ಉಡುಪಿ: ಸಂಕಷ್ಟದಲ್ಲಿರುವ ಮಹಿಳೆಯರು ಹಾಗೂ ಮಕ್ಕಳಿಗೆ ರಕ್ಷಣೆ ಮತ್ತು ನೆರವು ನೀಡುವ ಉದ್ದೇಶದಿಂದ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಅಕ್ಕಪಡೆ ಯೋಜನೆ ಜಿಲ್ಲೆಯಲ್ಲಿ ಜಾರಿಗೆ ತರಲಾಗಿದೆ ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ತಿಳಿಸಿದ್ದಾರೆ.

ನಗರದ ಮಣಿಪಾಲ ರಜತಾದ್ರಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಅಕ್ಕಪಡೆ ಯೋಜನೆಯ ವಾಹನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಪೊಲೀಸ್ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಹಭಾಗಿತ್ವದಲ್ಲಿ ಅಕ್ಕಪಡೆ ಕಾರ್ಯನಿರ್ವಹಿಸಲಿದೆ ಎಂದರು. ಮಹಿಳೆಯರು ಮತ್ತು ಮಕ್ಕಳಿಗೆ ಸುರಕ್ಷತಾ ಭಾವನೆ ಮೂಡಿಸಿ, ಭಯಮುಕ್ತ ವಾತಾವರಣ ನಿರ್ಮಿಸುವುದು ಈ ಯೋಜನೆಯ ಉದ್ದೇಶವಾಗಿದೆ ಎಂದು ಹೇಳಿದರು.

ಅಕ್ಕಪಡೆ ವಾಹನದಲ್ಲಿ ನಾಲ್ವರು ಗೃಹ ರಕ್ಷಕಿಯರು ಹಾಗೂ ಪೊಲೀಸ್ ಇಲಾಖೆಯೊಬ್ಬ ಚಾಲಕ ಎರಡು ಪಾಳಿಗಳಲ್ಲಿ ಕರ್ತವ್ಯ ನಿರ್ವಹಿಸಲಿದ್ದು, ಶಾಲಾ-ಕಾಲೇಜು, ಬಸ್ ನಿಲ್ದಾಣ, ದೇವಸ್ಥಾನ, ಹಾಸ್ಟೆಲ್ ಹಾಗೂ ಜನಸಂದಣಿ ಪ್ರದೇಶಗಳಲ್ಲಿ ಗಸ್ತು ತಿರುಗಲಿದೆ. ಯುವತಿಯರನ್ನು ಚುಡಾಯಿಸುವ, ಅಸಭ್ಯವಾಗಿ ವರ್ತಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್ ಮಾತನಾಡಿ, ಅಕ್ಕಪಡೆ ಯೋಜನೆ ಮಹಿಳೆಯರು ಮತ್ತು ಮಕ್ಕಳ ಮೇಲಿನ ದೌರ್ಜನ್ಯ, ಹಿಂಸೆ ಹಾಗೂ ಶೋಷಣೆ ತಡೆಗಟ್ಟಲು ಸಹಕಾರಿಯಾಗಲಿದೆ ಎಂದರು. ತುರ್ತು ಸಂದರ್ಭಗಳಲ್ಲಿ ಸ್ಪಂದಿಸಲು ಅಕ್ಕಪಡೆ ವಾಹನಗಳಲ್ಲಿ ವೈರ್‌ಲೆಸ್ ವ್ಯವಸ್ಥೆ ಅಳವಡಿಸಲಾಗಿದ್ದು, ಮಕ್ಕಳ ಸಹಾಯವಾಣಿ 1098, ಮಹಿಳಾ ಸಹಾಯವಾಣಿ 181 ಹಾಗೂ ಪೊಲೀಸ್ ಸಹಾಯವಾಣಿ 112 ಸಂಖ್ಯೆಗೆ ಕರೆ ಮಾಡುವ ಮೂಲಕ ನೆರವು ಪಡೆಯಬಹುದಾಗಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸಿಇಒ ಪ್ರತೀಕ್ ಬಾಯಲ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.



