Sunday, April 12, 2026

spot_img

ಉಡುಪಿಯಲ್ಲಿ ರಾಜ್ಯದಲ್ಲೇ ಅತಿ ಹೆಚ್ಚು ಪಂಚ ಗ್ಯಾರಂಟಿ ಫಲಾನುಭವಿಗಳು: ಪ್ರಸಾದ್ ರಾಜ್ ಕಾಂಚನ್

ಉಡುಪಿ: ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರವು ನುಡಿದಂತೆ ನಡೆದು ಬಡಜನರ ಪರ ಕೆಲಸ ಮಾಡುತ್ತಿದೆ. ಉಡುಪಿ ಜಿಲ್ಲೆಯಲ್ಲಿ ರಾಜ್ಯದಲ್ಲೇ ಅತಿ ಹೆಚ್ಚು ಮಂದಿ ಪಂಚ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳಾಗಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಪ್ರಸಾದ್ ರಾಜ್ ಕಾಂಚನ್ ತಿಳಿಸಿದ್ದಾರೆ. ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ ಬೈಕಾಡಿಯಲ್ಲಿ ನಡೆದ ಪಂಚ ಗ್ಯಾರಂಟಿ ಸಮಾವೇಶದಲ್ಲಿ ಅವರು ಮಾತನಾಡಿದರು. ಉಡುಪಿ ಜಿಲ್ಲೆಯಲ್ಲಿ ಕಾಂಗ್ರೆಸ್ ಶಾಸಕರು ಇಲ್ಲದಿದ್ದರೂ ಹೆಚ್ಚಿನ ಜನರಿಗೆ ಗ್ಯಾರಂಟಿ ಯೋಜನೆಗಳನ್ನು ತಲುಪಿಸಲಾಗಿದೆ ಎಂದು ಹೇಳಿದರು. ಆರಂಭದಲ್ಲಿ ಯೋಜನೆಗಳನ್ನು ಟೀಕಿಸಿದ್ದ ಬಿಜೆಪಿ ಇದೀಗ ಬೇರೆ ರಾಜ್ಯಗಳಲ್ಲಿ ಅದನ್ನೇ ನಕಲಿಸಿ ಘೋಷಣೆ ಮಾಡುತ್ತಿದೆ ಎಂದು ಆರೋಪಿಸಿದರು.

ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ ಮಾತನಾಡಿ, ಬಿಜೆಪಿ ಚುನಾವಣೆಯ ಸಮಯದಲ್ಲಿ ಭಾವನಾತ್ಮಕ ವಿಷಯಗಳನ್ನು ಮುಂದಿರಿಸುತ್ತಿದೆ. ಆದರೆ ಕಾಂಗ್ರೆಸ್ ಸರ್ಕಾರ ಬಡಜನರಿಗೆ ನೇರವಾಗಿ ಉಪಯೋಗವಾಗುವ ಯೋಜನೆಗಳನ್ನು ಜಾರಿಗೆ ತಂದಿದೆ. “ನಾವು ನುಡಿದಂತೆ ನಡೆದುಕೊಂಡಿದ್ದೇವೆ ಎಂದು ಹೇಳಿದರು.

ವಿಧಾನಪರಿಷತ್ ಸದಸ್ಯ ಐವನ್ ಡಿಸೋಜಾ ಮಾತನಾಡಿ, ರಾಜ್ಯ ಸರ್ಕಾರ 5 ಕೆಜಿ ಅಕ್ಕಿ ಜೊತೆಗೆ ಅದರ ಹಣವನ್ನು ನೇರವಾಗಿ ಜನರ ಖಾತೆಗೆ ಜಮಾ ಮಾಡುತ್ತಿದೆ. 200 ಯೂನಿಟ್‌ಗಳವರೆಗೆ ಉಚಿತ ವಿದ್ಯುತ್, ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಸೇರಿದಂತೆ ಹಲವು ಯೋಜನೆಗಳು ಬಡ ಹಾಗೂ ಮಧ್ಯಮ ವರ್ಗದವರಿಗೆ ನೆರವಾಗಿವೆ ಎಂದು ಹೇಳಿದರು. ಬಿಜೆಪಿ ಈ ಯೋಜನೆಗಳನ್ನು ಟೀಕಿಸುತ್ತಿದ್ದರೂ ಈಗ ಅದನ್ನೇ ಅನುಸರಿಸುತ್ತಿದೆ ಎಂದು ಅವರು ಟೀಕಿಸಿದರು.

ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಪೂಜಾರಿ ಹೇರೂರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಘವೇಂದ್ರ ಶೆಟ್ಟಿ ಕರ್ಜೆ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಸಮಾವೇಶದಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಬಗ್ಗೆ ಮಾಹಿತಿ ಹಂಚಿಕೊಳ್ಳಲಾಯಿತು.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles