Saturday, September 5, 2026

spot_img

ಶಿಕ್ಷಕರೇ ಸುಜ್ಞಾನದ ಬೆಳಕಿನ ದಾರಿದೀಪ: ಕೋಟ ಶ್ರೀನಿವಾಸ ಪೂಜಾರಿ

ಉಡುಪಿ: ಅಜ್ಞಾನದ ಕತ್ತಲೆಯಿಂದ ಸುಜ್ಞಾನದ ಬೆಳಕಿನೆಡೆಗೆ ಮಕ್ಕಳನ್ನು ಕರೆದೊಯ್ಯುವವರು ಶಿಕ್ಷಕರು. ಉತ್ತಮ ಸಮಾಜ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಅತ್ಯಮೂಲ್ಯವಾಗಿದ್ದು, ಮಕ್ಕಳ ಭವಿಷ್ಯ ರೂಪಿಸುವ ಮಹತ್ತರ ಹೊಣೆಗಾರಿಕೆಯನ್ನು ಅವರು ನಿಸ್ವಾರ್ಥವಾಗಿ ನಿರ್ವಹಿಸುತ್ತಿದ್ದಾರೆ ಎಂದು ಉಡುಪಿ–ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಬ್ರಹ್ಮಾವರದ ಶ್ಯಾಮಿಲಿ ಶನಾಯ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಡಾ. ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ ಹಾಗೂ ಗೀತಾನಂದ ಫೌಂಡೇಶನ್ ಸಹಯೋಗದಲ್ಲಿ ನಡೆದ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಚಿಂತನೆಯಂತೆ ಶಿಕ್ಷಕರು ಕೇವಲ ಪಾಠ ಬೋಧಿಸುವವರಲ್ಲ; ವಿದ್ಯಾರ್ಥಿಗಳಲ್ಲಿ ರಾಷ್ಟ್ರಪ್ರೇಮ, ಮಾನವೀಯತೆ ಹಾಗೂ ಪ್ರತಿಭೆಯನ್ನು ಬೆಳೆಸುವ ಮಾರ್ಗದರ್ಶಕರು. ಮಕ್ಕಳನ್ನು ದೇಶದ ಆಸ್ತಿಯನ್ನಾಗಿ ರೂಪಿಸುವ ಜವಾಬ್ದಾರಿ ಶಿಕ್ಷಕರ ಮೇಲಿದೆ ಎಂದರು. ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಎ. ಗಫೂರ್ ಮಾತನಾಡಿ, ಪೋಷಕರ ಬಳಿಕ ಮಕ್ಕಳ ತಪ್ಪುಗಳನ್ನು ತಿದ್ದಿ, ಅವರನ್ನು ಸುಸಂಸ್ಕೃತರನ್ನಾಗಿ ರೂಪಿಸುವ ಪ್ರಮುಖ ಶಕ್ತಿ ಶಿಕ್ಷಕರು. ಕನ್ನಡ ಶಾಲೆಗಳನ್ನು ಉಳಿಸಿ ಬೆಳೆಸುವ ಪ್ರಯತ್ನಗಳೊಂದಿಗೆ ಶಿಕ್ಷಕರು ಮಕ್ಕಳಿಗೆ ಹೊಸ ದಿಕ್ಕು ನೀಡುತ್ತಿದ್ದಾರೆ ಎಂದರು.

ನಾರಾಯಣಗುರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮಂಜುನಾಥ ಪೂಜಾರಿ ಮಾತನಾಡಿ, ಉಡುಪಿ ಜಿಲ್ಲೆಯ ಶೈಕ್ಷಣಿಕ ಸಾಧನೆಗೆ ಶಿಕ್ಷಕರು, ಪೋಷಕರು, ವಿದ್ಯಾರ್ಥಿಗಳು ಹಾಗೂ ಆಡಳಿತ ವ್ಯವಸ್ಥೆಯ ಕೊಡುಗೆ ಮಹತ್ವದ್ದಾಗಿದೆ. ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸುವ ಮನೋಭಾವ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳಲ್ಲಿದೆ ಎಂದರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಮಾತನಾಡಿ, ಶಿಕ್ಷಣದ ಜತೆಗೆ ಮಕ್ಕಳಲ್ಲಿ ಜೀವನ ಮೌಲ್ಯ, ವೈಜ್ಞಾನಿಕ ಮನೋಭಾವ ಹಾಗೂ ಹೊಸ ಚಿಂತನೆಗಳನ್ನು ಬೆಳೆಸುವ ಕಾರ್ಯ ಶಿಕ್ಷಕರು ಮಾಡಬೇಕು. ಜಿಲ್ಲೆಯ ಶಿಕ್ಷಕರು ರಾಜ್ಯಕ್ಕೆ ಮಾದರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ ನಿವೃತ್ತ ಪ್ರಾಂಶುಪಾಲ ಬಿ. ಬಾಲಕೃಷ್ಣ ಶೆಟ್ಟಿ ಮೊಳಹಳ್ಳಿ ಉಪನ್ಯಾಸ ನೀಡಿದರು. ಈ ಸಂದರ್ಭದಲ್ಲಿ ಕಿರಿಯ ಪ್ರಾಥಮಿಕ, ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗಗಳಲ್ಲಿ ಪ್ರಸಕ್ತ ಸಾಲಿನ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ 21 ಶಿಕ್ಷಕರನ್ನು ಸನ್ಮಾನಿಸಲಾಯಿತು. ವಯೋನಿವೃತ್ತಿ ಹೊಂದಿದ ಶಿಕ್ಷಕರನ್ನೂ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್, ಜಿಪಂ ಉಪ ಕಾರ್ಯದರ್ಶಿ ಎಸ್.ಎಸ್. ಕಾದ್ರೋಳ್ಳಿ, ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಉಪನಿರ್ದೇಶಕ ಡಾ. ಅಶೋಕ್ ಕಾಮತ್, ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್‌ನ ಶಾಲಿನಿ ಜಿ. ಶಂಕರ್, ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ್ ಸಿ. ಕುಂದರ್ ಸೇರಿದಂತೆ ಶಿಕ್ಷಕ ಸಂಘಟನೆಗಳ ಪದಾಧಿಕಾರಿಗಳು, ಶಿಕ್ಷಕರು ಹಾಗೂ ಗಣ್ಯರು ಉಪಸ್ಥಿತರಿದ್ದರು.

ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಲೋಕೇಶ್ ಸಿ. ಸ್ವಾಗತಿಸಿದರು. ಮಂಜುಳಾ ಜಯಕರ್ ಹಾಗೂ ಸತೀಶ್ ಚಂದ್ರ ಶೆಟ್ಟಿ ಚಿತ್ರಪಾಡಿ ನಿರೂಪಿಸಿದರು. ಬ್ರಹ್ಮಾವರ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಉಮಾ ಪಿ. ವಂದಿಸಿದರು.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles