ಉಡುಪಿ : ಪ್ರೀತಿ ನಿರಾಕರಿಸಿದ್ದಕ್ಕೆ ಭಗ್ನ ಪ್ರೇಮಿಯೊಬ್ಬ ಯುವತಿಯ ಮೇಲೆ ಮಾರಣಾಂತಿಕ ದಾಳಿ ನಡೆಸಿ ಕೊಲೆಗೆ ಯತ್ನಿಸಿದ ಘಟನೆ ಮಣಿಪಾಲ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಅಂಕೋಲ ಮೂಲದ ಯೋಗಿತಾ (23) ಹಲ್ಲೆಗೆ ಒಳಗಾದ ಯುವತಿಯಾಗಿದ್ದು, ಅವರು ಮಣಿಪಾಲ-ಅಲೆವೂರು ರಸ್ತೆಯ ಶಾಂತಿನಗರ ಸಮೀಪದ ಐಡಿಯಲ್ ಬಿಲ್ಡಿಂಗ್ನ ಮಹಿಳಾ ಪಿಜಿಯಲ್ಲಿ ವಾಸವಾಗಿದ್ದರು.

ಮಂಗಳವಾರ ರಾತ್ರಿ ಪಿಜಿಗೆ ನುಗ್ಗಿದ ದುಷ್ಕರ್ಮಿ ಯುವತಿಯ ಮೇಲೆ ಚೂರಿಯಿಂದ ಏಕಾಏಕಿ ದಾಳಿ ನಡೆಸಿದ್ದಾನೆ ಎಂದು ತಿಳಿದುಬಂದಿದೆ. ಚೂರಿ ಇರಿತದಿಂದ ಗಂಭೀರವಾಗಿ ಗಾಯಗೊಂಡ ಯೋಗಿತಾಳನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ವೈದ್ಯರು ಆಕೆಯ ಆರೋಗ್ಯದ ಮೇಲೆ ನಿಗಾ ವಹಿಸಿದ್ದಾರೆ.

ಪ್ರಾಥಮಿಕ ತನಿಖೆಯ ಪ್ರಕಾರ, ಯುವತಿ ಪ್ರೀತಿ ನಿರಾಕರಿಸಿದ್ದಕ್ಕೆ ಕೋಪಗೊಂಡ ಭಗ್ನ ಪ್ರೇಮಿಯೇ ಈ ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದೆ. ದಾಳಿ ಬಳಿಕ ಆರೋಪಿ ಸ್ಥಳದಿಂದ ಪರಾರಿಯಾಗಿದ್ದು, ಆತನ ಬಂಧನಕ್ಕಾಗಿ ಪೊಲೀಸರು ವ್ಯಾಪಕ ಶೋಧ ಕಾರ್ಯಾಚರಣೆ ಆರಂಭಿಸಿದ್ದಾರೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪಿಜಿಯ ಸಿಸಿಟಿವಿ ದೃಶ್ಯಾವಳಿ ಪರಿಶೀಲನೆ ನಡೆಸಲಾಗುತ್ತಿದ್ದು, ಸ್ಥಳೀಯರಿಂದಲೂ ಮಾಹಿತಿ ಸಂಗ್ರಹಿಸಲಾಗಿದೆ. ಆರೋಪಿಯ ಪತ್ತೆಗೆ ವಿಶೇಷ ತಂಡಗಳನ್ನು ರಚಿಸಲಾಗಿದೆ ಎಂದು ತಿಳಿದುಬಂದಿದೆ. ಶಾಂತವಾಗಿದ್ದ ಪಿಜಿ ಪ್ರದೇಶದಲ್ಲಿ ನಡೆದ ಈ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದ್ದು, ರಾತ್ರಿ ವೇಳೆಯಲ್ಲಿ ಮಹಿಳೆಯರ ಸುರಕ್ಷತೆ ಕುರಿತ ಪ್ರಶ್ನೆಗಳು ಮತ್ತೆ ಎದುರಾಗಿದೆ.



