ಉಡುಪಿ : ದಕ್ಷಿಣ ಭಾರತದ ಲಕ್ಷಾಂತರ ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಸಮಸ್ಯೆಗಳ ಪರಿಹಾರಕ್ಕಾಗಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ನವದೆಹಲಿಯಲ್ಲಿ ಮಹತ್ವದ ಸಭೆಯಲ್ಲಿ ಭಾಗವಹಿಸಿ ಅಡಿಕೆ ಬೆಳೆಗಾರರ ಪರವಾಗಿ ಬಲವಾದ ಮನವಿ ಮಂಡಿಸಿದರು. ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹಾಗೂ ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ ಅವರ ನೇತೃತ್ವದಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿ ಮಾಡಿದ ನಿಯೋಗದಲ್ಲಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಕೂಡ ಭಾಗವಹಿಸಿದರು.

ಮಹಾರಾಷ್ಟ್ರದಲ್ಲಿ ಅಗತ್ಯ ದಾಖಲೆಗಳನ್ನು ಹೊಂದಿದ್ದರೂ ಅಡಿಕೆ ಸಾಗಣೆ ವಾಹನಗಳನ್ನು ತಡೆಹಿಡಿಯುತ್ತಿರುವುದರಿಂದ ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ಅಡಿಕೆ ಬೆಳೆಗಾರರು, ಸಹಕಾರಿ ಸಂಸ್ಥೆಗಳು ಹಾಗೂ ವ್ಯಾಪಾರಿಗಳು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ನಿಯೋಗ ಗಮನ ಸೆಳೆಯಿತು. ಈ ಹಿನ್ನೆಲೆಯಲ್ಲಿ ಈಗಾಗಲೇ ತಡೆಹಿಡಿಯಲಾಗಿರುವ ಅಡಿಕೆ ಸಾಗಣೆ ವಾಹನಗಳನ್ನು ತಕ್ಷಣ ಬಿಡುಗಡೆ ಮಾಡಬೇಕು. ಮುಂದಿನ ದಿನಗಳಲ್ಲಿ ಅಗತ್ಯ ದಾಖಲೆಗಳನ್ನು ಹೊಂದಿರುವ ಅಡಿಕೆ ಸಾಗಣೆ ವಾಹನಗಳ ಸುಗಮ ಸಂಚಾರಕ್ಕೆ ಪಾರದರ್ಶಕ ಹಾಗೂ ಶಾಶ್ವತ ಕಾರ್ಯವಿಧಾನ ರೂಪಿಸಬೇಕು ಎಂದು ನಿಯೋಗ ಒತ್ತಾಯಿಸಿತು.

ಸಭೆಯಲ್ಲಿ ಮಮ್ಕೋಸ್, ಕ್ಯಾಂಪ್ಕೋ, ತುಂಪ್ಕೋಸ್ ಹಾಗೂ ಕರ್ನಾಟಕ ರಾಜ್ಯ ಅಡಿಕೆ ಮಾರಾಟ ಸಹಕಾರ ಸಂಘಗಳ ಒಕ್ಕೂಟದ ಪ್ರತಿನಿಧಿಗಳು ಭಾಗವಹಿಸಿ ಅಡಿಕೆ ಬೆಳೆಗಾರರು ಮತ್ತು ವ್ಯಾಪಾರಿಗಳು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ವಿವರಿಸಿದರು. ಮನವಿಯನ್ನು ಆಲಿಸಿದ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು, ಅಡಿಕೆ ಬೆಳೆಗಾರರ ಹಿತಾಸಕ್ತಿಯನ್ನು ಕಾಪಾಡಲು ಅಗತ್ಯ ಕ್ರಮ ಕೈಗೊಳ್ಳುವ ಭರವಸೆ ನೀಡಿದರು ಎಂದು ತಿಳಿದುಬಂದಿದೆ. ಸಭೆಯಲ್ಲಿ ಮಾಜಿ ಸಚಿವ ಹಾಗೂ ಶಾಸಕ ಅರವಿಂದ ಲಿಂಬಾವಳಿ, ಸಂಸದ ಬಿ.ವೈ. ರಾಘವೇಂದ್ರ, ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಸೇರಿದಂತೆ ಮಮ್ಕೋಸ್, ಕ್ಯಾಂಪ್ಕೋ ಹಾಗೂ ವಿವಿಧ ಅಡಿಕೆ ಸಹಕಾರಿ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.


