ಉಡುಪಿ: ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಗಳು ಸಮೀಪಿಸುತ್ತಿರುವ ಹಿನ್ನೆಲೆ, ಕೇಂದ್ರ ಸರ್ಕಾರ ಪರಿಚಯಿಸಿರುವ ಎಸ್ಐಆರ್ ಕಾಯ್ದೆಯ ಕುರಿತು ಮತದಾರರು ಸಂಪೂರ್ಣ ಮಾಹಿತಿ ಹೊಂದುವುದು ಅತ್ಯಂತ ಅಗತ್ಯವೆಂದು ಕೆಪಿಸಿಸಿ ಪ್ರಚಾರ ಸಮಿತಿಯ ಅಧ್ಯಕ್ಷರು ಹಾಗೂ ಮಾಜಿ ಸಚಿವರಾದ ವಿನಯ್ ಕುಮಾರ್ ಸೊರಕೆ ಹೇಳಿದರು.

ನಗರದ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ನಡೆದ ಜಿಲ್ಲಾ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಪಕ್ಷದಿಂದ ನೊಂದಾಯಿತರಾದ ಬೂತ್ ಮಟ್ಟದ ಪ್ರತಿನಿಧಿಗಳು ಎಸ್ಐಆರ್ ಕಾಯ್ದೆಯ ಬಗ್ಗೆ ಸಮಗ್ರವಾಗಿ ತಿಳಿದುಕೊಂಡು ಮತದಾರರಿಗೆ ಸ್ಪಷ್ಟ ಮಾಹಿತಿ ನೀಡಬೇಕು ಎಂದರು. ಪ್ರಜಾಪ್ರಭುತ್ವದ ಉಳಿವಿಗಾಗಿ ಪ್ರತಿಯೊಬ್ಬ ನಾಗರಿಕನು ತನ್ನ ಹೆಸರು ಮತದಾರರ ಪಟ್ಟಿಯಲ್ಲಿ ಇರುವುದನ್ನು ಪರಿಶೀಲಿಸಿಕೊಳ್ಳುವುದು ಅನಿವಾರ್ಯವಾಗಿದೆ ಎಂದು ತಿಳಿಸಿದರು.

ಪ್ರಸ್ತುತ ದಾಖಲೆ ಪರಿಶೀಲನೆ ಹೆಸರಿನಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವ ಕೆಲಸ ನಡೆಯುತ್ತಿದೆ ಎಂಬ ಆತಂಕ ವ್ಯಕ್ತಪಡಿಸಿದ ಅವರು, ಸರ್ಕಾರದ ಅನುದಾನದಲ್ಲಿ ನಡೆಯುವ ಯೋಜನೆಗಳನ್ನು ಬಿಜೆಪಿ ಮುಖಂಡರು ತಮ್ಮದೇ ಕಾರ್ಯಕ್ರಮಗಳಂತೆ ಬಿಂಬಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದರು. ಈ ಬಗ್ಗೆ ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು ಎಂದು ಹೇಳಿದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಮಾತನಾಡಿ, ಬೂತ್ ಮಟ್ಟದ ಪ್ರತಿನಿಧಿಗಳಿಗೆ ಎಸ್ಐಆರ್ ಕುರಿತು ಜಾಗೃತಿ ಮೂಡಿಸಲು ಶೀಘ್ರದಲ್ಲೇ ಕಾರ್ಯಾಗಾರಗಳನ್ನು ಆಯೋಜಿಸಲಾಗುವುದು. ಅವರು ಕಾಯ್ದೆಯನ್ನು ಸಂಪೂರ್ಣವಾಗಿ ಅರಿತುಕೊಂಡು ಮತದಾರರ ಹಕ್ಕುಗಳನ್ನು ಕಾಪಾಡುವಲ್ಲಿ ಮುಂದಾಗಬೇಕು ಎಂದು ಕರೆ ನೀಡಿದರು.

ಮುಖಂಡ ಪ್ರಸಾದ್ ರಾಜ್ ಕಾಂಚನ್ ಮಾತನಾಡಿ, ಕೇಂದ್ರ ಸರ್ಕಾರ ಎಸ್ಐಆರ್ ಹೆಸರಿನಲ್ಲಿ ಮತದಾನದ ಹಕ್ಕನ್ನು ಕಸಿಯುವ ಯೋಜನೆ ರೂಪಿಸಿದೆ ಎಂದು ಟೀಕಿಸಿದರು. ಈ ಹಿನ್ನೆಲೆಯಲ್ಲಿ ಪ್ರತಿಯೊಬ್ಬ ನಾಗರಿಕನು ಮತದಾರರ ಪಟ್ಟಿಯಲ್ಲಿ ತನ್ನ ಹೆಸರು ಇರುವುದನ್ನು ಖಚಿತಪಡಿಸಿಕೊಳ್ಳುವುದು ಅಗತ್ಯ ಎಂದರು.

ಸಭೆಯಲ್ಲಿ ಕಾರ್ಯಾಧ್ಯಕ್ಷ ಕಿಶನ್ ಹೆಗ್ಡೆ ಕೋಳ್ಕೆಬೈಲ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ್ ಹೇರೂರು ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು. ಇದೇ ವೇಳೆ ಪಕ್ಷಕ್ಕಾಗಿ ದುಡಿದು ಇತ್ತೀಚೆಗೆ ನಿಧನರಾದ ಮುಖಂಡರಿಗೆ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಜ್ಯೋತಿ ಹೆಬ್ಬಾರ್ ನುಡಿನಮನ ಸಲ್ಲಿಸಿದರು. ಉಪಾಧ್ಯಕ್ಷ ಪ್ರಖ್ಯಾತ್ ಶೆಟ್ಟಿ ಸ್ವಾಗತಿಸಿದರು. ಸಹಕಾರಿ ಕಾಂಗ್ರೆಸ್ ಅಧ್ಯಕ್ಷ ಅಣ್ಣಯ್ಯ ಸೇರಿಗಾರ್ ಕಾರ್ಯಕ್ರಮ ನಿರ್ವಹಿಸಿದರು. ಜಿಲ್ಲಾ ವಕ್ತಾರ ಭಾಸ್ಕರ ರಾವ್ ಕಿದಿಯೂರು ವಂದಿಸಿದರು.



