Friday, November 27, 2026

spot_img

ಮೆಟಾ ಸಂಸ್ಥೆ ರಾಜಕೀಯ ಒತ್ತಡಕ್ಕೆ ಮಣಿದು ಕಾಂಗ್ರೆಸ್ ನಾಯಕರ ಖಾತೆ ನಿರ್ಬಂಧ: ಐವನ್ ಡಿಸೋಜಾ ಆರೋಪ

ಉಡುಪಿ: ಕಾಂಗ್ರೆಸ್ ನಾಯಕರ ಸಾಮಾಜಿಕ ಜಾಲತಾಣ ಖಾತೆಗಳನ್ನು ನಿರ್ಬಂಧಿಸುವ ಮೂಲಕ ಮೆಟಾ ಸಂಸ್ಥೆ ರಾಜಕೀಯ ಪಕ್ಷಪಾತ ಪ್ರದರ್ಶಿಸುತ್ತಿದೆ ಎಂದು ಆರೋಪಿಸಿ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ಶುಕ್ರವಾರ ಬ್ರಹ್ಮಗಿರಿಯ ಕಾಂಗ್ರೆಸ್ ಭವನದ ಮುಂಭಾಗ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನಾಕಾರರು ಮೆಟಾ ಸಂಸ್ಥೆಯ ಕ್ರಮವನ್ನು ಖಂಡಿಸಿ, ಸಾಮಾಜಿಕ ಜಾಲತಾಣಗಳಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ರಕ್ಷಿಸುವಂತೆ ಆಗ್ರಹಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ, ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮಾತನಾಡುವ ಸಂದರ್ಭ ಮೈಕ್ ಸ್ಥಗಿತಗೊಳಿಸಿದ ಘಟನೆಯಿಂದ ಆರಂಭವಾದ ವಿರೋಧ ಪಕ್ಷದ ಧ್ವನಿ ಹತ್ತಿಕ್ಕುವ ಪ್ರಯತ್ನ ಇದೀಗ ಸಾಮಾಜಿಕ ಜಾಲತಾಣಗಳಿಗೂ ವ್ಯಾಪಿಸಿದೆ ಎಂದು ಆರೋಪಿಸಿದರು.

ಸಾಮಾಜಿಕ ಜಾಲತಾಣಗಳು ಸಮಾಜದ ಎಲ್ಲ ವರ್ಗಗಳ ಅಭಿಪ್ರಾಯಗಳಿಗೆ ವೇದಿಕೆಯಾಗಬೇಕೇ ಹೊರತು, ಯಾವುದೇ ರಾಜಕೀಯ ಪಕ್ಷದ ಪ್ರಚಾರ ಮಾಧ್ಯಮವಾಗಬಾರದು. ಆದರೆ, ಮೆಟಾ ಸಂಸ್ಥೆ ಬಿಜೆಪಿ ಮತ್ತು ಆರ್‌ಎಸ್‌ಎಸ್ ಪರವಾಗಿ ಕಾರ್ಯನಿರ್ವಹಿಸುತ್ತಿದ್ದು, ಕಾಂಗ್ರೆಸ್ ಸೇರಿದಂತೆ ಬಿಜೆಪಿಯ ವಿರುದ್ಧ ಧ್ವನಿ ಎತ್ತುವವರ ಅಭಿಪ್ರಾಯಗಳನ್ನು ನಿಯಂತ್ರಿಸುವ ಪ್ರಯತ್ನ ನಡೆಸುತ್ತಿದೆ. ಮೆಟಾ ಸಂಸ್ಥೆ ಬಿಜೆಪಿ ಪರವಾಗಿ ವರ್ತಿಸುತ್ತಿರುವುದು ಪ್ರಜಾಪ್ರಭುತ್ವದ ದೃಷ್ಟಿಯಿಂದ ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೃಷ್ಣ ಶೆಟ್ಟಿ ಬಜಗೋಳಿ ಮಾತನಾಡಿ, ಯುವ ಕಾಂಗ್ರೆಸ್ ಅಧ್ಯಕ್ಷರು ಸೇರಿದಂತೆ ಹಲವು ಕಾಂಗ್ರೆಸ್ ನಾಯಕರ ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂ ಖಾತೆಗಳನ್ನು ನಿರ್ಬಂಧಿಸಲಾಗಿದೆ. ಬಿಜೆಪಿ ಹಾಗೂ ಆರ್‌ಎಸ್‌ಎಸ್ ವಿರುದ್ಧ ಮಾತನಾಡುವ ನಾಯಕರ ವಿಡಿಯೊಗಳು ಮತ್ತು ಬರಹಗಳನ್ನು ಅಳಿಸಿ ಹಾಕಲಾಗುತ್ತಿದೆ. ಈ ಮೂಲಕ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ ಎಂದು ಆರೋಪಿಸಿದರು.

ಪ್ರತಿಭಟನೆಯಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲ್, ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್, ಮುಖಂಡರಾದ ಪ್ರಸಾದ್ ರಾಜ್ ಕಾಂಚನ್, ಸುರೇಶ್ ಶೆಟ್ಟಿ ಬನ್ನಂಜೆ, ನವೀನ್ ಸಾಲಿಯಾನ್, ಡಾ. ಸುನೀತಾ ಶೆಟ್ಟಿ, ಪ್ರಖ್ಯಾತ್ ಶೆಟ್ಟಿ ಸೇರಿದಂತೆ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles