Monday, August 31, 2026

spot_img

ಹಿರಿಯ ನಾಗರಿಕರ ಕಲ್ಯಾಣ ಕಾರ್ಯಕ್ರಮಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಸೂಚನೆ

ಉಡುಪಿ : ಹಿರಿಯ ನಾಗರಿಕರ ಕಲ್ಯಾಣಕ್ಕಾಗಿ ಸರ್ಕಾರ ರೂಪಿಸಿರುವ ವಿವಿಧ ಯೋಜನೆಗಳು ಹಾಗೂ ಕಾರ್ಯಕ್ರಮಗಳನ್ನು ಸಂಬಂಧಪಟ್ಟ ಇಲಾಖೆಗಳ ಸಮನ್ವಯದೊಂದಿಗೆ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಪ್ರೇಮಮೂರ್ತಿ ಕೆ. ಸೂಚಿಸಿದರು. ನಗರದ ಮಣಿಪಾಲ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಎನ್‌ಐಸಿ ಸಭಾಂಗಣದಲ್ಲಿ ಕೇಂದ್ರ ಸರ್ಕಾರದ ಸ್ಟೇಟ್ ಆಕ್ಷನ್ ಪ್ಲಾನ್ ಫಾರ್ ಸೀನಿಯರ್ ಸಿಟಿಜನ್ ಯೋಜನೆಯಡಿ ಹಿರಿಯ ನಾಗರಿಕರಿಗೆ ವಿವಿಧ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವ ಕುರಿತು ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯಾದ್ಯಂತ ಹಿರಿಯ ನಾಗರಿಕರಿಗಾಗಿ ಒಂದು ದಿನದ ನೃತ್ಯ ಚಿಕಿತ್ಸೆ, ಲಘು ಚಲನೆಯ ವ್ಯಾಯಾಮ, ಕಲಾ ಚಿಕಿತ್ಸೆ, ಏಕಪಾತ್ರಾಭಿನಯ ಹಾಗೂ ಸಂಗೀತ ಚಿಕಿತ್ಸಾ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು. ಇದರೊಂದಿಗೆ ಒಂದು ದಿನದ ಅಂತರ-ಪೀಳಿಗೆ ಬಾಂಧವ್ಯ ಮೇಳ, ಆರೋಗ್ಯ ಮತ್ತು ವೈದ್ಯಕೀಯ ಶಿಬಿರಗಳು, ಹಾಗೂ ಪೋಷಕರು ಮತ್ತು ಹಿರಿಯ ನಾಗರಿಕರ ನಿರ್ವಹಣೆ ಮತ್ತು ಕಲ್ಯಾಣ ಕಾಯ್ದೆ-2007 ಕುರಿತು ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತು ಕಾರ್ಯಕರ್ತರಿಗೆ ಕಾರ್ಯಾಗಾರ ಆಯೋಜಿಸಲಾಗುವುದು ಎಂದರು.

ತಾಲೂಕು ಮಟ್ಟದಲ್ಲಿ ಕಾನೂನು ಅರಿವು ಮತ್ತು ಸಹಾಯ ಕಾರ್ಯಕ್ರಮಗಳನ್ನು ನಡೆಸಲಾಗುವುದು. ಹಿರಿಯ ನಾಗರಿಕರಿಗಾಗಿ ಸಾಂಸ್ಕೃತಿಕ ಕಾರ್ಯಕ್ರಮಗಳು, ಕಾನೂನು ಅರಿವು, ಆರೋಗ್ಯ ತಪಾಸಣೆ, ಸಂಪನ್ಮೂಲ ವ್ಯಕ್ತಿಗಳಿಂದ ಮಾಹಿತಿ, ಆಪ್ತಸಮಾಲೋಚನೆ ಸೇರಿದಂತೆ ವಿವಿಧ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಸಾಧನೆಗೈದ ಶತಾಯುಷಿಗಳನ್ನು ಸನ್ಮಾನಿಸಲಾಗುವುದು ಎಂದು ತಿಳಿಸಿದರು.ಹಿರಿಯ ನಾಗರಿಕರ ಆರೋಗ್ಯ ಹಾಗೂ ಸುರಕ್ಷತೆಗೆ ಆದ್ಯತೆ ನೀಡಿ, ಅವರ ವಯೋಮಾನಕ್ಕೆ ಅನುಗುಣವಾದ ಸುರಕ್ಷಿತ ಚಟುವಟಿಕೆಗಳನ್ನು ಆಯೋಜಿಸಬೇಕು. ಕಾರ್ಯಕ್ರಮ ನಡೆಯುವ ಸ್ಥಳಗಳಲ್ಲಿ ಕುಡಿಯುವ ನೀರು, ಶೌಚಾಲಯ, ಪ್ರಥಮ ಚಿಕಿತ್ಸೆ ಸೇರಿದಂತೆ ಅಗತ್ಯ ಸುರಕ್ಷತಾ ವ್ಯವಸ್ಥೆಗಳನ್ನು ಕಲ್ಪಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಹಿರಿಯ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮಗಳಲ್ಲಿ ಭಾಗವಹಿಸುವಂತೆ ಪ್ರೋತ್ಸಾಹಿಸಬೇಕು. ವೃದ್ಧಾಶ್ರಮಗಳಲ್ಲಿ ಸಕ್ರಿಯರಾಗಿರುವ ಹಿರಿಯ ನಾಗರಿಕರನ್ನೂ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವಂತೆ ಮಾಡಬೇಕು. ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರು, ಹಿರಿಯ ನಾಗರಿಕರ ಸಂಘಗಳು ಹಾಗೂ ಸ್ವಯಂಸೇವಾ ಸಂಸ್ಥೆಗಳು ಕಾರ್ಯಕ್ರಮಗಳ ಕುರಿತು ವ್ಯಾಪಕ ಪ್ರಚಾರ ಕೈಗೊಂಡು, ಹೆಚ್ಚಿನ ಸಂಖ್ಯೆಯಲ್ಲಿ ಹಿರಿಯ ನಾಗರಿಕರ ನೋಂದಣಿಗೆ ಕ್ರಮ ವಹಿಸಬೇಕು ಎಂದರು. ಸಭೆಯಲ್ಲಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ರತ್ನಾ, ರೆಡ್‌ಕ್ರಾಸ್ ಕಾರ್ಯದರ್ಶಿ ಗಣನಾಥ ಶೆಟ್ಟಿ ಎಕ್ಕಾರು, ಲೀಡ್ ಕಾಲೇಜು ಪ್ರಾಂಶುಪಾಲೆ ಡಾ. ನಿಕೇತನಾ, ಹಿರಿಯ ನಾಗರಿಕರ ಜಿಲ್ಲಾ ಒಕ್ಕೂಟದ ಅಧ್ಯಕ್ಷ ವಿಶ್ವನಾಥ ಹೆಗಡೆ, ಹಿರಿಯ ನಾಗರಿಕರ ಸಹಾಯವಾಣಿ ಕೇಂದ್ರದ ಕಾರ್ಯದರ್ಶಿ ಮಮತಾ ಶೆಟ್ಟಿ, ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles