ಉಡುಪಿ: ಪ್ರಧಾನಮಂತ್ರಿ ಸೂರ್ಯ ಘರ್ ಯೋಜನೆಯಡಿ ಉಡುಪಿ ಜಿಲ್ಲೆಯಲ್ಲಿ ಸೌರ ವಿದ್ಯುತ್ ಅಳವಡಿಕೆಗೆ ಉತ್ತಮ ಸ್ಪಂದನೆ ವ್ಯಕ್ತವಾಗಿದ್ದು, ಈ ಯೋಜನೆಗಾಗಿ ಸುಮಾರು 10 ಕೋಟಿ ಅನುದಾನ ಬಿಡುಗಡೆಗೊಂಡಿದೆ ಎಂದು ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. 2024-25ನೇ ಸಾಲಿನಲ್ಲಿ ಜಿಲ್ಲೆಗೆ 302 ಫಲಾನುಭವಿಗಳ ಗುರಿ ನಿಗದಿಪಡಿಸಲಾಗಿದ್ದರೂ, 490 ಗೃಹ ಬಳಕೆದಾರರು ಯೋಜನೆಯ ಸೌಲಭ್ಯವನ್ನು ಪಡೆದಿದ್ದಾರೆ. ಅದೇ ರೀತಿ 2025-26ನೇ ಸಾಲಿನಲ್ಲಿ 240 ಮನೆಗಳಿಗೆ ಸೋಲಾರ್ ಅಳವಡಿಕೆ ಗುರಿ ಇಡಲಾಗಿದ್ದರೂ, ನಿರೀಕ್ಷೆ ಮೀರಿ 868 ಮನೆಗಳಲ್ಲಿ ಸೋಲಾರ್ ವ್ಯವಸ್ಥೆ ಅಳವಡಿಸಲಾಗಿದೆ ಎಂದು ಮಾಹಿತಿ ನೀಡಿದರು.

ಜಿಲ್ಲೆಯಲ್ಲಿ ಈಗಾಗಲೇ 4,546 ಅರ್ಜಿಗಳು ಸಲ್ಲಿಕೆಯಾಗಿದ್ದು, ಅವುಗಳಲ್ಲಿ 1,258 ಮನೆಗಳಿಗೆ ಸಬ್ಸಿಡಿ ಮಂಜೂರಾಗಿದೆ. ಒಟ್ಟು 1,280 ಕುಟುಂಬಗಳಿಗೆ ತಲಾ ₹78,000 ರಂತೆ ಸಬ್ಸಿಡಿ ನೀಡಲಾಗಿದ್ದು, ಸುಮಾರು ₹9.98 ಕೋಟಿ ನೇರವಾಗಿ ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗಿದೆ ಎಂದರು. ಮುಂದಿನ ದಿನಗಳಲ್ಲಿ ಹೆಚ್ಚಿನ ಮನೆಗಳ ಮೇಲ್ಚಾವಣಿಗಳ ಮೇಲೆ ಸೌರ ವಿದ್ಯುತ್ ಘಟಕಗಳನ್ನು ಅಳವಡಿಸಲು ಮೆಸ್ಕಾಂ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಸಂಸದರು ಸೂಚಿಸಿದರು.

ಇದೇ ವೇಳೆ ಕುಸುಮ್-ಸಿ ಯೋಜನೆಯಡಿ ಬೈಂದೂರು ತಾಲೂಕಿನ ಕಿರಿಮಂಜೇಶ್ವರ, ಬ್ರಹ್ಮಾವರ ತಾಲೂಕಿನ ಕಾವಡಿ ಹಾಗೂ ಕಾಪು ತಾಲೂಕಿನ ಬೆಳ್ಳೆ ಪ್ರದೇಶಗಳಲ್ಲಿ ಸೌರ ವಿದ್ಯುತ್ ಘಟಕಗಳನ್ನು ಸ್ಥಾಪಿಸಲು ಕೇಂದ್ರ ಸರ್ಕಾರ ₹40 ಕೋಟಿ ಮಂಜೂರು ಮಾಡಿದೆ. ಆದರೆ ಅರಣ್ಯ ಇಲಾಖೆ ಅನುಷ್ಠಾನಕ್ಕೆ ಅಡಚಣೆ ಮಾಡುತ್ತಿರುವ ಬಗ್ಗೆ ಮೆಸ್ಕಾಂ ಅಧಿಕಾರಿಗಳು ಸಭೆಯಲ್ಲಿ ಗಮನಕ್ಕೆ ತಂದರು. ಈ ಹಿನ್ನೆಲೆಯಲ್ಲಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಅರಣ್ಯ ಹಾಗೂ ಕಂದಾಯ ಇಲಾಖೆಯ ಉನ್ನತ ಅಧಿಕಾರಿಗಳೊಂದಿಗೆ ದೂರವಾಣಿ ಮೂಲಕ ಮಾತುಕತೆ ನಡೆಸಿ, ಅನಾವಶ್ಯಕ ಅಡಚಣೆಗಳನ್ನು ತಪ್ಪಿಸಿ ಯೋಜನೆಗಳನ್ನು ಶೀಘ್ರ ಅನುಷ್ಠಾನಗೊಳಿಸುವಂತೆ ಸೂಚಿಸಿದರು. ಕೇಂದ್ರ ಸರ್ಕಾರದ ಅನುದಾನ ವ್ಯರ್ಥವಾಗದಂತೆ ಜಾಗ್ರತೆ ವಹಿಸಬೇಕು ಎಂದರು. ಕುಸುಮ್-ಸಿ ಯೋಜನೆಗೆ 2026ರ ಮಾರ್ಚ್ ಅಂತ್ಯದವರೆಗೆ ಗಡುವು ನಿಗದಿಪಡಿಸಲಾಗಿದ್ದು, ಅದನ್ನು ಮೇ 2026ರವರೆಗೆ ವಿಸ್ತರಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗಿದೆ ಎಂದು ಸಂಸದರು ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಪ್ರತೀಕ್ ಬಾಯಲ್, ಯೋಜನಾ ನಿರ್ದೇಶಕ ಉದಯ್ ಕುಮಾರ್ ಶೆಟ್ಟಿ, ಮೆಸ್ಕಾಂ ಅಧೀಕ್ಷಕ ರಾಕೇಶ್, ಸಹಾಯಕ ಕಾರ್ಯಪಾಲಕ ಅಭಿಯಂತರ ಯಶವಂತ್ ಸೇರಿದಂತೆ ಸಂಬಂಧಿತ ಅಧಿಕಾರಿಗಳು ಉಪಸ್ಥಿತರಿದ್ದರು.



