ಉಡುಪಿ: ಆಯುಷ್ಮಾನ್ ಭಾರತ್ ಯೋಜನೆಯಡಿ ಉಚಿತ ವೈದ್ಯಕೀಯ ಸೇವೆ ಪಡೆಯುವ ವೇಳೆ ಫಲಾನುಭವಿಗಳು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಜಗತ್ ಪ್ರಕಾಶ್ ನಡ್ಡಾರವರು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.

ನಡ್ಡಾರವರು ತಮ್ಮ ಪತ್ರದಲ್ಲಿ, “ಆಯುಷ್ಮಾನ್ ರಾಷ್ಟ್ರೀಯ ಆರೋಗ್ಯ ಸೇವೆ ಯೋಜನೆ ಅಡಿ ಕರ್ನಾಟಕದ ಕೆಲ ಭಾಗಗಳಲ್ಲಿ, ವಿಶೇಷವಾಗಿ ಉಡುಪಿ ಜಿಲ್ಲೆಯಲ್ಲಿಯೂ ಫಲಾನುಭವಿಗಳಿಗೆ ಸೇವೆ ನೀಡುವಲ್ಲಿ ಅಡಚಣೆಗಳು ಉಂಟಾಗುತ್ತಿರುವ ಬಗ್ಗೆ ಹಲವು ದೂರುಗಳು ಬಂದಿವೆ. ನೊಂದಾಯಿತ ಆಸ್ಪತ್ರೆಗಳು ಉಚಿತ ಚಿಕಿತ್ಸೆಯನ್ನು ನಿರಾಕರಿಸದಂತೆ ಕ್ರಮ ಕೈಗೊಳ್ಳಬೇಕು,” ಎಂದು ತಿಳಿಸಿದ್ದಾರೆ.

ಅವರು ಮುಂದುವರಿದು, ಯೋಜನೆಯ ಪ್ರಯೋಜನ ಯಾವುದೇ ಗೊಂದಲವಿಲ್ಲದೆ ರೋಗಿಗಳಿಗೆ ತಲುಪುವಂತೆ ಮುಖ್ಯಮಂತ್ರಿ ವೈಯಕ್ತಿಕವಾಗಿ ವಿಚಾರಿಸಿ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ. ಆಯುಷ್ಮಾನ್ ಭಾರತ್ ಯೋಜನೆಯ ಸುವ್ಯವಸ್ಥೆಗಾಗಿ ಉಡುಪಿ–ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿಯವರೂ ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿದ್ದರು.



