Monday, August 31, 2026

spot_img

ಶಾಲಾ-ಕಾಲೇಜುಗಳಲ್ಲಿ ಹಿಜಾಬ್‌ಗೆ ಅವಕಾಶ: ಸರ್ಕಾರದ ಆದೇಶಕ್ಕೆ ಕೋಟ ಶ್ರೀನಿವಾಸ ಪೂಜಾರಿ ವಿರೋಧ

ಉಡುಪಿ: ಶಾಲಾ-ಕಾಲೇಜುಗಳಲ್ಲಿ ಮತ್ತೆ ಹಿಜಾಬ್ ಧರಿಸಲು ಅವಕಾಶ ನೀಡಿರುವ ರಾಜ್ಯ ಸರ್ಕಾರದ ಆದೇಶಕ್ಕೆ ಉಡುಪಿ-ಚಿಕ್ಕಮಗಳೂರು ಲೋಕಸಭಾ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಜಾಬ್‌ಗೆ ಅವಕಾಶ ನೀಡುವುದರಿಂದ ಸಮಾಜ ಹಾಗೂ ಶೈಕ್ಷಣಿಕ ಕ್ಷೇತ್ರದಲ್ಲಿ ಮತ್ತೆ ಗೊಂದಲದ ವಾತಾವರಣ ನಿರ್ಮಾಣವಾಗುವ ಸಾಧ್ಯತೆ ಇದೆ ಎಂದು ಹೇಳಿದರು.

ಹಿಜಾಬ್ ವಿಚಾರವಾಗಿ ಕರ್ನಾಟಕ ಹೈಕೋರ್ಟ್ ಈಗಾಗಲೇ ತೀರ್ಪು ನೀಡಿದ್ದು, ಶಿಕ್ಷಣ ಸಂಸ್ಥೆಗಳಲ್ಲಿ ಯಾವುದೇ ಧಾರ್ಮಿಕ ದಿರಿಸಿಗೆ ಅವಕಾಶ ಇಲ್ಲ ಎಂದು ಸ್ಪಷ್ಟಪಡಿಸಿದೆ. ಸಮಾನವಸ್ತ್ರಕ್ಕೆ ಮಾತ್ರ ಅವಕಾಶವಿದೆ ಎಂದು ಹೈಕೋರ್ಟ್ ಹೇಳಿದೆ ಎಂದು ಅವರು ನೆನಪಿಸಿದರು.

 ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಲಾದರೂ, ಸುಪ್ರೀಂ ಕೋರ್ಟ್ ಹೈಕೋರ್ಟ್ ಆದೇಶಕ್ಕೆ ತಡೆಯಾಜ್ಞೆ ನೀಡಿಲ್ಲ ಹಾಗೂ ಅಂತಿಮ ತೀರ್ಪನ್ನೂ ಪ್ರಕಟಿಸಿಲ್ಲ. ಹೀಗಾಗಿ ಹೈಕೋರ್ಟ್ ಆದೇಶವೇ ಇನ್ನೂ ಜಾರಿಯಲ್ಲಿದೆ. ಇಂತಹ ಪರಿಸ್ಥಿತಿಯಲ್ಲಿಯೇ ರಾಜ್ಯ ಸರ್ಕಾರ ಹೊಸ ಆದೇಶ ಹೊರಡಿಸಿ, ಶಿಕ್ಷಣ ಇಲಾಖೆಯಿಂದ ಸುತ್ತೋಲೆ ಪ್ರಕಟಿಸಿದೆ. ಇದು ನ್ಯಾಯಾಲಯದ ಆದೇಶ ಮೀರಿ ನಡೆದುಕೊಂಡಂತಾಗಿದೆ ಎಂದು ಆರೋಪಿಸಿದರು. ನ್ಯಾಯಾಲಯಕ್ಕೆ ಸೂಕ್ತ ಮನವರಿಕೆ ಮಾಡಿಕೊಡುವ ಬದಲು ಸರ್ಕಾರ ಏಕಪಕ್ಷೀಯ ಆದೇಶ ಹೊರಡಿಸಿದೆ. ಈ ಆದೇಶದ ಮಾನದಂಡ ಏನು ಎಂಬುದಕ್ಕೆ ಶಿಕ್ಷಣ ಸಚಿವರು ಉತ್ತರಿಸಬೇಕು ಎಂದು ಆಗ್ರಹಿಸಿದರು. ನೆಮ್ಮದಿಯಲ್ಲಿದ್ದ ಸಮಾಜದಲ್ಲಿ ಸರ್ಕಾರವೇ ಗೊಂದಲ ಸೃಷ್ಟಿಸಿದೆ. ಮುಂದಿನ ದಿನಗಳಲ್ಲಿ ಹಿಜಾಬ್-ಕೇಸರಿ ಶಾಲು ವಿವಾದ ಮರುಕಳಿಸಿದರೆ ಅದರ ಹೊಣೆ ಸರ್ಕಾರದ ಮೇಲಿದೆ ಎಂದು ಎಚ್ಚರಿಸಿದರು.

ದಾವಣಗೆರೆ ಫಲಿತಾಂಶದ ಬಳಿಕ ಅಲ್ಪಸಂಖ್ಯಾತರ ಓಲೈಕೆಗೆ ಸರ್ಕಾರ ಮುಂದಾಗಿದೆ ಎಂದು ಟೀಕಿಸಿದ ಅವರು, ನ್ಯಾಯಾಲಯದ ಆದೇಶ ಮೀರಿ ಸುತ್ತೋಲೆ ಹೊರಡಿಸುವುದು ಬೇಜವಾಬ್ದಾರಿಯ ನಡೆ ಎಂದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಉಲ್ಲೇಖಿಸಿ ಕಾನೂನು ಪಂಡಿತರಾಗಿರುವ ಸಿದ್ದರಾಮಯ್ಯ ಅವರು ಇದಕ್ಕೆ ಹೇಗೆ ಒಪ್ಪಿದರು ಗೊತ್ತಿಲ್ಲ. ಇವರದೇ ಸರ್ಕಾರ ಈ ಹಿಂದೆ ಜನಿವಾರ ವಿಚಾರ ಪ್ರಸ್ತಾಪಿಸಿತ್ತು. ಈಗ ಓಲೈಕೆಯ ರಾಜಕಾರಣಕ್ಕಾಗಿ ಜನಿವಾರವನ್ನು ಉಲ್ಲೇಖಿಸುತ್ತಿದೆ ಎಂದು ಟೀಕಿಸಿದರು.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles