ಉಡುಪಿ : ಹಲ್ಲೆಗೊಳಗಾಗಿ ಉಡುಪಿ ಅಜ್ಜರಕಾಡು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವಕನೊಬ್ಬ ಆಸ್ಪತ್ರೆಯ ಆವರಣದಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಶುಕ್ರವಾರ ನಡೆದಿದೆ. ಪೆರ್ಡೂರಿನ ಪ್ರದೀಪ್ ಪೂಜಾರಿ (28) ಆತ್ಮಹತ್ಯೆ ಮಾಡಿಕೊಂಡ ಯುವಕ. ಪಾಡಿಗಾರಿನ ಯುವತಿಯೊಬ್ಬಳ ಮೇಲಿನ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿ ಪ್ರದೀಪ್ ವಿರುದ್ಧ ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ಬಂಧನಕ್ಕೊಳಗಾಗಿ ಜೈಲು ಸೇರಿದ್ದ ಅವರು ಬಳಿಕ ಬಿಡುಗಡೆಯಾಗಿದ್ದರು ಎನ್ನಲಾಗಿದೆ.

ಜೈಲಿನಿಂದ ಬಿಡುಗಡೆಯಾದ ಬಳಿಕ ಯುವತಿಯ ಮನೆಯವರು ಹಾಗೂ ಸಂಬಂಧಿಕರು ತನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಪ್ರದೀಪ್ ಹಿರಿಯಡಕ ಪೊಲೀಸ್ ಠಾಣೆಗೆ ದೂರು ನೀಡಲು ತೆರಳಿದ್ದರು. ಆದರೆ, ಅವರ ದೂರಿನ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿರಲಿಲ್ಲ ಎಂಬ ಆರೋಪ ಕೇಳಿಬಂದಿದೆ.

ಹಲ್ಲೆಯಿಂದ ಗಾಯಗೊಂಡಿದ್ದ ಪ್ರದೀಪ್ ಚಿಕಿತ್ಸೆಗೆಂದು ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದರು. ಈ ನಡುವೆ ಆಸ್ಪತ್ರೆಯ ಶೌಚಾಲಯದ ಸಮೀಪವಿರುವ ಕೊಠಡಿಯೊಂದರಲ್ಲಿ ಕಿಟಕಿಯ ಸರಳಿಗೆ ಹಗ್ಗದಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆ ಬೆಳಕಿಗೆ ಬರುತ್ತಿದ್ದಂತೆ ಆಸ್ಪತ್ರೆ ಆವರಣದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು.

ವಿಷಯ ತಿಳಿದು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಉಡುಪಿ ನಗರ ಪೊಲೀಸ್ ಠಾಣೆಯ ಎಸ್ಐ ಭರತೇಶ್, ಸಬ್ ಇನ್ಸ್ಪೆಕ್ಟರ್ ಮಹೇಶ್ ಪ್ರಸಾದ್ ಹಾಗೂ ಸಿಬ್ಬಂದಿ ಅಗತ್ಯ ಕಾನೂನು ಪ್ರಕ್ರಿಯೆಗಳನ್ನು ಕೈಗೊಂಡರು. ಮೃತದೇಹವನ್ನು ತಡರಾತ್ರಿ 1 ಗಂಟೆಯ ಬಳಿಕ ಮಣಿಪಾಲದ ಕೆಎಂಸಿ ಆಸ್ಪತ್ರೆಯ ಮರಣೋತ್ತರ ಪರೀಕ್ಷಾ ಕೇಂದ್ರಕ್ಕೆ ಸಾಗಿಸಲಾಯಿತು. ಮೃತದೇಹ ಸಾಗಿಸುವ ಕಾರ್ಯದಲ್ಲಿ ಸಮಾಜಸೇವಕ ನಿತ್ಯಾನಂದ ಒಳಕಾಡು ಸಹಕರಿಸಿದರು.


