ಉಡುಪಿ : ಕುಂದಾಪುರ ತಾಲೂಕಿನ ತಲ್ಲೂರು–ನೇರಳಕಟ್ಟೆ ಮಾರ್ಗದ ಶೇಟ್ಟರಕಟ್ಟೆ ತಿರುವಿನಲ್ಲಿ ಸೋಮವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕೆಎಸ್ಆರ್ಟಿಸಿ ಬಸ್ ಹಾಗೂ ಟಿಪ್ಪರ್ ಮುಖಾಮುಖಿ ಡಿಕ್ಕಿ ಹೊಡೆದು 15 ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಾಳುಗಳಲ್ಲಿ ಏಳು ಮಂದಿ ವಿದ್ಯಾರ್ಥಿಗಳಾಗಿದ್ದಾರೆ.

ಕುಂದಾಪುರದಿಂದ ಆಜ್ರಿ–ಸಿದ್ದಾಪುರ ಕಡೆಗೆ ಸಂಚರಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ಗೆ, ನೇರಳಕಟ್ಟೆಯಿಂದ ತಲ್ಲೂರು ಕಡೆಗೆ ಮಣ್ಣು ತುಂಬಿಕೊಂಡು ಬರುತ್ತಿದ್ದ ಟಿಪ್ಪರ್ ವಾಹನ ಎದುರುಗಡೆಯಿಂದ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಟಿಪ್ಪರ್ ಚಾಲಕ ರಾಘವೇಂದ್ರ ಅತೀವೇಗ ಹಾಗೂ ಅಜಾಗರೂಕತೆಯಿಂದ ವಾಹನ ಚಲಾಯಿಸಿದ್ದೇ ಅಪಘಾತಕ್ಕೆ ಕಾರಣ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.

ಡಿಕ್ಕಿಯ ಪರಿಣಾಮ ಬಸ್ನ ಬಲಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಬಸ್ನಲ್ಲಿ ಪ್ರಯಾಣಿಸುತ್ತಿದ್ದ 15 ಮಂದಿಗೆ ಗಾಯಗಳಾಗಿವೆ. ಅವರಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ.

ಉಳಿದ ಗಾಯಾಳುಗಳನ್ನು ಕುಂದಾಪುರದ ಸರ್ಕಾರಿ ಆಸ್ಪತ್ರೆ ಹಾಗೂ ಆದರ್ಶ ಆಸ್ಪತ್ರೆಗೆ ದಾಖಲಿಸಲಾಗಿದೆ. ಟಿಪ್ಪರ್ ಚಾಲಕ ರಾಘವೇಂದ್ರಗೂ ಗಾಯಗಳಾಗಿದ್ದು, ಅವರನ್ನು ಚಿನ್ಮಯಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.



