ಉಡುಪಿ : ಕೇಂದ್ರ ಹಾಗೂ ರಾಜ್ಯ ಸರ್ಕಾರದ ಪ್ರಾಯೋಜಿತ ಯೋಜನೆಗಳಡಿ ಆಯ್ಕೆಯಾಗಿ ಆರ್ಥಿಕ ನೆರವು ನೀಡಲು ಶಿಫಾರಸಾದ ಅರ್ಜಿಗಳನ್ನು ಆದ್ಯತೆಯ ಮೇಲೆ ಜನರಿಗೆ ಅನುಕೂಲವಾಗುವಂತೆ ಸರಳ ರೀತಿಯಲ್ಲಿ ನಿಯಮಾನುಸಾರ ವಿಲೇವಾರಿ ಮಾಡಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಹೇಳಿದರು.

ಅವರು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ.ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆದ ಜಿಲ್ಲಾ ಲೀಡ್ ಬ್ಯಾಂಕ್ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಪಿ.ಎಂ.ವಿಶ್ವಕರ್ಮ ಯೋಜನೆಯಡಿ ಈವರೆಗೆ 5661 ಅರ್ಜಿಗಳು ಸ್ವೀಕೃತವಾಗಿದ್ದು, 1337 ಅರ್ಜಿಗಳು ತಿರಸ್ಕೃತಗೊಂಡು, 3937 ಫಲಾನುಭವಿಗಳಿಗೆ 35.29 ಕೋಟಿ ರೂ. ಸಾಲ ವಿತರಿಸಲಾಗಿದೆ. ತಿರಸ್ಕೃತ ಅರ್ಜಿಗಳ ಸಂಖ್ಯೆ ಕಡಿಮೆಯಾಗಬೇಕು. ಬಾಕಿ ಇರುವ ಅರ್ಜಿಗಳ ವಿಲೇವಾರಿಗೆ ಶೀಘ್ರ ಕ್ರಮ ವಹಿಸಬೇಕು ಎಂದರು.

ಬೆಂಗಳೂರು ಆರ್.ಬಿ.ಐ ಎಫ್.ಐ.ಡಿ.ಡಿ ಲೀಡ್ ಡಿಸ್ಟಿçಕ್ಟ್ ಆಫೀಸರ್ ನಿಶಾ ಠಾಕೂರ್, ಮಾತನಾಡಿ, ಆರ್.ಬಿ.ಐ ನಿಯಮಾನುಸಾರ ಜಿಲ್ಲೆಗಳ ಸಿ.ಡಿ ಅನುಪಾತವು ಶೇ. 50 ಕ್ಕಿಂತ ಕಡಿಮೆ ಇರಬಾರದು. ಇದನ್ನು ಹೆಚ್ಚಿಸಲು ಎಲ್ಲಾ ಬ್ಯಾಂಕ್ಗಳ ಅಧಿಕಾರಿಗಳೂ ಕಾರ್ಯಪ್ರವೃತ್ತರಾಗಬೇಕು ಎಂದರು. ಕೆನರಾ ಬ್ಯಾಂಕ್ ರೀಜನಲ್ ಮ್ಯಾನೆಜರ್ ಮಹಾಮಾಯ ಪ್ರಸಾದ್ ರಾಯ್ ಮಾತನಾಡಿ, ಕಳೆದ ವರ್ಷಕ್ಕೆ ಹೋಲಿಸಿದ್ದಲ್ಲಿ ಬ್ಯಾಂಕಿಂಗ್ ಠೇವಣಿ ಅನುಪಾತವು ಶೇ.47.66 ಇದ್ದು, ಪ್ರಸಕ್ತ ಸಾಲಿನಲ್ಲಿ ಶೇ.48.62 ರಷ್ಟಾಗಿ ಶೇ. 0.96 ರಷ್ಟು ಏರಿಕೆಯಾಗಿದೆ. ಸಿ.ಡಿ ಅನುಪಾತದಲ್ಲಿ ಜಿಲ್ಲೆಯು ಶೇ. 50 ಕ್ಕಿಂತ ಕಡಿಮೆ ಇರುವುದು ವಿಷಾಧನೀಯವಾಗಿದ್ದು, ಮುಂದಿನ ದಿನಗಳಲ್ಲಿ ಸಿ.ಡಿ ಅನುಪಾತ ಹೆಚ್ಚಿಸಲು ಎಲ್ಲಾ ಬ್ಯಾಂಕರ್ಸ್ಗಳು ಕಾರ್ಯಪ್ರವೃತ್ತರಾಗಬೇಕು ಎಂದರು.

ಸಭೆಯಲ್ಲಿ ನಬಾರ್ಡ್ನ ಡಿ.ಡಿ.ಎಂ ಸಂಗೀತಾ ಕಾರ್ಥಾ, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು, ಬ್ಯಾಂಕುಗಳ ಮುಖ್ಯಸ್ಥರುಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು



