ಉಡುಪಿ : ಜಿಲ್ಲೆಯಲ್ಲಿ ದೀಪಾವಳಿ ಹಬ್ಬ ಆಚರಣೆ ಸಂದರ್ಭದಲ್ಲಿ ತಾತ್ಕಾಲಿಕ ಸುಡುಮದ್ದು ಮಾರಾಟ ಮಾಡುವವರು ಸಂಬಂಧಪಟ್ಟ ಇಲಾಖೆಗಳಿಂದ ನಿರಾಕ್ಷೇಪಣಾ ಪತ್ರವನ್ನು ಪಡೆದು, ನಿಯಮಾನುಸಾರ ಮಾರ್ಗಸೂಚಿಗಳನ್ನು ಪಾಲಿಸುವುದರೊಂದಿಗೆ ಯಾವುದೇ ಅನಾಹುತಗಳು ಸಂಭವಿಸದಂತೆ ಸುರಕ್ಷತಾ ಕ್ರಮಗಳನ್ನು ಅನುಸರಿಸುವಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ದೀಪಾವಳಿ ಹಬ್ಬದ ಸಮಯದಲ್ಲಿ ತಾತ್ಕಾಲಿಕ ಸುಡುಮದ್ದು ಮಾರಾಟ ಮಳಿಗೆಗಳನ್ನು ತೆರೆಯಲು ಅನುಮತಿ ನೀಡುವ ಕುರಿತು ಚರ್ಚಿಸುವ ಸಲುವಾಗಿ ಆಯೋಜಿಸಲಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

ದೀಪಾವಳಿ ಹಬ್ಬ ಹಿನ್ನೆಲೆ ಜಿಲ್ಲಾ ವ್ಯಾಪ್ತಿಯಲ್ಲಿ ನಿಗಧಿಪಡಿಸಿರುವ ತೆರೆದ ಪ್ರದೇಶಗಳಲ್ಲಿ ಹೊಸದಾಗಿ ಪಟಾಕಿ ಮಾರಾಟ ಮಳಿಗೆಗಳನ್ನು ತೆರೆಯುವವರಿಗೆ ಅರ್ಜಿ ಸಲ್ಲಿಸಲು ಅಕ್ಟೋಬರ್ 10 ರ ವರೆಗೆ ಕಾಲಾವಕಾಶ ಕಲ್ಪಿಸಲಾಗಿದೆ. ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಅಗ್ನಿಶಾಮಕ, ಪೊಲೀಸ್ ಇಲಾಖೆ, ತಹಶೀಲ್ದಾರರ ಕಛೇರಿ ಹಾಗೂ ಸ್ಥಳೀಯ ಸಂಸ್ಥೆಗಳಿಂದ ಪಡೆದ ನಿರಾಕ್ಷೇಪಣಾ ಪತ್ರವನ್ನು ಕಡ್ಡಾಯವಾಗಿ ಸಲ್ಲಿಸಬೇಕು. ತಾತ್ಕಾಲಿಕ ಸುಡುಮದ್ದು ಮಾರಾಟ ಮಳಿಗೆಗಳನ್ನು ತೆರೆಯಲು ಅನುಮತಿ ನೀಡುವ ಮೊದಲು ತಹಶೀಲ್ದಾರರ ನೇತೃತ್ವದ ಸಮಿತಿಯು ಖುದ್ದು ಸ್ಥಳ ಪರಿಶೀಲನೆ ನಡೆಸುವುದರೊಂದಿಗೆ, ಅಂಗಡಿ ಮುಂಗಟ್ಟುಗಳ ಸಮೀಪದಲ್ಲಿ, ಜನನಿಬಿಡ ಪ್ರದೇಶಗಳಲ್ಲಿ, ಸಂಚಾರ ವ್ಯವಸ್ಥೆಗೆ ಅಡಚಣೆಯಾಗುವ ಕಡೆಗಳಲ್ಲಿ, ಪಟಾಕಿ ಮಳಿಗೆಗಳನ್ನು ತೆರೆಯಲು ಅನುಮತಿ ನೀಡಬಾರದು ಎಂದರು.

ಸಭೆಯಲ್ಲಿ ಸಹಾಯಕ ಕಮೀಷನರ್ ರಶ್ಮಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಧಾಕರ್ ನಾಯಕ್, ನಗರಸಭೆ ಆಯುಕ್ತ ಮಹಾಂತೇಶ ಹಂಗರಗಿ, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು, ತಹಶೀಲ್ದಾರರುಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಜಿಲ್ಲೆಯಲ್ಲಿ ಪ್ರತಿ ವರ್ಷದಂತೆ ಈ ಬಾರಿಯು ದೀಪಾವಳಿ ಹಬ್ಬವನ್ನು ಆಚರಿಸುವ ಸಮಯದಲ್ಲಿ ರಾಜ್ಯ ಸರ್ಕಾರದ ಸೂಚನೆಯಂತೆ ಹಸಿರು ಪಟಾಕಿಗಳನ್ನು ಮಾತ್ರ ಬಳಸಬೇಕು. ಎಲ್ಲಾ ಮಳಿಗೆ ಹಾಗೂ ಗೋದಾಮುಗಳಲ್ಲಿ ಹಸಿರು ಪಟಾಕಿ ಹೊರತುಪಡಿಸಿ, ನಿಷೇಧಿತ ಪಟಾಕಿಗಳನ್ನು ದಾಸ್ತಾನು ಮಾಡುವಂತಿಲ್ಲ ತಾಲೂಕು ಸಮಿತಿಯು ಈ ಬಗ್ಗೆ ಆಗಿಂದಾಗ್ಗೆ ಪರಿಶೀಲನೆ ನಡೆಸುವಂತೆ ಸೂಚನೆ ನೀಡಿದ ಅವರು, ನಿಯಮಬಾಹಿರವಾಗಿ ಪಟಾಕಿ ದಾಸ್ತಾನು ಮಾಡಿರುವುದು ಕಂಡುಬಂದಲ್ಲಿ ಅಂತಹವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಸ್ವರೂಪ ಟಿ.ಕೆ (ಜಿಲ್ಲಾಧಿಕಾರಿ)


