ಉಡುಪಿ : ಪಲ್ಸ್ ಪೊಲಿಯೋ ಕಾರ್ಯಕ್ರಮವು ಡಿಸೆಂಬರ್ 21 ರಂದು ಜಿಲ್ಲೆಯಾದ್ಯಂತ ನಡೆಯಲಿದ್ದು, ಲಸಿಕಾ ಕೇಂದ್ರಗಳಲ್ಲಿ ಬೆಳಗ್ಗೆ 8 ರಿಂದ ಸಂಜೆ 5 ರ ವರೆಗೆ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಲಸಿಕೆ ನೀಡುತ್ತಿದ್ದು, ಪೋಷಕರು ತಮ್ಮ ಮಕ್ಕಳನ್ನು ತಪ್ಪದೇ ಲಸಿಕಾ ಕೇಂದ್ರಗಳಿಗೆ ಕರೆದೊಯ್ದು ತಪ್ಪದೇ ಲಸಿಕೆ ಹಾಕಿಸಬೇಕೆಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಕರೆ ನೀಡಿದರು.

ಅವರು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮದ ಜಿಲ್ಲಾ ಲಸಿಕಾ ಕಾರ್ಯಪಡೆ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

ಜಿಲ್ಲೆಯಲ್ಲಿ ಒಟ್ಟು 75,395 ಐದು ವರ್ಷದೊಳಗಿನ ಮಕ್ಕಳನ್ನು ಈಗಾಗಲೇ ಗುರುತಿಸಲಾಗಿದೆ. ಮಕ್ಕಳಿಗೆ ಲಸಿಕೆಗಳನ್ನು ನೀಡಲು ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಲಸಿಕಾ ಕೇಂದ್ರಗಳ ಜೊತೆಯಲ್ಲಿ ಟ್ರಾನ್ಸಿಟ್ 16 ಬೂತುಗಳು, 5 ಮೊಬೈಲ್ ಟೀಮ್ಗಳಿದ್ದು, 2180 ಲಸಿಕೆದಾರರು ಹಾಗೂ 155 ಮೇಲ್ವಿಚಾರಕರನ್ನು ನೇಮಿಸಲಾಗಿದೆ. ನಗರಸಭಾ ವ್ಯಾಪ್ತಿಯಲ್ಲಿ 272 ಸ್ವಯಂ ಸೇವಕರನ್ನು ನಿಯುಕ್ತಿಗೊಳಿಸಲಾಗಿದ್ದು ಲಸಿಕೆದಾರರಿಗೆ ಲಸಿಕೆ ನೀಡುವ ಬಗ್ಗೆ ತರಬೇತಿ ನೀಡಲಾಗಿದೆ ಎಂದರು. ಇದೇ ಸಂದರ್ಭದಲ್ಲಿ ರಾಷ್ಟ್ರೀಯ ಪಲ್ಸ್ ಪೊಲಿಯೋ ಕಾರ್ಯಕ್ರಮದ ಕುರಿತು ಭಿತ್ತಿಪತ್ರವನ್ನು ಬಿಡುಗಡೆಗೊಳಿಸಲಾಯಿತು

ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಬಸವರಾಜ ಹುಬ್ಬಳ್ಳಿ, ನಗರಸಭೆ ಪೌರಾಯುಕ್ತ ಮಹಾಂತೇಶ ಹಂಗರಗಿ, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ಪ್ರಶಾಂತ್ ಭಟ್, ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ. ಚಿದಾನಂದ ಸಂಜು, ಜಿಲ್ಲಾ ಸರ್ವೇಕ್ಷಣಾ ಅಧಿಕಾರಿ ಡಾ. ನಾಗರತ್ನ, ಜಿಲ್ಲಾ ಕುಷ್ಠರೋಗ ನಿವಾರಣಾಧಿಕಾರಿ ಡಾ.ಲತಾ ನಾಯಕ್, ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ. ಜ್ಯೋತ್ಸ್ನಾ ಬಿ.ಕೆ, ವಿವಿಧ ಜಿಲ್ಲಾ ಮಟ್ಟದ ಅನುಷ್ಠಾನಾಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.



