ಉಡುಪಿ : ದೇಶದ ಪ್ರತಿಷ್ಠಿತ ತಾಂತ್ರಿಕ ಶಿಕ್ಷಣ ಸಂಸ್ಥೆಯಾದ ಐಐಟಿ ಬಾಂಬೆ ನಡೆಸುವ ಬ್ಯಾಚುಲರ್ ಆಫ್ ಡಿಸೈನ್ (ಬಿ.ಡಿಸ್) ಕೋರ್ಸ್ ಪ್ರವೇಶಕ್ಕಾಗಿ ನಡೆಯುವ ಯುಸೀಡ್ (UCEED)–2026 ರಾಷ್ಟ್ರಮಟ್ಟದ ಪ್ರವೇಶ ಪರೀಕ್ಷೆಯಲ್ಲಿ ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಸುಜಲ್ ತೋಳಾರ್ ಅಮೋಘ ಸಾಧನೆ ಮಾಡಿದ್ದಾರೆ.

ಜನವರಿ 2026ರಲ್ಲಿ ನಡೆದ ಈ ರಾಷ್ಟ್ರಮಟ್ಟದ ಪರೀಕ್ಷೆಯಲ್ಲಿ ಸುಜಲ್ ತೋಳಾರ್ ಪ್ರಥಮ ಪ್ರಯತ್ನದಲ್ಲೇ ಕೆಟಗರಿ ವಿಭಾಗದಲ್ಲಿ ರಾಷ್ಟ್ರಮಟ್ಟದಲ್ಲಿ 179ನೇ ರ್ಯಾಂಕ್ ಪಡೆದು ಮುಂದಿನ ಹಂತದ ಕೌನ್ಸೆಲಿಂಗ್ಗೆ ಅರ್ಹತೆ ಪಡೆದಿದ್ದಾರೆ. ಈ ಸಾಧನೆಯ ಮೂಲಕ ಅವರು ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನ ತಂದುಕೊಟ್ಟಿದ್ದಾರೆ. ಜನತಾ ಪದವಿಪೂರ್ವ ಕಾಲೇಜಿನಲ್ಲಿ ನುರಿತ ಉಪನ್ಯಾಸಕರ ಮಾರ್ಗದರ್ಶನದಲ್ಲಿ ತರಬೇತಿ ಪಡೆದು ಈ ಸಾಧನೆ ಮಾಡಿರುವುದು ಸಂಸ್ಥೆಗೆ ಹೆಮ್ಮೆ ತಂದಿದೆ ಎಂದು ಕಾಲೇಜು ಆಡಳಿತ ಮಂಡಳಿ ತಿಳಿಸಿದೆ.

ಪ್ರಸ್ತುತ ಬಹುಬೇಡಿಕೆಯುಳ್ಳ ರಾಷ್ಟ್ರಮಟ್ಟದ ಪ್ರವೇಶ ಪರೀಕ್ಷೆಗಳಿಗೆ ಕಾಲೇಜಿನಲ್ಲಿ ಉತ್ತಮ ತರಬೇತಿ ನೀಡಲಾಗುತ್ತಿದೆ. ವಿಶೇಷವಾಗಿ ಆರ್ಕಿಟೆಕ್ಚರ್ ಕ್ಷೇತ್ರದ ನಾಟಾ (NATA), ಜೆಇಇ ಬಿ.ಆರ್ಕ್, ನಿಫ್ಟ್ (NIFT), ಜೆಇಇ ಮೇನ್ಸ್ ಹಾಗೂ ಜೆಇಇ ಅಡ್ವಾನ್ಸ್ ಪರೀಕ್ಷೆಗಳಿಗೂ ವಿದ್ಯಾರ್ಥಿಗಳನ್ನು ಸಿದ್ಧಗೊಳಿಸಲಾಗುತ್ತಿದೆ. ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಕಾರ್ಯವನ್ನು ಸಂಸ್ಥೆ ನಿರಂತರವಾಗಿ ಮಾಡುತ್ತಿದೆ.

ವಿದ್ಯಾರ್ಥಿಯ ಈ ಸಾಧನೆಗೆ ಕಾಲೇಜು ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಬೋಧಕ–ಬೋಧಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ. ಕೃಷಿ ಕೂಲಿ ಕಾರ್ಮಿಕರು ಹಾಗೂ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ ದೊರಕಬೇಕು. ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾಗವಹಿಸಿ ಉತ್ತಮ ಜೀವನ ಕಟ್ಟಿಕೊಳ್ಳಬೇಕು ಎಂಬ ಉದ್ದೇಶದಿಂದ ಈ ಶಿಕ್ಷಣ ಸಂಸ್ಥೆ ಆರಂಭಿಸಲಾಗಿದೆ. ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ರಾಷ್ಟ್ರಮಟ್ಟದಲ್ಲಿ ಸಾಧನೆ ಮಾಡುತ್ತಿರುವುದು ಜನತಾ ಸಂಸ್ಥೆಗೆ ಹೆಮ್ಮೆಯ ವಿಷಯ ಎಂದು ಕಾಲೇಜಿನ ಅಧ್ಯಕ್ಷರು ಹಾಗೂ ಪ್ರಾಂಶುಪಾಲರಾದ ಗಣೇಶ್ ಮೊಗವೀರ ತಿಳಿಸಿದ್ದಾರೆ.



