Sunday, May 3, 2026

spot_img

ಆರೋಗ್ಯ ಸೇವೆಗಳು ಅಗತ್ಯವಿರುವವರಿಗೆ ತಲುಪಲಿ: ಸಂಸದ ಕೋಟ

ಉಡುಪಿ : ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಡಿ ಜಿಲ್ಲಾ ಆಸ್ಪತ್ರೆಗಳಿಂದ ಹೆಚ್ಚಿನ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗಳಿಗೆ ರೆಫರ್ ಮಾಡಲಾಗುವ ರೋಗಿಗಳಿಗೆ ಅಗತ್ಯ ಚಿಕಿತ್ಸಾ ನೆರವು ದೊರೆಯುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಸೂಚಿಸಿದರು.

ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ (ದಿಶಾ) ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಆಯುಷ್ಮಾನ್ ಯೋಜನೆಯಡಿ ರೆಫರ್ ಆಗುವ ರೋಗಿಗಳಿಗೆ ಸಮರ್ಪಕ ಚಿಕಿತ್ಸೆ ದೊರೆಯುತ್ತಿಲ್ಲ ಎಂಬ ದೂರುಗಳು ಕೇಳಿಬರುತ್ತಿವೆ. ಇದಕ್ಕಾಗಿ ನೇಮಕಗೊಂಡಿರುವ ಕೋ-ಆರ್ಡಿನೇಟರ್‌ಗಳು ಸಮರ್ಪಕವಾಗಿ ಸ್ಪಂದಿಸಬೇಕು ಎಂದು ಹೇಳಿದರು.

ಮಣಿಪಾಲದ ಖಾಸಗಿ ಆಸ್ಪತ್ರೆಗಳು ಜಿಲ್ಲಾ ಆಸ್ಪತ್ರೆಯಿಂದ ರೆಫರ್ ಆಗುವ ರೋಗಿಗಳಿಗೆ ಚಿಕಿತ್ಸೆ ನೀಡಲು ಸ್ಪಂದಿಸುತ್ತಿಲ್ಲ ಎಂಬ ದೂರಿನ ಹಿನ್ನೆಲೆ, ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜನಪ್ರತಿನಿಧಿಗಳ ಸಭೆ ನಡೆಸುವಂತೆ ಸೂಚಿಸಿದರು. ಬ್ರಹ್ಮಾವರದಲ್ಲಿ ನಿರ್ಮಾಣವಾಗುತ್ತಿರುವ ಇಎಸ್‌ಐ ಆಸ್ಪತ್ರೆಗೆ ಮಂಜೂರಾದ 2.5 ಕೋಟಿ ರೂ. ಅನುದಾನದ ಕಾಮಗಾರಿ ತ್ವರಿತಗತಿಯಲ್ಲಿ ಪೂರ್ಣಗೊಳ್ಳಬೇಕು ಎಂದ ಅವರು, ಸಭೆಗೆ ಗೈರಾಗಿದ್ದ ಅಧಿಕಾರಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿ ಕಾರಣ ಕೇಳಿ ನೋಟಿಸ್ ನೀಡುವಂತೆ ಸೂಚಿಸಿದರು.

ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆಯಡಿ ಮಂಜೂರಾದ ರಸ್ತೆ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಬೇಕು. ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳಿಗೂ ವೇಗ ನೀಡಬೇಕು ಎಂದು ಹೇಳಿದರು. ಕುಸುಮ್ ಯೋಜನೆಯಡಿ ರೈತರಿಗೆ ಪಂಪ್‌ಸೆಟ್ ಅಳವಡಿಕೆ ಪ್ರಗತಿ ಹೆಚ್ಚಿಸಬೇಕು. ಜಲ್ ಜೀವನ್ ಮಿಷನ್ ಯೋಜನೆಯಡಿ ಮನೆಮನೆಗೆ ನೀರು ಪೂರೈಕೆ ಕಾರ್ಯ ಸಮರ್ಪಕವಾಗಿ ನಡೆಯಬೇಕು ಎಂದು ಸೂಚಿಸಿದರು.

ನಗರ ಮತ್ತು ಗ್ರಾಮೀಣ ಭಾಗಗಳಲ್ಲಿ ಘನತ್ಯಾಜ್ಯ ವಿಲೇವಾರಿಯನ್ನು ವೈಜ್ಞಾನಿಕವಾಗಿ ನಿರ್ವಹಿಸುವಂತೆ ಸೂಚಿಸಿದ ಅವರು, ರಸ್ತೆ ಬದಿಯಲ್ಲಿ ಕಸ ಎಸೆಯುವವರ ವಿರುದ್ಧ ದಂಡಾತ್ಮಕ ಕ್ರಮ ಕೈಗೊಳ್ಳಬೇಕು ಎಂದರು. ಈ ಸಾಲಿನ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಗಳಲ್ಲಿ ಜಿಲ್ಲೆ ಉತ್ತಮ ಫಲಿತಾಂಶ ದಾಖಲಿಸಿರುವ ಹಿನ್ನೆಲೆ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಶಿಕ್ಷಣ ಇಲಾಖೆಯನ್ನು ಅಭಿನಂದಿಸಿದರು.

ಸಭೆಯಲ್ಲಿ ಶಾಸಕರಾದ ಯಶ್‌ಪಾಲ್ ಸುವರ್ಣ, ಗುರುರಾಜ್ ಶೆಟ್ಟಿ ಗಂಟಿಹೊಳೆ, ಎ. ಕಿರಣ್ ಕುಮಾರ್ ಕೊಡ್ಗಿ, ಗುರ್ಮೆ ಸುರೇಶ್ ಶೆಟ್ಟಿ, ವಿಧಾನ ಪರಿಷತ್ ಸದಸ್ಯ ಡಾ. ಮಂಜುನಾಥ ಭಂಡಾರಿ, ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles