Thursday, November 19, 2026

spot_img

ಮಕ್ಕಳ ಕಲ್ಯಾಣ ಪೊಲೀಸ್ ಅಧಿಕಾರಿಗಳಿಗೆ ಒಂದು ದಿನದ ತರಬೇತಿ ಕಾರ್ಯಾಗಾರ

ಉಡುಪಿ : ಮಕ್ಕಳ ರಕ್ಷಣೆ ಕೇವಲ ಒಂದು ಇಲಾಖೆಯ ಜವಾಬ್ದಾರಿಯಲ್ಲ. ಎಲ್ಲ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಿದಾಗ ಮಾತ್ರ ಮಕ್ಕಳ ಹಕ್ಕುಗಳನ್ನು ಪರಿಣಾಮಕಾರಿಯಾಗಿ ರಕ್ಷಿಸಲು ಸಾಧ್ಯ ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ನಿಕಟಪೂರ್ವ ಸದಸ್ಯ ಡಾ. ತಿಪ್ಪೇಸ್ವಾಮಿ ಕೆ.ಟಿ. ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಹಯೋಗದಲ್ಲಿ ಜಿಲ್ಲಾ ಪಂಚಾಯಿತಿಯ ಡಾ. ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ಠಾಣೆಗಳ ಮಕ್ಕಳ ಕಲ್ಯಾಣ ಪೊಲೀಸ್ ಅಧಿಕಾರಿಗಳು ಮತ್ತು ಸಹಾಯಕ ಅಧಿಕಾರಿಗಳಿಗಾಗಿ ಆಯೋಜಿಸಿದ್ದ ಒಂದು ದಿನದ ತರಬೇತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.

ಮಕ್ಕಳ ಮೇಲೆ ಅಥವಾ ಮಕ್ಕಳಿಂದ ಅಪರಾಧ ನಡೆದಾಗ ಅವರ ಮನಸ್ಥಿತಿ ಹಾಗೂ ಅಪರಾಧಕ್ಕೆ ಕಾರಣವಾದ ಹಿನ್ನೆಲೆಯನ್ನು ಅರ್ಥಮಾಡಿಕೊಂಡು ಪೊಲೀಸರು ಸಕಾರಾತ್ಮಕವಾಗಿ ಸ್ಪಂದಿಸಬೇಕು. ಪೊಲೀಸ್ ಸಿಬ್ಬಂದಿಯ ವರ್ಗಾವಣೆಯಿಂದಾಗಿ ಮಕ್ಕಳ ರಕ್ಷಣೆಗೆ ಸಂಬಂಧಿಸಿದ ಕಾನೂನುಗಳ ಕುರಿತು ನಿರಂತರ ಪುನರ್ ತರಬೇತಿ ಅಗತ್ಯವಿದೆ. ಸಕಾಲಿಕ ಸ್ಪಂದನೆಯ ಮೂಲಕ ಮಕ್ಕಳು ಕಾನೂನು ಸಂಘರ್ಷಕ್ಕೆ ಒಳಗಾಗುವುದನ್ನು ತಡೆಯಬೇಕು ಎಂದರು. ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾಗಿದ್ದ ಅವಧಿಯಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳಿಗೆ ಭೇಟಿ ನೀಡಿ ಸಲ್ಲಿಸಿದ ಶಿಫಾರಸುಗಳ ಆಧಾರದಲ್ಲಿ ಸರಕಾರ 106 ಸುತ್ತೋಲೆಗಳನ್ನು ಹೊರಡಿಸಿದೆ ಎಂದು ತಿಳಿಸಿದರು.

ಅಧ್ಯಕ್ಷತೆ ವಹಿಸಿದ್ದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಪ್ರೇಮಮೂರ್ತಿ ಕೆ. ಮಾತನಾಡಿ, ಮಕ್ಕಳ ಹಕ್ಕುಗಳ ರಕ್ಷಣೆ ಎಲ್ಲ ಇಲಾಖೆಗಳ ಜವಾಬ್ದಾರಿಯಾಗಿದೆ. ಸುಮಾರು 47 ಇಲಾಖೆಗಳು ನೇರವಾಗಿ ಅಥವಾ ಪರೋಕ್ಷವಾಗಿ ಮಕ್ಕಳ ರಕ್ಷಣೆಗೆ ಸಂಬಂಧಿಸಿದ ಹೊಣೆಗಾರಿಕೆ ಹೊಂದಿವೆ. ಮಕ್ಕಳ ಹಿತದೃಷ್ಟಿಯಿಂದ ಯೋಜನೆಗಳನ್ನು ಅನುಷ್ಠಾನಗೊಳಿಸಬೇಕು. ಮಕ್ಕಳ ಹಕ್ಕುಗಳ ರಕ್ಷಣೆಗೆ ಸಂಬಂಧಿಸಿದ 30 ಕಾಯ್ದೆಗಳ ಸಮರ್ಪಕ ಜಾರಿಗೆ ಎಲ್ಲ ಇಲಾಖೆಗಳು ಕೈಜೋಡಿಸಬೇಕು ಎಂದರು.

ಕುಂದಾಪುರ ಡಿವೈಎಸ್ಪಿ ಎಚ್.ಡಿ. ಕುಲಕರ್ಣಿ, ಮಕ್ಕಳ ಕಲ್ಯಾಣ ಸಮಿತಿ ಸದಸ್ಯೆ ಅಶ್ವಿತಾ ಶಾಲೆಟ್, ಮಂಗಳೂರಿನ ಪಡಿ ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರೆನಿ ಪೀಟರ್ ಡಿ’ಸೋಜ ಉಪಸ್ಥಿತರಿದ್ದರು. ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ನಾಗರತ್ನ ನಾಯಕ್ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಮಕ್ಕಳ ಸಹಾಯವಾಣಿ ಯೋಜನಾ ಸಂಯೋಜಕಿ ಜ್ಯೋತಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles