ಉಡುಪಿ : ಜಿಲ್ಲೆಯಾದ್ಯಂತ ಜೂನ್ 28ರಂದು ನಡೆಯಲಿರುವ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮದಲ್ಲಿ 0 ರಿಂದ 5 ವರ್ಷದೊಳಗಿನ ಯಾವುದೇ ಮಗು ಲಸಿಕೆಯಿಂದ ಹೊರಗುಳಿಯದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ರಜತಾದ್ರಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮದ ಜಿಲ್ಲಾ ಲಸಿಕಾ ಕಾರ್ಯಪಡೆ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜೂನ್ 28ರಂದು ಜಿಲ್ಲೆಯಾದ್ಯಂತ ನಡೆಯಲಿರುವ ಲಸಿಕಾ ಕಾರ್ಯಕ್ರಮದಲ್ಲಿ 0-5 ವರ್ಷದೊಳಗಿನ ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ ನೀಡಲಾಗುತ್ತಿದ್ದು, ಪ್ರತಿಯೊಬ್ಬ ಪೋಷಕರು ತಪ್ಪದೇ ತಮ್ಮ ಮಕ್ಕಳಿಗೆ ಲಸಿಕೆ ಹಾಕಿಸಬೇಕು ಎಂದು ಅವರು ಮನವಿ ಮಾಡಿದರು.

ಭಾರತದಲ್ಲಿ ಕೊನೆಯದಾಗಿ 2011ರ ಜನವರಿ 13ರಂದು ಪೋಲಿಯೋ ಪ್ರಕರಣ ವರದಿಯಾಗಿದ್ದು, ಬಳಿಕ ಯಾವುದೇ ಪ್ರಕರಣಗಳು ಪತ್ತೆಯಾಗಿಲ್ಲ. 2014ರಲ್ಲಿ ವಿಶ್ವ ಆರೋಗ್ಯ ಸಂಸ್ಥೆ ಭಾರತವನ್ನು ಪೋಲಿಯೋ ಮುಕ್ತ ರಾಷ್ಟ್ರ ಎಂದು ಘೋಷಿಸಿತ್ತು. ಆದರೆ ನೆರೆಯ ರಾಷ್ಟ್ರಗಳಾದ ಪಾಕಿಸ್ತಾನ ಹಾಗೂ ಅಪಘಾನಿಸ್ತಾನಗಳಲ್ಲಿ ಇನ್ನೂ ಕೆಲವು ಪೋಲಿಯೋ ಪ್ರಕರಣಗಳು ವರದಿಯಾಗುತ್ತಿರುವ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ದೇಶದಲ್ಲಿ ಪಲ್ಸ್ ಪೋಲಿಯೋ ಕಾರ್ಯಕ್ರಮ ಮುಂದುವರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹೇಳಿದರು.

ಕಳೆದ ವರ್ಷದ ಡಿಸೆಂಬರ್‌ನಲ್ಲಿ ನಡೆದ ಪಲ್ಸ್ ಪೋಲಿಯೋ ಕಾರ್ಯಕ್ರಮದಲ್ಲಿ ಜಿಲ್ಲೆಯ ಒಟ್ಟು 65,401 ಮಕ್ಕಳಿಗೆ ಲಸಿಕೆ ನೀಡುವ ಮೂಲಕ ಶೇ.103ರಷ್ಟು ಗುರಿ ಸಾಧನೆ ಮಾಡಲಾಗಿದೆ ಎಂದು ಅವರು ಮಾಹಿತಿ ನೀಡಿದರು. ಈ ಬಾರಿ ಜೂನ್‌ನಲ್ಲಿ ನಡೆಯಲಿರುವ ಕಾರ್ಯಕ್ರಮಕ್ಕಾಗಿ ಜಿಲ್ಲೆಯಾದ್ಯಂತ 0-5 ವರ್ಷದೊಳಗಿನ ಅಂದಾಜು 63,524 ಮಕ್ಕಳನ್ನು ಗುರುತಿಸಲಾಗಿದ್ದು, ಸಮೀಕ್ಷೆ ಪ್ರಗತಿಯಲ್ಲಿದೆ ಎಂದರು.

ಮಕ್ಕಳಿಗೆ ಲಸಿಕೆ ನೀಡಲು ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಒಟ್ಟು 668 ಲಸಿಕಾ ಕೇಂದ್ರಗಳನ್ನು ತೆರೆಯಲಾಗುತ್ತಿದೆ. ಜೊತೆಗೆ 18 ಟ್ರಾನ್ಸಿಟ್ ಬೂತ್‌ಗಳು, 5 ಮೊಬೈಲ್ ತಂಡಗಳು, 1363 ಲಸಿಕಾ ತಂಡಗಳು ಹಾಗೂ 155 ಮೇಲ್ವಿಚಾರಕರನ್ನು ನೇಮಕ ಮಾಡಲಾಗಿದೆ. ಈ ಸಂದರ್ಭದಲ್ಲಿ ಹೆಣ್ಣು ಮಕ್ಕಳಲ್ಲಿ ಕಾಣಿಸಿಕೊಳ್ಳುವ ಗರ್ಭಕಂಠ ಕ್ಯಾನ್ಸರ್ ತಡೆಗಟ್ಟಲು 14 ವರ್ಷ ಮೇಲ್ಪಟ್ಟು 15 ವರ್ಷದೊಳಗಿನ ಹೆಣ್ಣು ಮಕ್ಕಳು ಹೆಚ್.ಪಿ.ವಿ ಲಸಿಕೆ ಪಡೆಯುವಂತೆ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸುವಂತೆ ಕೂಡ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಸಭೆಯಲ್ಲಿ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಸುಬ್ರಹ್ಮಣ್ಯ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಬಸವರಾಜ ಹುಬ್ಬಳ್ಳಿ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ನಾಗರತ್ನ, ಜಿಲ್ಲಾ ಕುಷ್ಠರೋಗ ನಿವಾರಣಾಧಿಕಾರಿ ಡಾ. ಲತಾ ನಾಯಕ್, ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ. ಜ್ಯೋತ್ಸ್ನಾ ಬಿ.ಕೆ ಸೇರಿದಂತೆ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.



