ಉಡುಪಿ : ಯುವಜನರಲ್ಲಿ ಕ್ರೀಡೆ, ಸಂಸ್ಕೃತಿ, ವೈಜ್ಞಾನಿಕ ಮನೋಭಾವ, ಸಾಮಾಜಿಕ ಸಾಮರಸ್ಯ ಹಾಗೂ ನಾಯಕತ್ವ ಗುಣಗಳನ್ನು ಬೆಳೆಸುವ ಉದ್ದೇಶದಿಂದ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಭಾರತ್ ಜೋಡೋ ಯುವ ಸಂಘ ಯೋಜನೆಯನ್ನು ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ, ಸಂಘಗಳ ರಚನೆಗೆ ಅಗತ್ಯ ಕ್ರಮಗಳನ್ನು ತ್ವರಿತವಾಗಿ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಭಾರತ್ ಜೋಡೋ ಯುವ ಸಂಘಗಳ ರಚನೆ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ರಾಜ್ಯದಾದ್ಯಂತ ಗ್ರಾಮ ಪಂಚಾಯತ್ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ 10 ಸಾವಿರ ಭಾರತ್ ಜೋಡೋ ಯುವ ಸಂಘಗಳನ್ನು ಸ್ಥಾಪಿಸಲು ಸರ್ಕಾರ ನಿರ್ಧರಿಸಿದ್ದು, ಉಡುಪಿ ಜಿಲ್ಲೆಯಲ್ಲೂ ವಿವಿಧ ಇಲಾಖೆಗಳ ಸಮನ್ವಯದೊಂದಿಗೆ ಯೋಜನೆಯನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಬೇಕು ಎಂದು ತಿಳಿಸಿದರು.

ಜಿಲ್ಲೆಯ ಎಲ್ಲ 155 ಗ್ರಾಮ ಪಂಚಾಯತ್ಗಳಲ್ಲಿ ತಲಾ ಒಂದರಂತೆ ಭಾರತ್ ಜೋಡೋ ಯುವ ಸಂಘಗಳನ್ನು ರಚಿಸಲಾಗುತ್ತಿದೆ. ಅಲ್ಲದೆ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಸರಾಸರಿ 4,000 ಜನಸಂಖ್ಯೆಗೆ ಒಂದರಂತೆ, ಪುರಸಭೆ ವ್ಯಾಪ್ತಿಯಲ್ಲಿ 6,000 ಜನಸಂಖ್ಯೆಗೆ ಒಂದರಂತೆ ಹಾಗೂ ನಗರಸಭೆ ವ್ಯಾಪ್ತಿಯಲ್ಲಿ 8,000 ಜನಸಂಖ್ಯೆಗೆ ಒಂದರಂತೆ ಸಂಘಗಳನ್ನು ಸ್ಥಾಪಿಸಲಾಗುವುದು. ಪ್ರತಿ ಸಂಘಕ್ಕೆ ಸರ್ಕಾರದಿಂದ ಹಂತ ಹಂತವಾಗಿ ಅನುದಾನವೂ ದೊರೆಯಲಿದೆ ಎಂದು ಹೇಳಿದರು. 16ರಿಂದ 35 ವರ್ಷದೊಳಗಿನ ಯುವಕ-ಯುವತಿಯರು ಸದಸ್ಯತ್ವ ಪಡೆಯಬಹುದು. ಪ್ರತಿ ಸಂಘದಲ್ಲಿ ಕನಿಷ್ಠ 100 ಸದಸ್ಯರು ಕಡ್ಡಾಯವಾಗಿದ್ದು, ಆಗಸ್ಟ್ 6ರಿಂದ ಬಿ.ಜೆ.ವೈ.ಎಸ್. ವೆಬ್ಸೈಟ್ನಲ್ಲಿ ನೋಂದಣಿ ಪ್ರಕ್ರಿಯೆ ಆರಂಭವಾಗಲಿದೆ. ಹೆಚ್ಚಿನ ಸಂಖ್ಯೆಯಲ್ಲಿ ಯುವಜನರು ನೋಂದಾಯಿಸಿಕೊಳ್ಳುವಂತೆ ಜಾಗೃತಿ ಮೂಡಿಸಲು ಅಧಿಕಾರಿಗಳು ಕ್ರಮವಹಿಸಬೇಕು ಎಂದು ಸೂಚಿಸಿದರು.

ಯೋಜನೆಯ ಯಶಸ್ವಿ ಅನುಷ್ಠಾನಕ್ಕೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ನಗರಾಭಿವೃದ್ಧಿ ಇಲಾಖೆ, ಕಂದಾಯ ಇಲಾಖೆ ಹಾಗೂ ಶಿಕ್ಷಣ ಇಲಾಖೆ ಪರಸ್ಪರ ಸಮನ್ವಯದೊಂದಿಗೆ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು. ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಡಾ. ಉದಯ್ ಶೆಟ್ಟಿ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಸುಬ್ರಹ್ಮಣ್ಯ ಶೆಟ್ಟಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.


