ಉಡುಪಿ : ಉಡುಪಿ ಜಿಲ್ಲೆಯ ಕಾಪು ತಾಲೂಕಿನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿ ಐವರು ಕಾರ್ಮಿಕರು ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಓಡುತ್ತಿದ್ದ ಕಾರ್ಮಿಕರಿದ್ದ ಗೂಡ್ಸ್ ಟೆಂಪೋ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಈ ಅಪಘಾತ ಸಂಭವಿಸಿದೆ.

ಟೆಂಪೋದಲ್ಲಿ ಒಟ್ಟು 12 ಮಂದಿ ಕಾರ್ಮಿಕರು ಪ್ರಯಾಣಿಸುತ್ತಿದ್ದು, ಇವರಲ್ಲಿ ಉತ್ತರ ಪ್ರದೇಶ ಮೂಲದ ಐವರು ಸ್ಥಳದಲ್ಲೇ ಸಾವನ್ನಪ್ಪಿರುವುದು ತಿಳಿದುಬಂದಿದೆ. ಉಳಿದವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈವೆಂಟ್ ಕಾರ್ಯಕ್ರಮಕ್ಕಾಗಿಯೂ ಸಾಮಗ್ರಿಗಳನ್ನು ಹೊತ್ತಿದ್ದ ಟೆಂಪೋ ಕಾಪುವಿನಿಂದ ಉಡುಪಿಯ ಕಡೆಗೆ ತೆರಳುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಟೆಂಪೋ ಒಳಗೆ ಸಿಲುಕಿದ್ದ ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಲಭಿಸಿದೆ. ಘಟನೆ ಕುರಿತು ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸುತ್ತಿದ್ದು, ಹೆಚ್ಚಿನ ವಿವರಗಳು ಇನ್ನಷ್ಟೇ ಲಭ್ಯವಾಗಬೇಕಿದೆ.



