Thursday, August 20, 2026

spot_img

ಹಿಂದುಳಿದ ವರ್ಗದವರ ಏಳಿಗೆಗೆ ಧ್ವನಿಯಾದವರು ದೇವರಾಜ ಅರಸು: ಎಂ.ಎ. ಗಫೂರ್

ಉಡುಪಿ : ದಿವಂಗತ ಡಿ. ದೇವರಾಜ ಅರಸು ಅವರು ಸಮಸಮಾಜ ನಿರ್ಮಾಣದ ರೂವಾರಿಯಾಗಿ, ಹಿಂದುಳಿದ ವರ್ಗಗಳು ಹಾಗೂ ದೀನದಲಿತರ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಅಭಿವೃದ್ಧಿಗೆ ಶ್ರಮಿಸಿ ಅವರನ್ನು ಸಮಾಜದ ಮುಖ್ಯವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಎ. ಗಫೂರ್ ಹೇಳಿದರು. ಉಡುಪಿಯ ಮಿಷನ್ ಕಂಪೌಂಡ್‌ನ ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಜಗನ್ನಾಥ ಸಭಾಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ನಗರಸಭೆ ಉಡುಪಿ ವತಿಯಿಂದ ಆಯೋಜಿಸಿದ್ದ ಡಿ. ದೇವರಾಜ ಅರಸು ಅವರ 111ನೇ ಜನ್ಮ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಬಸವಣ್ಣನವರ ಸಮಾನತೆಯ ಆಶಯವನ್ನು ಮುಂದುವರಿಸಿದ ಅರಸು ಅವರು ಡಾ. ಬಿ.ಆರ್. ಅಂಬೇಡ್ಕರ್ ಅವರ ಸಂವಿಧಾನದ ಆಶಯಗಳನ್ನು ಜಾರಿಗೆ ತರಲು ಪ್ರಾಮಾಣಿಕವಾಗಿ ಪ್ರಯತ್ನಿಸಿದ್ದರು. ಉಳುವವನೇ ಭೂಮಿಯ ಒಡೆಯ ಎಂಬ ಭೂ ಸುಧಾರಣಾ ಕಾಯ್ದೆ ಸೇರಿದಂತೆ ಹಲವು ಕ್ರಾಂತಿಕಾರಿ ಕ್ರಮಗಳ ಮೂಲಕ ಶೋಷಿತ ವರ್ಗಗಳಿಗೆ ಸಾಮಾಜಿಕ ನ್ಯಾಯ ಒದಗಿಸಿದರು ಎಂದು ಹೇಳಿದರು. ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು ಮಾತನಾಡಿ, ರೈತರು ಮತ್ತು ಬಡಜನರಿಗೆ ಅರಸು ಅವರು ಆಶಾಕಿರಣವಾಗಿದ್ದರು. ಅಸ್ಪೃಶ್ಯತೆ, ಜೀತ ಪದ್ಧತಿ ಸೇರಿದಂತೆ ಹಲವು ಸಾಮಾಜಿಕ ಅನಿಷ್ಟಗಳ ನಿರ್ಮೂಲನೆಗೆ ಅಡಿಪಾಯ ಹಾಕಿದರು ಎಂದರು.

ಉಡುಪಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ರಮೇಶ್ ಕಾಂಚನ್ ಮಾತನಾಡಿ, ಸಮಾನತೆ ಮತ್ತು ಸಾಮಾಜಿಕ ನ್ಯಾಯದ ಮೂಲಕ ಶೋಷಿತರಿಗೆ ಶಕ್ತಿ ತುಂಬಿದ ಅರಸು ಅವರು ಕರ್ನಾಟಕ ರಾಜಕೀಯದಲ್ಲಿ ಜನಪರ ಆಡಳಿತದ ಪ್ರತಿರೂಪವಾಗಿದ್ದರು ಎಂದರು. ಪ್ರಾಂಶುಪಾಲ ನಾಗರಾಜ್ ಅವರು ದೇವರಾಜ ಅರಸು ಅವರ ಜೀವನ ಮತ್ತು ಸಾಧನೆ ಕುರಿತು ಉಪನ್ಯಾಸ ನೀಡಿ, ಭೂ ಸುಧಾರಣೆ, ವಿದ್ಯಾರ್ಥಿಗಳಿಗೆ ಸಹಾಯಧನ, ನಿರುದ್ಯೋಗಿಗಳಿಗೆ ಸ್ಟೈಫಂಡ್, ಹೆಣ್ಣು ಮಕ್ಕಳಿಗಾಗಿ ಪ್ರತ್ಯೇಕ ವಿದ್ಯಾರ್ಥಿನಿಲಯಗಳ ಸ್ಥಾಪನೆ ಸೇರಿದಂತೆ ಹಲವು ಜನಪರ ಕಾರ್ಯಕ್ರಮಗಳು ಇಂದಿಗೂ ಮಾದರಿಯಾಗಿವೆ ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಎಸ್.ಎಸ್. ಕಾದ್ರೋಳ್ಳಿ ವಹಿಸಿದ್ದರು. 2025-26ನೇ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಸತಿ ನಿಲಯಗಳ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮವೂ ನಡೆಯಿತು.

ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್, ಎಎಸ್‌ಪಿ ಸುಧಾಕರ್ ನಾಯಕ್, ಯೋಜನಾ ನಿರ್ದೇಶಕ ಸುಬ್ರಹ್ಮಣ್ಯ ಶೆಟ್ಟಿ, ನಾರಾಯಣ ಸ್ವಾಮಿ, ಶಂಕರ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು. ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಹಾಕಪ್ಪ ಆರ್. ಲಮಾಣಿ ಸ್ವಾಗತಿಸಿದರು. ವಿದ್ಯಾರ್ಥಿನಿಯರಾದ ಚೈತ್ರಾ ಕೆ.ಸಿ. ಹಾಗೂ ಗಾನವಿ ನಿರೂಪಿಸಿದರು. ತಾಲೂಕು ಕಲ್ಯಾಣಾಧಿಕಾರಿ ಶ್ರೀಕಾಂತ್ ವಂದಿಸಿದರು.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles