ಉಡುಪಿ : ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ ರಾಷ್ಟ್ರಧ್ವಜಕ್ಕೆ ಅಪಮಾನವಾಗುವುದನ್ನು ತಡೆಯುವ ನಿಟ್ಟಿನಲ್ಲಿ ಪ್ಲಾಸ್ಟಿಕ್ ರಾಷ್ಟ್ರಧ್ವಜಗಳ ತಯಾರಿಕೆ ಹಾಗೂ ಮಾರಾಟಕ್ಕೆ ಕಡಿವಾಣ ಹಾಕುವಂತೆ ಆಗ್ರಹಿಸಿ ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಉಡುಪಿ ಜಿಲ್ಲೆಯಾದ್ಯಂತ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ವಿವಿಧ ತಾಲೂಕುಗಳ ತಹಶೀಲ್ದಾರರಿಗೆ ಮನವಿ ಸಲ್ಲಿಸಲಾಯಿತು.

ರಾಷ್ಟ್ರಧ್ವಜವು ದೇಶದ ಏಕತೆ, ಅಖಂಡತೆ ಹಾಗೂ ರಾಷ್ಟ್ರಾಭಿಮಾನದ ಸಂಕೇತವಾಗಿದೆ. ಸ್ವಾತಂತ್ರ್ಯೋತ್ಸವ ಮತ್ತು ಗಣರಾಜ್ಯೋತ್ಸವದ ಸಂದರ್ಭದಲ್ಲಿ ವ್ಯಾಪಕವಾಗಿ ರಾಷ್ಟ್ರಧ್ವಜಗಳನ್ನು ಬಳಸಲಾಗುತ್ತದೆ. ಆದರೆ ಹಬ್ಬದ ಬಳಿಕ ಸಣ್ಣ ಗಾತ್ರದ ಪ್ಲಾಸ್ಟಿಕ್ ರಾಷ್ಟ್ರಧ್ವಜಗಳು ರಸ್ತೆ ಬದಿ, ಕಸದ ರಾಶಿ ಹಾಗೂ ಚರಂಡಿಗಳಲ್ಲಿ ಕಂಡುಬರುವುದರಿಂದ ರಾಷ್ಟ್ರಧ್ವಜಕ್ಕೆ ಅಗೌರವವಾಗುವುದರ ಜೊತೆಗೆ ಪರಿಸರಕ್ಕೂ ಹಾನಿಯಾಗುತ್ತಿದೆ ಎಂದು ಸಮಿತಿ ಮನವಿಯಲ್ಲಿ ತಿಳಿಸಿದೆ.

ಪ್ಲಾಸ್ಟಿಕ್ ರಾಷ್ಟ್ರಧ್ವಜಗಳ ತಯಾರಿಕೆ ಮತ್ತು ಮಾರಾಟವನ್ನು ತಡೆಯಲು ಸೂಕ್ತ ಕ್ರಮ ಕೈಗೊಳ್ಳಬೇಕು. ರಾಷ್ಟ್ರಧ್ವಜದ ಗೌರವ ಹಾಗೂ ಸಂರಕ್ಷಣೆಯ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು ಎಂದು ಜಿಲ್ಲಾಡಳಿತ ಮತ್ತು ತಾಲೂಕು ಆಡಳಿತವನ್ನು ಒತ್ತಾಯಿಸಲಾಯಿತು.

ಇದೇ ವೇಳೆ ವಿದ್ಯಾರ್ಥಿಗಳಿಂದ ರಾಷ್ಟ್ರಧ್ವಜಕ್ಕೆ ಅಪಮಾನ ಅಥವಾ ಅನಾದರವಾಗದಂತೆ ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಜಿಲ್ಲಾ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಮತ್ತು 25ಕ್ಕೂ ಅಧಿಕ ಶಾಲಾ-ಕಾಲೇಜುಗಳ ಆಡಳಿತ ಮಂಡಳಿಗಳಿಗೆ ಮನವಿ ಸಲ್ಲಿಸಲಾಗಿದೆ.

ಪ್ಲಾಸ್ಟಿಕ್ ರಾಷ್ಟ್ರಧ್ವಜಗಳ ಬಳಕೆಯನ್ನು ತಡೆಯುವ ಕುರಿತು ನ್ಯಾಯಾಲಯದ ನಿರ್ದೇಶನಗಳು ಹಾಗೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಮಾರ್ಗಸೂಚಿಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು ಎಂದು ಸಮಿತಿ ಆಗ್ರಹಿಸಿದೆ. ‘ಭಾವಿ ಪೀಳಿಗೆ ರಾಷ್ಟ್ರಾಭಿಮಾನಿಗಳಾಗಲಿ’ ಎಂಬ ಆಶಯದೊಂದಿಗೆ ಹಿಂದೂ ಜನಜಾಗೃತಿ ಸಮಿತಿಯು ಕಳೆದ 23 ವರ್ಷಗಳಿಂದ ರಾಷ್ಟ್ರಧ್ವಜವನ್ನು ಗೌರವಿಸಿ ಅಭಿಯಾನವನ್ನು ನಡೆಸಿಕೊಂಡು ಬರುತ್ತಿದೆ ಎಂದು ಸಮಿತಿ ತಿಳಿಸಿದೆ.


