ಉಡುಪಿ : ವಿಶೇಷ ಚೇತನ ವಿದ್ಯಾರ್ಥಿಗಳು ಕ್ರೀಡಾಕೂಟಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವುದರಿಂದ ಅವರ ದೈಹಿಕ ಹಾಗೂ ಮಾನಸಿಕ ಸಾಮರ್ಥ್ಯ ವೃದ್ಧಿಯಾಗುತ್ತದೆ. ಕ್ರೀಡೆಯಲ್ಲಿ ಭಾಗವಹಿಸುವ ಮನೋಭಾವ ಆತ್ಮವಿಶ್ವಾಸ ಮತ್ತು ಸಾಧನೆಯ ಹಾದಿಗೆ ಪ್ರೇರಣೆಯಾಗುತ್ತದೆ ಎಂದು ಉಡುಪಿ ಜಿಲ್ಲಾ ಅಥ್ಲೆಟಿಕ್ಸ್ ಅಸೋಸಿಯೇಷನ್ ಅಧ್ಯಕ್ಷ ಹರಿಪ್ರಸಾದ್ ರೈ ಹೇಳಿದರು.

ಮಂಗಳೂರು ವಿಶ್ವವಿದ್ಯಾನಿಲಯ, ಉಡುಪಿ ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಹಾಗೂ ಲಯನ್ಸ್ ಕ್ಲಬ್ ಉಡುಪಿ ಅಮೃತ್ ಇವರ ಸಂಯುಕ್ತ ಆಶ್ರಯದಲ್ಲಿ ನ.11ರಂದು ಅಜ್ಜರಕಾಡು ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ನಡೆದ ವಿಶೇಷ ಚೇತನ ವಿದ್ಯಾರ್ಥಿಗಳ ಅಥ್ಲೆಟಿಕ್ಸ್ ಕ್ರೀಡಾಕೂಟವನ್ನು ಉದ್ಘಾಟಿಸಿ ಅವರು ಮಾತನಾಡಿದರು. ವಿಶೇಷ ಚೇತನ ವಿದ್ಯಾರ್ಥಿಗಳು ಅಚ್ಚುಕಟ್ಟಾಗಿ ನಡೆಸಿದ ಪಥಸಂಚಲನವು ಅವರಿಗೆ ತರಬೇತಿ ನೀಡಿದ ಸಂಸ್ಥೆಗಳು ಹಾಗೂ ಪೋಷಕರ ಬದ್ಧತೆ ಮತ್ತು ಪರಿಶ್ರಮಕ್ಕೆ ಸಾಕ್ಷಿಯಾಗಿದೆ. ಇಂತಹ ಕ್ರೀಡಾಕೂಟಗಳು ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಲು ಉತ್ತಮ ವೇದಿಕೆಯಾಗಿವೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಪ್ರೊ. ನಿತ್ಯಾನಂದ ವಿ. ಗಾಂವ್ಕರ್ ಮಾತನಾಡಿ, ವಿಶೇಷ ಚೇತನ ಮಕ್ಕಳನ್ನು ಸ್ವಂತ ಮಕ್ಕಳಂತೆ ಪ್ರೀತಿ, ಕಾಳಜಿ ಹಾಗೂ ಬದ್ಧತೆಯಿಂದ ನೋಡಿಕೊಳ್ಳುತ್ತಿರುವ ಸಂಸ್ಥೆಗಳ ಸೇವೆ ಶ್ಲಾಘನೀಯ. ಇಂತಹ ಕ್ರೀಡಾಕೂಟಗಳು ವಿದ್ಯಾರ್ಥಿಗಳ ಪ್ರತಿಭೆ ಅನಾವರಣಗೊಳಿಸುವುದರೊಂದಿಗೆ ಅವರಲ್ಲಿ ಆತ್ಮವಿಶ್ವಾಸ ತುಂಬುವ ಮಹತ್ವದ ಕಾರ್ಯ ಮಾಡುತ್ತವೆ ಎಂದರು. ಮುಖ್ಯ ಅತಿಥಿಗಳಾಗಿ ಲಯನ್ಸ್ ಕ್ಲಬ್ ಉಡುಪಿ ಅಮೃತ್ ಅಧ್ಯಕ್ಷೆ ಚಂದ್ರಿಕಾ ಜೆ.ಪಿ., ಕರ್ನಾಟಕ ರಾಜ್ಯ ಶಿಕ್ಷಕರ ಸಂಘದ ಕಾರ್ಯಾಧ್ಯಕ್ಷೆ ಡಾ. ಕಾಂತಿ ಹರೀಶ್, ಗೌರವಾಧ್ಯಕ್ಷೆ ಆಗ್ನೇಸ್ ಕುಂದರ್, ಉಡುಪಿ ಜಿಲ್ಲಾ ಪಾಲಕರ ಸಂಘದ ಅಧ್ಯಕ್ಷ ಜಯವಿಠಲ್ ಹಾಗೂ ಕಾರ್ಯದರ್ಶಿ ಶಶಿಕಲಾ ಕೋಟ್ಯಾನ್ ಉಪಸ್ಥಿತರಿದ್ದರು. ಪಥಸಂಚಲನ ಸ್ಪರ್ಧೆಯಲ್ಲಿ ವಿಜೇತ ಶಾಲೆ ಪ್ರಥಮ ಸ್ಥಾನ, ಮಾನಸಾ ಸ್ಪೆಷಲ್ ಸ್ಕೂಲ್ ದ್ವಿತೀಯ ಹಾಗೂ ಕಾರುಣ್ಯ ಸ್ಪೆಷಲ್ ಸ್ಕೂಲ್ ತೃತೀಯ ಸ್ಥಾನ ಗಳಿಸಿದವು. ದೈಹಿಕ ಶಿಕ್ಷಣ ನಿರ್ದೇಶಕ ಡಾ. ರೋಶನ್ ಕುಮಾರ್ ಶೆಟ್ಟಿ ಸ್ವಾಗತಿಸಿದರು. ಜಿಲ್ಲಾ ಶಿಕ್ಷಕರ ಸಂಘದ ಅಧ್ಯಕ್ಷ ರವೀಂದ್ರ ಎಚ್. ಕಾರ್ಯಕ್ರಮ ನಿರೂಪಿಸಿ ವಂದಿಸಿದರು.


