕುವೆಂಪು ಜಯಂತಿ ಪ್ರಯುಕ್ತ ಆಯೋಜಿಸಿದ್ದ ವಿಶ್ವ ಮಾನವ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಕುವೆಂಪು ರವರು ಅಂಬೇಡ್ಕರ್, ಬಸವಣ್ಣ, ಬುದ್ಧ ಮೊದಲಾದ ಮಹನೀಯರ ತತ್ವಗಳನ್ನು ಹೊಸ ರೂಪದಲ್ಲಿ ಸಮಾಜಕ್ಕೆ ಪರಿಚಯಿಸಿ, ಎಲ್ಲಾ ಧರ್ಮಗಳೂ ಒಂದೇ, ಮಾನವೀಯತೆಯೇ ಮಹತ್ವದ್ದು ಎಂಬ ವಿಶ್ವ ಮಾನವ ಸಂದೇಶವನ್ನು ಜಗತ್ತಿಗೆ ಸಾರಿದರು. ಜಾತಿ, ಮತ, ಧರ್ಮಗಳ ಭೇದವಿಲ್ಲದೆ ಸಾಮರಸ್ಯದಿಂದ ಬದುಕುವ ಸಂದೇಶ ಕುವೆಂಪು ಅವರ ಸಾಹಿತ್ಯದ ಸಾರವಾಗಿದೆ ಎಂದರು. ಕುವೆಂಪು ರವರ ಕಥೆ, ಕಾದಂಬರಿ, ಕಾವ್ಯ ಹಾಗೂ ನಾಟಕಗಳು ಎಲ್ಲ ವಯೋಮಾನದವರಿಗೂ ಅನ್ವಯವಾಗುವಂತಹ ಜೀವನಮೌಲ್ಯಗಳನ್ನು ಒಳಗೊಂಡಿದ್ದು, ವಿದ್ಯಾರ್ಥಿಗಳು ಅವುಗಳನ್ನು ಅಧ್ಯಯನ ಮಾಡಿ ಉತ್ತಮ ನಾಗರಿಕರಾಗಿ ರೂಪುಗೊಳ್ಳಬೇಕು ಎಂದು ಸಲಹೆ ನೀಡಿದರು.

ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ. ವಿಷ್ಣುಮೂರ್ತಿ ಪ್ರಭು ಉಪನ್ಯಾಸ ನೀಡಿ ಮಾತನಾಡಿ, ಕುವೆಂಪು ರವರ ಜನ್ಮದಿನವನ್ನು ವಿಶ್ವ ಮಾನವ ದಿನಾಚರಣೆಯಾಗಿ ಆಚರಿಸಲಾಗುತ್ತಿದೆ. ಜಾತಿ–ಧರ್ಮಗಳ ಗಡಿಗಳನ್ನು ಮೀರಿ ಮಾನವೀಯತೆಯೇ ಮಹಾಧರ್ಮ ಎಂಬ ಸಂದೇಶವನ್ನು ಸಾರಿದ ಕುವೆಂಪು ಕನ್ನಡ ಸಾಹಿತ್ಯಕ್ಕೆ ಜ್ಞಾನಪೀಠ ಪ್ರಶಸ್ತಿ ತಂದುಕೊಟ್ಟ ಮೊದಲ ಸಾಹಿತಿ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ ಮಾತನಾಡಿ, ವಿಶ್ವ ಮಾನವ ಪ್ರಜ್ಞೆ ಪ್ರತಿಯೊಬ್ಬರಲ್ಲೂ ಬೆಳೆಬೇಕು. ಉತ್ತಮ ಸಾಹಿತ್ಯ ಅಧ್ಯಯನದಿಂದ ಮಾನವೀಯ ಮೌಲ್ಯಗಳು ವೃದ್ಧಿಯಾಗುತ್ತವೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಲೋಕೇಶ್ ಸಿ., ಕಾಲೇಜಿನ ಪ್ರಾಂಶುಪಾಲೆ ಲೀಲಾಭಟ್, ಅಧ್ಯಾಪಕರು, ವಿದ್ಯಾರ್ಥಿಗಳು ಹಾಗೂ ಇತರರು ಉಪಸ್ಥಿತರಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಸ್ವಾಗತಿಸಿ, ವರ್ಷಾ ನಿರೂಪಿಸಿದರು. ಭಾಗೀರಥಿ ವಂದಿಸಿದರು.



