ಉಡುಪಿ: ರಾಜ್ಯ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳು ಕಳೆದ 2.5 ವರ್ಷಗಳಿಂದ ಯಶಸ್ವಿಯಾಗಿ ಅನುಷ್ಠಾನಗೊಂಡಿದ್ದು, ಯೋಜನೆಗಳ ಸಮರ್ಪಕ ಜಾರಿಗೆ ಹಾಗೂ ಕುಂದುಕೊರತೆ ಪರಿಹಾರಕ್ಕಾಗಿ ನಮ್ಮ ನಡೆ ವಾರ್ಡ್ ಕಡೆಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಉಡುಪಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ರಮೇಶ್ ಕಾಂಚನ್ ತಿಳಿಸಿದ್ದಾರೆ.

ನಗರದ ಪುರಭವನದಲ್ಲಿ ನಡೆದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮನೆಮನೆಗೆ ಭೇಟಿ ನೀಡಿ ಯೋಜನೆಗಳ ಪ್ರಗತಿ ಪರಿಶೀಲಿಸಲಾಗುತ್ತಿದ್ದು, ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ, ಶಕ್ತಿ ಹಾಗೂ ಯುವನಿಧಿ ಯೋಜನೆಗಳ ಲಾಭವನ್ನು ಫಲಾನುಭವಿಗಳ ಮನೆಬಾಗಿಲಿಗೆ ತಲುಪಿಸುವಲ್ಲಿ ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರ ಪಾತ್ರ ಶ್ಲಾಘನೀಯವಾಗಿದೆ. ಪಂಚ ಗ್ಯಾರಂಟಿ ಯೋಜನೆಗಳು ಜನಸಾಮಾನ್ಯರ ಬದುಕಿನಲ್ಲಿ ಧನಾತ್ಮಕ ಬದಲಾವಣೆ ತಂದು ಆರ್ಥಿಕ ಚೈತನ್ಯ ಸೃಷ್ಟಿಸಿವೆ ಎಂದು ಅವರು ಅಭಿಪ್ರಾಯಪಟ್ಟರು.

ಪ್ರಾಸ್ತಾವಿಕ ಭಾಷಣದಲ್ಲಿ ಸಮಿತಿ ಸದಸ್ಯ ಡಾ. ಸಂತೋಷ್ ಕುಮಾರ್ ಬೈರಂಪಳ್ಳಿ, ಗ್ಯಾರಂಟಿ ಯೋಜನೆಗಳು ಬಡವರ ಆರ್ಥಿಕ ಸ್ಥಿತಿಗೆ ಬಲ ನೀಡಿದ್ದು, ಜನರ ಕೊಳ್ಳುವ ಸಾಮರ್ಥ್ಯ ಹೆಚ್ಚಿಸುವ ಮೂಲಕ ರಾಜ್ಯದ ಆರ್ಥಿಕತೆಗೆ ಉತ್ತೇಜನ ನೀಡಿವೆ ಎಂದರು.

ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ವಿಜಯಾ, ಉಪತಹಶೀಲ್ದಾರ್ ಐರಿನ್ ನೊರೊನ್ಹಾ, ಸಮಿತಿ ಸದಸ್ಯರು, ಗ್ಯಾರಂಟಿ ಯೋಜನೆಗಳ ಅಧಿಕಾರಿಗಳು, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಉಪಸ್ಥಿತರಿದ್ದರು.



