ಉಡುಪಿ : ಯುವಜನರಲ್ಲಿ ಮಾದಕ ದ್ರವ್ಯ ಸೇವನೆಯ ದುಷ್ಪರಿಣಾಮಗಳ ಬಗ್ಗೆ ವ್ಯಾಪಕ ಅರಿವು ಮೂಡಿಸಿ, ಅವರನ್ನು ಈ ವ್ಯಸನಗಳಿಂದ ದೂರವಿರಿಸುವಂತೆ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಮಣಿಪಾಲ ರಜತಾದ್ರಿಯಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಎನ್ಸಿಒಆರ್ಡಿ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆ ಹಾಗೂ ಜಿಲ್ಲಾ ತಂಬಾಕು ನಿಯಂತ್ರಣ ಘಟಕದ ನಾಲ್ಕನೇ ತ್ರೈಮಾಸಿಕ ಸಭೆಯಲ್ಲಿ ಮಾತನಾಡಿದ ಅವರು, ಮಾದಕ ದ್ರವ್ಯಗಳ ಸೇವನೆಯಿಂದ ದೈಹಿಕ, ಮಾನಸಿಕ, ಸಾಮಾಜಿಕ ಮತ್ತು ಆರ್ಥಿಕ ಹಾನಿಗಳು ಉಂಟಾಗುವುದರೊಂದಿಗೆ ಗಂಭೀರ ಕಾಯಿಲೆಗಳಿಗೂ ಕಾರಣವಾಗುತ್ತದೆ ಎಂದು ಹೇಳಿದರು.

ಯುವಜನರಲ್ಲಿ ಮಾದಕ ವ್ಯಸನದ ವಿರುದ್ಧ ಜಾಗೃತಿ ಮೂಡಿಸುವುದು ಅತ್ಯಗತ್ಯ. ಶಾಲಾ-ಕಾಲೇಜುಗಳಲ್ಲಿ ಮಾದಕ ದ್ರವ್ಯ ಮುಕ್ತ ವಾತಾವರಣ ನಿರ್ಮಿಸಲು ಒತ್ತು ನೀಡಬೇಕು. ಪ್ರಬಂಧ, ಭಾಷಣ, ಚರ್ಚಾಕೂಟ, ಕಿರುನಾಟಕ ಸ್ಪರ್ಧೆಗಳಂತಹ ಕಾರ್ಯಕ್ರಮಗಳನ್ನು ಪ್ರತೀ ತಿಂಗಳು ಆಯೋಜಿಸಿ ಜಾಗೃತಿ ಮೂಡಿಸಬೇಕು ಎಂದು ತಿಳಿಸಿದರು. ತಂಬಾಕು ಮುಕ್ತ ಯುವ ಅಭಿಯಾನ 3.0 ಕಾರ್ಯಕ್ರಮದಡಿ ಶಾಲೆಗಳು, ಕಾಲೇಜುಗಳು, ಬಸ್ ನಿಲ್ದಾಣಗಳು, ಮಲ್ಪೆ ಬೀಚ್ ಸೇರಿದಂತೆ ಜನಸಂದಣಿ ಪ್ರದೇಶಗಳಲ್ಲಿ ಬೀದಿ ನಾಟಕಗಳ ಮೂಲಕ ಜಾಗೃತಿ ಮೂಡಿಸಲಾಗುತ್ತಿದೆ. ಕೆಲವು ಗ್ರಾಮ ಪಂಚಾಯತ್ಗಳನ್ನು ತಂಬಾಕು ಮುಕ್ತ ಗ್ರಾಮಗಳಾಗಿ ಘೋಷಿಸಲಾಗಿದ್ದು, ಉಳಿದ ಗ್ರಾಮಗಳನ್ನೂ ಇದೇ ರೀತಿಯಾಗಿ ರೂಪಿಸಲು ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ಈ ವರ್ಷ ಜಿಲ್ಲೆಯಲ್ಲಿ ೧೦೪ ಕ್ಕೂ ಹೆಚ್ಚು ದಿಢೀರ್ ದಾಳಿಗಳನ್ನು ನಡೆಸಿ, ಸೆಕ್ಷನ್ ೪, ೬(ಎ) ಹಾಗೂ ೬(ಬಿ) ಅಡಿಯಲ್ಲಿ ೧೨೪೯ ಪ್ರಕರಣಗಳನ್ನು ದಾಖಲಿಸಿ ೨,೧೮,೦೫೦ ದಂಡ ವಸೂಲಿ ಮಾಡಲಾಗಿದೆ. ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ೧೭೩ ಪ್ರಕರಣಗಳಿಂದ ೨೦,೨೫೦ ದಂಡ ವಸೂಲಿ ಮಾಡಲಾಗಿದೆ ಎಂದು ತಿಳಿಸಿದರು.ಸಭೆಯಲ್ಲಿ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್, ಅಪರ ಪೊಲೀಸ್ ಅಧೀಕ್ಷಕ ಸುಧಾಕರ ನಾಯಕ್, ಜಿಲ್ಲಾ ಆರೋಗ್ಯಾಧಿಕಾರಿ ಡಾ. ಬಸವರಾಜ ಹುಬ್ಬಳ್ಳಿ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಮರಾವ್, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ನಾರಾಯಣ ಸ್ವಾಮಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.



