Tuesday, March 10, 2026

spot_img

ಗ್ಯಾಸ್ ದರ ಏರಿಕೆ ಖಂಡಿಸಿ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ: ರಸ್ತೆಯಲ್ಲೇ ಚಹಾ ತಯಾರಿಸಿ ಆಕ್ರೋಶ

ಉಡುಪಿ: ಅಡುಗೆ ಗ್ಯಾಸ್ ಹಾಗೂ ವಾಣಿಜ್ಯ ಗ್ಯಾಸ್ ಸಿಲಿಂಡರ್‌ಗಳ ದರ ಏರಿಕೆ ಮಾಡಿರುವುದನ್ನು ಖಂಡಿಸಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಉಡುಪಿಯಲ್ಲಿ ಪ್ರತಿಭಟನೆ ನಡೆಯಿತು. ಜಿಲ್ಲಾ ಕಾಂಗ್ರೆಸ್ ಭವನದಿಂದ ಕಾರ್ಯಕರ್ತರು ಪ್ರತಿಭಟನಾ ಮೆರವಣಿಗೆಯ ಮೂಲಕ ಬ್ರಹ್ಮಗಿರಿ ಸರ್ಕಲ್‌ವರೆಗೆ ತೆರಳಿ ರಸ್ತೆಯಲ್ಲೇ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯ ವೇಳೆ ಕಾಂಗ್ರೆಸ್ ಮಹಿಳಾ ಕಾರ್ಯಕರ್ತೆಯರು ರಸ್ತೆಯಲ್ಲೇ ಒಲೆ ಹಚ್ಚಿ ಚಹಾ ತಯಾರಿಸಿ ಜನರಿಗೆ ಹಂಚುವ ಮೂಲಕ ವಿನೂತನವಾಗಿ ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭ ಮಾತನಾಡಿದ ಪ್ರತಿಭಟನಾಕಾರರು, ದೇಶದಲ್ಲಿ ಗ್ಯಾಸ್ ದರ ಸ್ವಲ್ಪ ಪ್ರಮಾಣದಲ್ಲೇ ಏರಿಕೆಯಾಗಿದ್ದರೂ ಹಿಂದೆ ಬಿಜೆಪಿ ತೀವ್ರ ಪ್ರತಿಭಟನೆ ನಡೆಸುತ್ತಿತ್ತು. ಆದರೆ ಈಗ ಬಿಜೆಪಿ ಕೇಂದ್ರದಲ್ಲಿ ಅಧಿಕಾರದಲ್ಲಿದ್ದು ಅಡುಗೆ ಸಿಲಿಂಡರ್‌ಗೆ 60 ರೂ. ಹಾಗೂ ವಾಣಿಜ್ಯ ಸಿಲಿಂಡರ್‌ಗೆ 115 ರೂ. ಹೆಚ್ಚಳ ಮಾಡಿರುವುದು ಜನರ ಮೇಲೆ ಮತ್ತಷ್ಟು ಹೊರೆ ತಂದಿದೆ ಎಂದು ಆರೋಪಿಸಿದರು.

ಗ್ಯಾಸ್ ದರ ಏರಿಕೆಯಿಂದ ದೇಶದ ಕೋಟ್ಯಂತರ ಜನರು ಸಂಕಷ್ಟಕ್ಕೆ ಸಿಲುಕಿದ್ದು, ವಾಣಿಜ್ಯ ಸಿಲಿಂಡರ್‌ಗಳ ಬೆಲೆ ಹೆಚ್ಚಳದಿಂದ ಹೋಟೆಲ್ ಉದ್ಯಮಕ್ಕೂ ಹೊಡೆತ ಬೀಳುವ ಆತಂಕವಿದೆ. ಕೇಂದ್ರ ಸರ್ಕಾರ ಜನರ ಸಂಕಷ್ಟದ ಬಗ್ಗೆ ಕಿಂಚಿತ್ತೂ ಕರುಣೆ ತೋರಿಸುತ್ತಿಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಗ್ಯಾಸ್ ಸಿಲಿಂಡರ್ ಮೇಲೆ ಪ್ರಧಾನಿ ನರೇಂದ್ರ ಮೋದಿ, ಅಮಿತ್ ಷಾ ಹಾಗೂ ನಿರ್ಮಲಾ ಸೀತಾರಾಮನ್ ಅವರ ಭಾವಚಿತ್ರಗಳನ್ನು ಅಂಟಿಸಿ ಪ್ರತಿಭಟನಾಕಾರರು ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ರಸ್ತೆಯಲ್ಲೇ ಪ್ರತಿಭಟನೆ ನಡೆದ ಕಾರಣ ಬ್ರಹ್ಮಗಿರಿ ಸರ್ಕಲ್‌ನಲ್ಲಿ ಸುಮಾರು ಅರ್ಧ ಗಂಟೆ ಕಾಲ ಸಂಚಾರ ಅಸ್ತವ್ಯಸ್ತಗೊಂಡಿತ್ತು.

ಪ್ರತಿಭಟನೆಯಲ್ಲಿ ಅಶೋಕ್ ಕುಮಾರ್ ಕೊಡವೂರು, ಎಂ.ಎ. ಗಫೂರ್, ದಿನೇಶ್ ಹೆಗ್ಡೆ ಮಳವಳ್ಳಿ, ವೆರೋನಿಕಾ ಕರ್ನೆಲಿಯೋ, ಜ್ಯೋತಿ ಹೆಬ್ಬಾರ್, ಹರೀಶ್ ಕಿಣಿ, ಶಂಕರ್ ಕುಂದರ್, ಗೋಪಿನಾಥ್ ಭಟ್, ಭುಜಂಗ ಶೆಟ್ಟಿ, ಭಾಸ್ಕರ್ ರಾವ್ ಕಿದಿಯೂರು, ಪ್ರಖ್ಯಾತ್ ಶೆಟ್ಟಿ, ಶಬ್ಬಿರ್ ಅಹ್ಮದ್, ಕೀರ್ತಿ ಶೆಟ್ಟಿ, ಸೇರಿದಂತೆ ಹಲವರು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles