Wednesday, May 13, 2026

spot_img

ಸ್ಕ್ಯಾನಿಂಗ್ ಸೆಂಟರ್‌ಗಳಿಗೆ ನಿಯಮ ಪಾಲನೆ ಕಡ್ಡಾಯ: ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

ಉಡುಪಿ : ಸರ್ಕಾರ ಜಾರಿಗೆ ತಂದಿರುವ ನಿಯಮಗಳನ್ನು ಸಂಪೂರ್ಣವಾಗಿ ಪಾಲಿಸುವ ಸ್ಕ್ಯಾನಿಂಗ್ ಸೆಂಟರ್‌ಗಳಿಗೆ ಮಾತ್ರ ಅನುಮತಿ ನೀಡಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಪಿ.ಸಿ.ಪಿ.ಎನ್.ಡಿ.ಟಿ ಜಿಲ್ಲಾ ಮಟ್ಟದ ಸಕ್ಷಮ ಪ್ರಾಧಿಕಾರ ಸಮಿತಿ ಸಭೆ ಹಾಗೂ ಜಿಲ್ಲಾ ಮಟ್ಟದ ಖಾಸಗಿ ವೈದ್ಯಕೀಯ ಸಂಸ್ಥೆಗಳ ನೋಂದಣಿ ಮತ್ತು ಕುಂದುಕೊರತೆ ನಿವಾರಣಾ ಪ್ರಾಧಿಕಾರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸಾರ್ವಜನಿಕರಿಗೆ ಉತ್ತಮ ಆರೋಗ್ಯ ಸೇವೆ ಒದಗಿಸುವ ಮತ್ತು ನಿಯಂತ್ರಣ ಸಾಧಿಸುವ ಉದ್ದೇಶದಿಂದ ಸರ್ಕಾರ ಪಿ.ಸಿ.ಪಿ.ಎನ್.ಡಿ.ಟಿ ಕಾಯಿದೆಯನ್ನು ಜಾರಿಗೆ ತಂದಿದೆ. ಅಲ್ಟ್ರಾಸೌಂಡ್ ಸ್ಕ್ಯಾನಿಂಗ್ ಯಂತ್ರಗಳನ್ನು ಸ್ಥಾಪಿಸಲು ಅರ್ಜಿ ಸಲ್ಲಿಸುವ ಯಾವುದೇ ಸಂಸ್ಥೆ ಅಥವಾ ವ್ಯಕ್ತಿಗಳು ಕಾಯಿದೆಯ ಎಲ್ಲ ಷರತ್ತುಗಳನ್ನು ಪಾಲಿಸಿದರೆ ಮಾತ್ರ ಅನುಮತಿ ನೀಡಬೇಕು ಎಂದು ಹೇಳಿದರು.

ಸ್ಕ್ಯಾನಿಂಗ್ ಸೆಂಟರ್‌ಗಳಲ್ಲಿ ಕರ್ತವ್ಯ ನಿರ್ವಹಿಸುವ ರೇಡಿಯಾಲಜಿಸ್ಟ್ ವೈದ್ಯರ ವಿವರಗಳನ್ನು ಕಡ್ಡಾಯವಾಗಿ ಪ್ರದರ್ಶಿಸಬೇಕು. ಸರ್ಕಾರದ ಅನುಮತಿ ಪತ್ರವನ್ನು ಸ್ಪಷ್ಟವಾಗಿ ಪ್ರದರ್ಶಿಸುವುದರ ಜೊತೆಗೆ ಅಗತ್ಯ ದಾಖಲೆ ಹಾಗೂ ರಿಜಿಸ್ಟರ್‌ಗಳನ್ನು ಸಮರ್ಪಕವಾಗಿ ನಿರ್ವಹಿಸಬೇಕು. ಸ್ಕ್ಯಾನಿಂಗ್ ಯಂತ್ರ ಅಥವಾ ರೇಡಿಯಾಲಜಿಸ್ಟ್ ವೈದ್ಯರ ಬದಲಾವಣೆ ಮಾಡುವ ಸಂದರ್ಭಗಳಲ್ಲಿ ಜಿಲ್ಲಾ ಮಟ್ಟದ ಸಕ್ಷಮ ಪ್ರಾಧಿಕಾರದ ಪೂರ್ವಾನುಮತಿ ಪಡೆಯಬೇಕು. ನಿಯಮ ಉಲ್ಲಂಘನೆ ಮಾಡಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ಗರ್ಭಪೂರ್ವ ಮತ್ತು ಪ್ರಸವಪೂರ್ವ ಭ್ರೂಣಲಿಂಗ ಪತ್ತೆ ಹಾಗೂ ಭ್ರೂಣಹತ್ಯೆ ಶಿಕ್ಷಾರ್ಹ ಅಪರಾಧವಾಗಿದ್ದು, ಈ ಬಗ್ಗೆ ಜಿಲ್ಲಾ ಮಟ್ಟದ ಸಮಿತಿಗಳು ಕಟ್ಟುನಿಟ್ಟಿನ ನಿಗಾ ವಹಿಸಬೇಕು. ರೋಗಿಗಳು ತಪಾಸಣೆಗಾಗಿ ಸ್ಕ್ಯಾನಿಂಗ್ ಕೇಂದ್ರಗಳಿಗೆ ಬಂದಾಗ ಅವರಿಗೆ ಅನಗತ್ಯ ತೊಂದರೆ ಆಗದಂತೆ ತ್ವರಿತ ಸೇವೆ ಒದಗಿಸಬೇಕು. ಜಿಲ್ಲೆಯಲ್ಲಿನ ಎಲ್ಲಾ ನೋಂದಾಯಿತ ಸ್ಕ್ಯಾನಿಂಗ್ ಸೆಂಟರ್ ಹಾಗೂ ಆಸ್ಪತ್ರೆಗಳಿಗೆ ಮೂರು ತಿಂಗಳೊಳಗೆ ಪರಿಶೀಲನಾ ಸಮಿತಿ ಭೇಟಿ ನೀಡಿ ಕಾಯಿದೆಯ ಅನುಷ್ಠಾನ ಪರಿಶೀಲಿಸಬೇಕು. ಯಾವುದೇ ಲೋಪ ಕಂಡುಬಂದರೆ ಸಂಬಂಧಿತ ಸಂಸ್ಥೆಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದರು.

ತಾಲೂಕು ಮಟ್ಟದ ಪರಿಶೀಲನಾ ಸಮಿತಿಗಳು 2025ರ ಸೆಪ್ಟೆಂಬರ್‌ನಿಂದ 2026ರ ಏಪ್ರಿಲ್‌ವರೆಗೆ ಉಡುಪಿ, ಕುಂದಾಪುರ ಹಾಗೂ ಕಾರ್ಕಳ ತಾಲೂಕುಗಳ ಖಾಸಗಿ ಆರೋಗ್ಯ ಸಂಸ್ಥೆಗಳಿಗೆ ಭೇಟಿ ನೀಡಿ, ಅಗ್ನಿ ನಿರೋಧಕ ಸಾಧನಗಳ ಕೊರತೆ ಮತ್ತು ಕೆ.ಪಿ.ಎಂ.ಇ ನಿಯಮ ಉಲ್ಲಂಘನೆ ಹಿನ್ನೆಲೆ ಅನೇಕ ಸಂಸ್ಥೆಗಳಿಗೆ ನೋಟಿಸ್ ಜಾರಿ ಮಾಡಿರುವುದಾಗಿ ಸಭೆಯಲ್ಲಿ ಮಾಹಿತಿ ನೀಡಲಾಯಿತು.

ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಬಸವರಾಜ ಹುಬ್ಬಳ್ಳಿ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ಶ್ರೀರಾಮ್ ರಾವ್ ಕೆ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಸುಬ್ರಹಣ್ಯ, ಪೌರಾಯುಕ್ತ ಮಹಾಂತೇಶ್ ಹಂಗರಗಿ, ತಾಲೂಕು ವೈದ್ಯಾಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles