Saturday, June 20, 2026

spot_img

ಮಳೆಗಾಲದಲ್ಲಿ ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಅರಿವು ಕಾರ್ಯಕ್ರಮ

ಉಡುಪಿ : ಉಡುಪಿ ನಗರಸಭೆ ಹಾಗೂ ಆರೋಗ್ಯ ಇಲಾಖೆಯ ಜಂಟಿ ಆಶ್ರಯದಲ್ಲಿ ಮಳೆಗಾಲದ ಸಂದರ್ಭದಲ್ಲಿ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳ ಕುರಿತು ಬಿಲ್ಡರ್‌ಗಳು ಹಾಗೂ ಕಾರ್ಮಿಕರಿಗೆ ಆಶ್ರಯ ಕಲ್ಪಿಸಿರುವ ಮಾಲೀಕರಿಗಾಗಿ ಅರಿವು ಕಾರ್ಯಾಗಾರವನ್ನು ನಗರಸಭೆಯ ಸತ್ಯಮೂರ್ತಿ ಸಭಾಂಗಣದಲ್ಲಿ ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಬಸವರಾಜ್ ಹುಬ್ಬಳ್ಳಿ ಮಾತನಾಡಿ, ಮಲೇರಿಯಾ, ಡೆಂಗ್ಯೂ ಸೇರಿದಂತೆ ವಿವಿಧ ಸಾಂಕ್ರಾಮಿಕ ರೋಗಗಳು ಜುಲೈನಿಂದ ನವೆಂಬರ್‌ವರೆಗೆ ಹೆಚ್ಚಿನ ಪ್ರಮಾಣದಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆ ಇರುವುದರಿಂದ ಎಲ್ಲರೂ ಎಚ್ಚರಿಕೆ ವಹಿಸುವ ಅಗತ್ಯವಿದೆ ಎಂದು ತಿಳಿಸಿದರು.

ಮನೆಗಳ ಸುತ್ತಮುತ್ತ, ಕಟ್ಟಡ ನಿರ್ಮಾಣ ಪ್ರದೇಶಗಳು ಹಾಗೂ ಕಾರ್ಮಿಕರ ವಸತಿ ಶಿಬಿರಗಳಲ್ಲಿ ನೀರು ನಿಲ್ಲದಂತೆ ನೋಡಿಕೊಳ್ಳಬೇಕು. ನೀರು ನಿಂತಿರುವ ಪ್ರದೇಶಗಳಲ್ಲಿ ಸೊಳ್ಳೆಗಳ ಉತ್ಪತ್ತಿ ಹೆಚ್ಚಾಗುವ ಕಾರಣ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕೆಂದು ಸಲಹೆ ನೀಡಿದರು. ಬೇರೆ ರಾಜ್ಯಗಳಿಂದ ಆಗಮಿಸುವ ವಲಸೆ ಕಾರ್ಮಿಕರಿಗೆ ಕಡ್ಡಾಯವಾಗಿ ರಕ್ತ ಪರೀಕ್ಷೆ ನಡೆಸಬೇಕು ಹಾಗೂ ರೋಗಲಕ್ಷಣಗಳು ಕಂಡುಬಂದಲ್ಲಿ ತಕ್ಷಣ ಆರೋಗ್ಯ ಇಲಾಖೆಗೆ ಮಾಹಿತಿ ನೀಡಿ ಚಿಕಿತ್ಸೆ ಒದಗಿಸಬೇಕೆಂದು ಸೂಚಿಸಿದರು. ಕಾರ್ಯಕ್ರಮದಲ್ಲಿ ಕೀಟಶಾಸ್ತ್ರಜ್ಞೆ ಮುಕ್ತಾ ಮಾತನಾಡಿ, ಮಲೇರಿಯಾ, ಡೆಂಗ್ಯೂ, ಚಿಕನ್‌ಗುನ್ಯಾ, ಫೈಲೇರಿಯಾ ಹಾಗೂ ಮೆದುಳು ಜ್ವರದಂತಹ ಕಾಯಿಲೆಗಳು ಸೊಳ್ಳೆ ಕಡಿತದಿಂದ ಹರಡುವುದರಿಂದ ಸೊಳ್ಳೆ ನಿಯಂತ್ರಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದರು. ಜ್ವರ, ತಲೆನೋವು, ವಾಂತಿ ಸೇರಿದಂತೆ ಯಾವುದೇ ರೋಗಲಕ್ಷಣಗಳು ಕಂಡುಬಂದಲ್ಲಿ ತಕ್ಷಣ ವೈದ್ಯಕೀಯ ಚಿಕಿತ್ಸೆ ಪಡೆಯುವಂತೆ ಸಲಹೆ ನೀಡಿದರು.

ಉಡುಪಿ ತಾಲೂಕು ಆರೋಗ್ಯಾಧಿಕಾರಿ ಡಾ. ವಾಸುದೇವ ಉಪಾಧ್ಯಾಯ ಇಲಿ ಜ್ವರದ ಕುರಿತು ಮಾಹಿತಿ ನೀಡಿ, ಇಲಿಗಳ ಮೂತ್ರದಿಂದ ಕಲುಷಿತಗೊಂಡ ನೀರಿನ ಸಂಪರ್ಕದಿಂದ ಈ ರೋಗ ಹರಡುವ ಸಾಧ್ಯತೆ ಇರುವುದರಿಂದ ಮಳೆಗಾಲದಲ್ಲಿ ಬರಿಗಾಲಿನಲ್ಲಿ ನಡೆಯುವುದನ್ನು ತಪ್ಪಿಸಬೇಕು ಎಂದು ಹೇಳಿದರು. ಜೊತೆಗೆ, ನೊಣಗಳ ನಿಯಂತ್ರಣ ಹಾಗೂ ಪರಿಸರ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡುವಂತೆ ಸಾರ್ವಜನಿಕರಿಗೆ ಕರೆ ನೀಡಿದರು. ಸಭೆಯಲ್ಲಿ ಕಾರ್ಮಿಕ ಇಲಾಖೆಯ ಅಧಿಕಾರಿಗಳು, ನಗರಸಭೆಯ ಪರಿಸರ ಅಭಿಯಂತರರು, ಆರೋಗ್ಯ ನಿರೀಕ್ಷಕರು, ನಗರಸಭೆ ಸಿಬ್ಬಂದಿ, ಬಿಲ್ಡರ್‌ಗಳು ಹಾಗೂ ಕಾರ್ಮಿಕರಿಗೆ ಆಶ್ರಯ ಕಲ್ಪಿಸಿರುವ ಮಾಲೀಕರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಪರಿಸರ ಅಭಿಯಂತರ ರವಿ ಪ್ರಕಾಶ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಿರಿಯ ಆರೋಗ್ಯ ನಿರೀಕ್ಷಕ ಪ್ರಕಾಶ್ ಪ್ರಭು ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles