Monday, May 25, 2026

spot_img

ಡೀಮ್ಡ್ ಅರಣ್ಯ ಸಮಸ್ಯೆ ಪರಿಹಾರಕ್ಕೆ ಸರ್ಕಾರ ಗಂಭೀರ ಕ್ರಮ:  ಸುಪ್ರೀಂ ಕೋರ್ಟ್‌ಗೆ ಮರು ಮನವಿ ಸಲ್ಲಿಸಲು ಸಮಿತಿ ರಚನೆ

ಉಡುಪಿ : ರಾಜ್ಯದಾದ್ಯಂತ ಸಾರ್ವಜನಿಕರು ಹಾಗೂ ರೈತರ ಆತಂಕಕ್ಕೆ ಕಾರಣವಾಗಿರುವ ಡೀಮ್ಡ್ ಅರಣ್ಯ ಸಮಸ್ಯೆಯನ್ನು ಪರಿಹರಿಸಲು ರಾಜ್ಯ ಸರ್ಕಾರ ಗಂಭೀರ ಕ್ರಮ ಕೈಗೊಂಡಿದ್ದು, ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದ ಲೋಪಗಳನ್ನು ಸರಿಪಡಿಸಲು ಪ್ರಾಮಾಣಿಕ ಪ್ರಯತ್ನ ನಡೆಯುತ್ತಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.

ಕಾರ್ಕಳದಲ್ಲಿ ವಲಯ ಅರಣ್ಯಾಧಿಕಾರಿಗಳ ಹಾಗೂ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳ ನೂತನ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದ ಅವರು, ಡೀಮ್ಡ್ ಅರಣ್ಯ ಸಮಸ್ಯೆ ಪರಿಹಾರಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ಗೆ ಮರು ಮನವಿ ಸಲ್ಲಿಸಲು ಜಿಲ್ಲಾ ಹಾಗೂ ರಾಜ್ಯ ಮಟ್ಟದಲ್ಲಿ ವಿಶೇಷ ಸಮಿತಿಗಳನ್ನು ರಚಿಸಲಾಗಿದೆ ಎಂದು ಹೇಳಿದರು.

ಹಿಂದೆ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಲಾಗಿದ್ದ ಪ್ರಮಾಣಪತ್ರದಲ್ಲಿ ಸುಮಾರು 9 ಲಕ್ಷ ಹೆಕ್ಟೇರ್ ಪ್ರದೇಶವನ್ನು ಡೀಮ್ಡ್ ಅರಣ್ಯ ಎಂದು ಗುರುತಿಸಲಾಗಿತ್ತು. ಬಳಿಕ 2022ರಲ್ಲಿ ಅದನ್ನು 3.33 ಲಕ್ಷ ಹೆಕ್ಟೇರ್‌ಗೆ ಇಳಿಸಲಾಯಿತು. ಆದರೆ ಸರಿಯಾದ ಸರ್ವೆ ಹಾಗೂ ಸ್ಥಳ ಪರಿಶೀಲನೆ ನಡೆಸದೆ ಪಟ್ಟಾ ಜಮೀನುಗಳು, ಶಾಲೆಗಳು, ಆಸ್ಪತ್ರೆಗಳು, ಅಂಗನವಾಡಿಗಳು ಹಾಗೂ ಸರ್ಕಾರಿ ಕಟ್ಟಡಗಳನ್ನು ಕೂಡ ಅರಣ್ಯ ಪ್ರದೇಶದೊಳಗೆ ಸೇರಿಸಿರುವ ಪರಿಣಾಮ ಸಾರ್ವಜನಿಕರಿಗೆ ಸಮಸ್ಯೆ ಉಂಟಾಗಿದೆ ಎಂದು ಅವರು ತಿಳಿಸಿದರು.

ಈ ಹಿನ್ನೆಲೆಯಲ್ಲಿ ರೈತರು, ಬಡ ಮತ್ತು ಮಧ್ಯಮ ವರ್ಗದ ಜನರು ಸಂಕಷ್ಟ ಎದುರಿಸುತ್ತಿದ್ದು, ಈ ಲೋಪಗಳನ್ನು ಸರಿಪಡಿಸಲು ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು. ಕುದುರೆಮುಖ ಕಬ್ಬಿಣದ ಅದಿರು ಕಂಪನಿ ಅರಣ್ಯ ಇಲಾಖೆಗೆ ಪಾವತಿಸಬೇಕಿರುವ ದಂಡ ಮತ್ತು ಇತರ ಶುಲ್ಕಗಳ ಕುರಿತು ಪ್ರತಿಕ್ರಿಯಿಸಿದ ಸಚಿವರು, ಈ ಸಂಬಂಧ ಹೈಕೋರ್ಟ್ ನಿರ್ದೇಶನ ನೀಡಿದ್ದು, ನ್ಯಾಯಾಲಯದ ಆದೇಶದಂತೆ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಹೇಳಿದರು.

ಅರಣ್ಯ ರಕ್ಷಣೆಯಲ್ಲಿ ಮುಂಚೂಣಿ ಸಿಬ್ಬಂದಿಯ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಆದ್ದರಿಂದ ಅವರಿಗೆ ವಿದ್ಯುತ್ ಪ್ರವಹಿಸುವ ಕೈಗೋಲು, ಮಳೆಯ ಜಾಕೆಟ್, ಶೂ ಸೇರಿದಂತೆ ಅಗತ್ಯ ಸುರಕ್ಷತಾ ಸಲಕರಣೆಗಳನ್ನು ಒದಗಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಸಚಿವರು ತಿಳಿಸಿದರು.

ಆನೆ ಕಾರ್ಯಪಡೆ, ಕಳ್ಳಬೇಟೆ ನಿಗ್ರಹ ಪಡೆ ಹಾಗೂ ಅರಣ್ಯ ಸಿಬ್ಬಂದಿಗೆ ವಸತಿ ಸೌಲಭ್ಯ ಹಾಗೂ ಅಪಾಯ ಭತ್ಯೆ (ರಿಸ್ಕ್ ಅಲೊಯನ್ಸ್) ನೀಡುವ ಕುರಿತು ಪರಿಶೀಲನೆ ನಡೆಸುವಂತೆ ಕೂಡ ಸೂಚಿಸಲಾಗಿದೆ. ಕಾರ್ಯಕ್ರಮದ ಬಳಿಕ ಸಚಿವರು ಅರಣ್ಯ ಇಲಾಖೆ ಕಚೇರಿ ಆವರಣದಲ್ಲಿ ಸಸಿ ನೆಟ್ಟು ನೀರೆರೆದರು. ಬಳಿಕ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಈ ಸಂದರ್ಭದಲ್ಲಿ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಕರಿಕಳನ್, ಕಮಲಾ ಕರಿಕಳನ್ ಸೇರಿದಂತೆ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles