ಉಡುಪಿ : ಜಿಲ್ಲೆಯಲ್ಲಿ ಹಮ್ಮಿಕೊಳ್ಳಲಾದ ಸ್ವಸ್ಥ ನಾರಿ ಸಶಕ್ತ ಪರಿವಾರ ಅಭಿಯಾನದಲ್ಲಿ ಹೆಣ್ಣುಮಕ್ಕಳ ಆರೋಗ್ಯದ ಕುರಿತು ಸಮಗ್ರ ಜಾಗೃತಿ ನಡೆಸಲಾಗುತ್ತಿದ್ದು ಎಲ್ಲಾ ಮಹಿಳೆಯರು ಸಕಾಲದಲ್ಲಿ ವೈದ್ಯಕೀಯ ಪರೀಕ್ಷೆ ಹಾಗೂ ಅರೋಗ್ಯ ಸೇವೆ ಪಡೆದುಕೊಂಡು ಆರೋಗ್ಯಕರ ಜೀವನ ನಡೆಸುವಂತೆ ಉಡುಪಿ ಚಿಕ್ಕಮಗಳೂರು ಲೋಕಸಭಾ ಸಂಸದ ಕೋಟ ಶ್ರೀನಿವಾಸ ಪೂಜಾರಿ ಕರೆ ನೀಡಿದರು.

ಅವರು ನಗರದ ಸರಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಯಲ್ಲಿ ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ರಾಷ್ಟ್ರೀಯ ಆರೋಗ್ಯ ಅಭಿಯಾನ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾಸ್ಪತ್ರೆ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಸ್ವಸ್ಥ ನಾರಿ ಸಶಕ್ತ ಪರಿವಾರ ಅಭಿಯಾನವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಕೇಂದ್ರ ಸರ್ಕಾರದ ಮಹಾತ್ವಾಕಾಂಕ್ಷೆಯ ಯೋಜನೆಯಾದ ಸ್ವಸ್ಥ ನಾರಿ ಸಶಕ್ತ ಪರಿವಾರ ಅಭಿಯಾನವನ್ನು ಸೆ. 17 ರಿಂದ ಅ. 2 ರವರೆಗೆ ಜಿಲ್ಲೆಯಾದ್ಯಂತ ಜಿಲ್ಲಾ ಆಸ್ಪತ್ರೆ, ತಾಲೂಕು ಆಸ್ಪತ್ರೆ, ಸಮುದಾಯ ಅರೋಗ್ಯ ಕೇಂದ್ರ, ಪ್ರಾಥಮಿಕ ಅರೋಗ್ಯ ಕೇಂದ್ರ, ಹಾಗೂ ಆಯುಷ್ಮಾನ್ ಆರೋಗ್ಯ ಮಂದಿರಗಳಲ್ಲಿ ಮಹಿಳೆಯರು ಮತ್ತು ಹದಿಹರೆಯದ ಹೆಣ್ಣುಮಕ್ಕಳ ಆರೋಗ್ಯದ ಕುರಿತು ಸಮಗ್ರ ಜಾಗೃತಿ ನಡೆಸಲಾಗುತ್ತಿದ್ದು, ಮಹಿಳೆಯರು ಇದರ ಸದುಪಯೋಗ ಪಡೆದುಕೊಂಡುಆರೋಗ್ಯಕರ ಜೀವನ ಶೈಲಿಯನ್ನು ಕಾಯ್ದು ಕೊಳ್ಳುವಂತೆ ಸಲಹೆ ನೀಡಿದರು.

ಜಿಲ್ಲಾ ಸರ್ಜನ್ ಡಾ ಅಶೋಕ್ ಪ್ರಾಸ್ತಾವಿಕವಾಗಿ ಮಾತನಾಡಿ ದೇಶದ ಮಹಿಳೆಯರಿಗಾಗಿ ಜಾರಿ ಆಗಿರುವ ಸ್ವಸ್ಥ ನಾರಿ ಸಶಕ್ತ ಪರಿವಾರ ಅಭಿಯಾನದ ಪ್ರಯೋಜನೆ ಪಡೆದು ಸರ್ಕಾರಿ ಆಸ್ಪತ್ರೆಗಳಲ್ಲಿ ಹಾಗೂ ಸರಕಾರದಿಂದ ಜಾರಿ ಆಗುವ ಹಲವಾರು ಕಾರ್ಯಕ್ರಮಗಳ ಸದುಪಯೋಗವನ್ನು ಪಡೆದುಕೊಂಡು ಮಹಿಳೆಯರು ತಮ್ಮ ಉತ್ತಮ ಆರೋಗ್ಯ ಶೈಲಿಯನ್ನು ರೂಢಿಸಿಕೊಳ್ಳಲು ಮಾಹಿತಿ ನೀಡಿದರು. ಶಾಸಕ ಯಶ್ ಪಾಲ್ ಎ ಸುವರ್ಣ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಸ್ತ್ರೀರೋಗ ತಜ್ಞೆ ಡಾ. ಕವಿತಾ ಮಹಿಳೆಯರ ಆರೋಗ್ಯದ ಬಗ್ಗೆ ವಿಶೇಷವಾಗಿ ತಾಯಂದಿರು ತಮ್ಮ ವೈಯಕ್ತಿಕ ಆರೋಗ್ಯ ಹಾಗೂ ಶುಚಿತ್ವದ ಬಗ್ಗೆ ಕಾಳಜಿ ವಹಿಸುವ ಕುರಿತು ಸವಿವರವಾದ ಮಾಹಿತಿಯನ್ನು ನೀಡಿದರು. ಇದೆ ಸಂದರ್ಭದಲ್ಲಿ ಸ್ವಸ್ಥ ನಾರಿ ಸಶಕ್ತ ಪರಿವಾರ ಅಭಿಯಾನದ ಭಿತ್ತಿಪತ್ರಗಳನ್ನು ಬಿಡುಗಡೆಗೊಳಿಸಲಾಯಿತು ಹಾಗೂ ಅಭಿಯಾನದ ಬಗ್ಗೆ ಪ್ರಮಾಣ ವಚನ ಸ್ವೀಕರಿಸಲಾಯಿತು.

ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಕಾರ್ಯಕ್ರಮ ಅನುಷ್ಠಾನ ಅಧಿಕಾರಿಗಳು, ಜಿಲ್ಲಾಸ್ಪತ್ರೆಯ ಆಡಳಿತ ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿವರ್ಗ,ಎನ್.ಹೆಚ್.ಎಮ್ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಬಸವರಾಜ ಜಿ ಹುಬ್ಬಳ್ಳಿ, ಸ್ವಾಗತಿಸಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಶಿಧರ್ ನಿರೂಪಿಸಿ, ಸುಧೀಂದ್ರ ವಂದಿಸಿದರು.


