ಉಡುಪಿ : ದೇಶದ ಪ್ರತಿಯೊಬ್ಬ ಪ್ರಜೆಗೂ ಭಾರತದ ಸಂವಿಧಾನದಲ್ಲಿ ಮೂಲಭೂತ ಹಕ್ಕು ಮತ್ತು ಕರ್ತವ್ಯಗಳನ್ನು ನೀಡಿದ್ದು, ಅದರ ಬಗ್ಗೆ ಪ್ರತಿಯೊಬ್ಬರೂ ಅರಿವು ಹೊಂದಿರುವುದರೊಂದಿಗೆ ಅಗತ್ಯಕ್ಕನುಗುಣವಾಗಿ ಕಾನೂನುಗಳನ್ನು ಬಳಕೆ ಮಾಡಿಕೊಳ್ಳಬೇಕು ಎಂದು ಕರ್ನಾಟಕ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಪ್ರಧಾನ ಪೋಷಕರಾದ ನ್ಯಾಯಮೂರ್ತಿ ವಿಭು ಬಖ್ರು ಹೇಳಿದರು.

ಅವರು ಕುಂದಾಪುರ ತಾಲೂಕು ಕೆರಾಡಿ ಗ್ರಾಮದ ವರಸಿದ್ಧಿ ವಿನಾಯಕ ಕಾಲೇಜಿನಲ್ಲಿ, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಉಡುಪಿ, ವಕೀಲರ ಸಂಘ ಕುಂದಾಪುರ, ಗ್ರಾಮ ಪಂಚಾಯತ್ ಕೆರಾಡಿ, ವೈಕುಂಠ ಬಾಳಿಗ ಕಾನೂನು ಕಾಲೇಜು ಉಡುಪಿ ಮತ್ತು ವರಸಿದ್ಧಿ ವಿನಾಯಕ ಕಾಲೇಜು ಕೆರಾಡಿ ಇವರ ಸಂಯುಕ್ತ ಆಶ್ರಯದಲ್ಲಿ ಗ್ರಾಮೀಣ ಸಮುದಾಯದವರ ಸಬಲೀಕರಣ : ಹಕ್ಕುಗಳು ಮತ್ತು ಯೋಜನೆಗಳ ಕುರಿತು ಕಾನೂನು ಅರಿವು ಮತ್ತು ನೆರವು ಶಿಬಿರವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.

ಜನಸಾಮಾನ್ಯರಲ್ಲಿ ಕಾನೂನಿನ ಬಗ್ಗೆ ಅರಿವು ಮೂಡಿಸುವುದರೊಂದಿಗೆ ಬಡವರು ಹಾಗೂ ಗ್ರಾಮೀಣ ಭಾಗದಲ್ಲಿ ಜನರಿಗೆ ಕಾನೂನಿನಲ್ಲಿ ತಮಗೆ ನೀಡಲಾದ ಹಕ್ಕು ಮತ್ತು ಕರ್ತವ್ಯಗಳನ್ನು ಅವರುಗಳ ಮನೆ ಬಾಗಿಲಿಗೆ ತಲುಪಿಸಿ, ಕಾನೂನಿನ ನೆರವು ಒದಗಿಸುವುದು ಕಾನೂನು ಸೇವೆಗಳ ಪ್ರಾಧಿಕಾರದ ಕರ್ತವ್ಯವಾಗಿದೆ. ಕೋರ್ಟ್ನ ಆವರಣದಲ್ಲಿ ಕಾಣುತ್ತಿದ್ದಂತಹ ನ್ಯಾಯದಾನ ಪ್ರಕ್ರಿಯೆ ಸಮುದಾಯಗಳ ನಡುವೆ ತಳ ಹಂತಕ್ಕೂ ಬಂದು ತಲುಪಬೇಕು. ಸಮುದಾಯಗಳ ಹೊಂದಾಣಿಕೆ, ಸಮುದಾಯಗಳ ಕಾರ್ಯಕ್ರಮ, ನ್ಯಾಯ ದಾನಗಳ ಪ್ರಕ್ರಿಯೆ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ತಲುಪಬೇಕು ಎನ್ನುವುದು ಕಾರ್ಯಕ್ರಮದ ಆಶಯವಾಗಿದೆ ಎಂದ ಅವರು, ಮಕ್ಕಳ ಪಂಚಾಯತ್ ನಂತಹ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಕೆರಾಡಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿದೆ ಎಂದರು.

ಬೆಂಗಳೂರು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹೆಚ್. ಶಶಿಧರ್ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯ ನಿರ್ವಾಹಕ ಅಧ್ಯಕ್ಷೆ ನ್ಯಾಯಮೂರ್ತಿ ಅನು ಸಿವರಾಮನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಕಾರ್ಯಕ್ರಮದಲ್ಲಿ ವರಸಿದ್ಧಿ ವಿನಾಯಕ ಕಾಲೇಜು ಕೆರಾಡಿ ಅಧ್ಯಕ್ಷ ಕೆರಾಡಿ ಚಂದ್ರಶೇಖರ ಶೆಟ್ಟಿ, ಕರ್ನಾಟಕ ಉಚ್ಚ ನ್ಯಾಯಾಲಯದ ಮಹಾ ವಿಲೇಖನಾಧಿಕಾರಿ ಕೆ. ಎಸ್ ಭರತ್ ಕುಮಾರ್, ಕೆರಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಸುದರ್ಶನ್ ಶೆಟ್ಟಿ, ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ, ಕುಂದಾಪುರ ವಕೀಲರ ಸಂಘದ ಅಧ್ಯಕ್ಷ ಶಿರಿಯಾರ ಗೋಪಾಲಕೃಷ್ಣ ಶೆಟ್ಟಿ, ಕಾಲೇಜುಗಳ ವಿದ್ಯಾರ್ಥಿಗಳು, ಸಾರ್ವಜನಿಕರು ಹಾಗೂ ಮತ್ತಿತರರು ಉಪಸ್ಥಿತರಿದ್ದರು. ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಕಿರಣ್ ಎಸ್ ಗಂಗಣ್ಣವರ್ ಸ್ವಾಗತಿಸಿ, ಕೆ. ಸಿ ರಾಜೇಶ್, ಪಿ.ಡಿ. ಓ ಸತೀಶ್ ವಡ್ಡರ್ಸೆ ಹಾಗೂ ರಾಘವೇಂದ್ರ ಚರಣ್ ನಾವಡ ನಿರೂಪಿಸಿ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮನು ಪಟೇಲ್ ಬಿ. ವೈ ವಂದಿಸಿದರು.

ಸುರೇಶ್ ಶೆಟ್ಟಿ ಮತ್ತು ಬಳಗದವರಿಂದ ಕರಾವಳಿ ಭಾಗದ ಸಂಪ್ರದಾಯ ಕಲೆ ಯಕ್ಷಗಾನದ ಪ್ರಾತ್ಯಕ್ಷಿಕೆ ನಡೆಯಿತು. ಸುಮಾರು 26 ಕ್ಕೂ ಹೆಚ್ಚು ವಿವಿಧ ಇಲಾಖೆಗಳು ತಮ್ಮ ಇಲಾಖೆಯ ವತಿಯಿಂದ ಲಭ್ಯವಿರುವ ಯೋಜನೆಗಳ ಮಾಹಿತಿಯನ್ನು ಒದಗಿಸುವ ಮಳಿಗೆಗಳನ್ನು ತೆರೆದಿದ್ದರು. ಇದೇ ಸಂದರ್ಭದಲ್ಲಿ ಮೂವರು ಫಲಾನುಭವಿಗಳಿಗೆ ಸಂಕೇತಿಕವಾಗಿ ಹಕ್ಕುಪತ್ರಗಳನ್ನು ಹಸ್ತಾಂತರಿಸಲಾಯಿತು.



