ಉಡುಪಿ : ವಿದ್ಯಾರ್ಥಿಗಳಿಗೆ ಸಂವಿಧಾನ ಮತ್ತು ಸಂಸದೀಯ ವ್ಯವಸ್ಥೆಯ ಕಾರ್ಯವೈಖರಿಯನ್ನು ಪರಿಚಯಿಸುವ ಉದ್ದೇಶದಿಂದ ಜಿಲ್ಲಾ ಮಟ್ಟದ ಯುವ ಸಂಸತ್ತು ಸಭೆಯನ್ನು ಅರ್ಥಪೂರ್ಣವಾಗಿ ಆಯೋಜಿಸಿ ಯಶಸ್ವಿಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅಧಿಕಾರಿಗಳಿಗೆ ಸೂಚಿಸಿದರು. ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಜಿಲ್ಲಾ ಮಟ್ಟದ ಯುವ ಸಂಸತ್ತು ಸಭೆ ಆಯೋಜಿಸುವ ಕುರಿತು ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರು ತಮ್ಮ ಪ್ರತಿನಿಧಿಗಳನ್ನು ಆಯ್ಕೆ ಮಾಡುತ್ತಾರೆ. ಜನರ ಆಶೋತ್ತರಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಸಂಸತ್ತಿನಲ್ಲಿ ನಡೆಯುವ ಚರ್ಚೆಗಳು, ವಿಧೇಯಕಗಳ ಮಂಡನೆ ಹಾಗೂ ಅಂಗೀಕಾರದ ಪ್ರಕ್ರಿಯೆಗಳನ್ನು ಯುವ ಸಮುದಾಯಕ್ಕೆ ಪರಿಚಯಿಸುವುದು ಯುವ ಸಂಸತ್ತು ಕಾರ್ಯಕ್ರಮದ ಉದ್ದೇಶವಾಗಿದೆ. ಈ ನಿಟ್ಟಿನಲ್ಲಿ ತಾಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ಸಭೆಗಳನ್ನು ವ್ಯವಸ್ಥಿತವಾಗಿ ಆಯೋಜಿಸಬೇಕು ಎಂದು ತಿಳಿಸಿದರು.

ತಾಲೂಕು ಮಟ್ಟದಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದ ಯುವ ಸಂಸತ್ತಿನಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಬೇಕು. ಜಿಲ್ಲಾ ಮಟ್ಟದ ಸಭೆಯಲ್ಲಿ ಅತ್ಯುತ್ತಮವಾಗಿ ಚರ್ಚೆಯಲ್ಲಿ ಪಾಲ್ಗೊಳ್ಳುವ ಪ್ರತಿ ವಿಧಾನಸಭಾ ಕ್ಷೇತ್ರದಿಂದ ತಲಾ ಒಬ್ಬ ವಿದ್ಯಾರ್ಥಿಯನ್ನು ಆಯ್ಕೆ ಮಾಡಿ, ನವೆಂಬರ್ 3ರೊಳಗೆ ರಾಜ್ಯ ಮಟ್ಟದ ಯುವ ಸಂಸತ್ತು ಸಭೆಗೆ ಕಳುಹಿಸಬೇಕು ಎಂದರು. ಜಿಲ್ಲಾ ವಕೀಲರ ಸಂಘದ ಸಮನ್ವಯದಲ್ಲಿ ಕಾರ್ಯಕ್ರಮ ಆಯೋಜಿಸಬೇಕು. ಸಭೆಯ ದಿನಾಂಕ ಮತ್ತು ಸ್ಥಳವನ್ನು ನಿಗದಿಪಡಿಸಿ, ಚರ್ಚೆಯ ವಿಷಯಗಳನ್ನು ವಿದ್ಯಾರ್ಥಿಗಳಿಗೆ ಮುಂಚಿತವಾಗಿ ತಿಳಿಸಬೇಕು. ರಾಜ್ಯ ವಿಧಾನಸಭೆಯ ಮಾದರಿಯಲ್ಲಿ ಯುವ ಸಂಸತ್ತು ನಡೆಯುವಂತೆ ವ್ಯವಸ್ಥೆ ಮಾಡಬೇಕು ಎಂದು ಸೂಚಿಸಿದರು.

ಜಿಲ್ಲಾ ಮಟ್ಟದ ಯುವ ಸಂಸತ್ತು ಅಧಿವೇಶನವು ಬೆಳಗ್ಗೆ 10 ಗಂಟೆಗೆ ನಾಡಗೀತೆಯೊಂದಿಗೆ ಆರಂಭವಾಗಬೇಕು. ಸಂವಿಧಾನದ ಪೀಠಿಕೆ ವಾಚನ, ಪ್ರಶ್ನೋತ್ತರ ವೇಳೆ, ಶೂನ್ಯ ವೇಳೆ, ಗಮನ ಸೆಳೆಯುವ ಸೂಚನೆ, ತುರ್ತು ವಿಷಯಗಳ ಚರ್ಚೆ, ವಿಧೇಯಕಗಳ ಮಂಡನೆ, ಚರ್ಚೆ ಮತ್ತು ಅಂಗೀಕಾರ ಸೇರಿದಂತೆ ವಿವಿಧ ಸಂಸದೀಯ ಕಲಾಪಗಳನ್ನು ಅಳವಡಿಸಬೇಕು. ಅಧಿವೇಶನ ಮುಂದೂಡುವ ಪ್ರಕ್ರಿಯೆ ಹಾಗೂ ರಾಷ್ಟ್ರಗೀತೆಯ ಪ್ರಸಾರಕ್ಕೂ ವ್ಯವಸ್ಥೆ ಮಾಡಬೇಕು ಎಂದು ತಿಳಿಸಿದರು.

ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕಿ ಅನಿತಾ ಮಡ್ಲೂರು, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ರೇನಾಲ್ಡ್ ಪ್ರವೀಣ್ ಕುಮಾರ್, ವಾರ್ತಾಧಿಕಾರಿ ಮಂಜುನಾಥ್ ಬಿ. ಹಾಗೂ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.


