ಉಡುಪಿ : ರಾಜ್ಯ ಸರ್ಕಾರ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಸೌಲಭ್ಯ ಘೋಷಿಸಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್ ಮುಖಂಡರು, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳ ವಿದ್ಯಾರ್ಥಿಗಳಿಗೆ ಖಾಸಗಿ ಬಸ್ಗಳಲ್ಲಿಯೂ ಈ ಸೌಲಭ್ಯ ವಿಸ್ತರಿಸುವಂತೆ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಕಾಂಗ್ರೆಸ್ನ ಹಿರಿಯ ಮುಖಂಡ ಜಯಶೆಟ್ಟಿ ಬನ್ನಂಜೆ ಹಾಗೂ ಪಕ್ಷದ ಸಾಮಾಜಿಕ ಜಾಲತಾಣ ಸಂಯೋಜಕ ಗಣೇಶ್ ರಾಜ್ ಸರಳಬೆಟ್ಟು, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾದ ಉಚಿತ ಬಸ್ ಪಾಸ್ ವಿದ್ಯಾರ್ಥಿಗಳಿಗೆ ಅನುಕೂಲಕರವಾದರೂ, ಕರಾವಳಿ ಭಾಗದ ವಿದ್ಯಾರ್ಥಿಗಳಿಗೆ ಇದರ ಸಂಪೂರ್ಣ ಪ್ರಯೋಜನ ದೊರೆಯುತ್ತಿಲ್ಲ ಎಂದು ತಿಳಿಸಿದ್ದಾರೆ.

ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಖಾಸಗಿ ಬಸ್ಗಳೇ ಸಾರ್ವಜನಿಕ ಸಾರಿಗೆಯ ಪ್ರಮುಖ ಆಧಾರವಾಗಿವೆ. ಸರ್ಕಾರಿ ಬಸ್ಗಳು ಕೆಲವೇ ಮಾರ್ಗಗಳಲ್ಲಿ ಮತ್ತು ನಿರ್ದಿಷ್ಟ ಸಮಯಗಳಲ್ಲಿ ಮಾತ್ರ ಸಂಚರಿಸುತ್ತಿರುವುದರಿಂದ, ಅನೇಕ ವಿದ್ಯಾರ್ಥಿಗಳು ಶಾಲೆ ಮತ್ತು ಕಾಲೇಜುಗಳಿಗೆ ಖಾಸಗಿ ಬಸ್ಗಳನ್ನೇ ಅವಲಂಬಿಸಬೇಕಾದ ಪರಿಸ್ಥಿತಿ ಇದೆ ಎಂದು ಅವರು ಹೇಳಿದ್ದಾರೆ. ಶೈಕ್ಷಣಿಕ ಸಾಧನೆಯಲ್ಲಿ ರಾಜ್ಯದಲ್ಲೇ ಮುಂಚೂಣಿಯಲ್ಲಿರುವ ಈ ಎರಡು ಜಿಲ್ಲೆಗಳ ವಿದ್ಯಾರ್ಥಿಗಳು ಪ್ರತಿವರ್ಷ ಉತ್ತಮ ಫಲಿತಾಂಶಗಳೊಂದಿಗೆ ರಾಜ್ಯ ಮಟ್ಟದಲ್ಲಿ ಹೆಸರು ಮಾಡುತ್ತಿದ್ದಾರೆ. ಆದರೆ ಉಚಿತ ಬಸ್ ಪಾಸ್ ಯೋಜನೆಯ ಲಾಭ ಪಡೆಯುವಲ್ಲಿ ಮಾತ್ರ ಅವರು ಹಿನ್ನಡೆ ಅನುಭವಿಸುತ್ತಿದ್ದಾರೆ ಎಂಬುದು ವಿಷಾದನೀಯ ಎಂದು ಅಭಿಪ್ರಾಯಪಟ್ಟಿದ್ದಾರೆ.

ಆದ್ದರಿಂದ ರಾಜ್ಯದ ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಖಾಸಗಿ ಬಸ್ ಮಾಲೀಕರ ಸಂಘಗಳೊಂದಿಗೆ ಚರ್ಚೆ ನಡೆಸಿ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳ ವಿದ್ಯಾರ್ಥಿಗಳಿಗೂ ಖಾಸಗಿ ಬಸ್ಗಳಲ್ಲಿ ಉಚಿತ ಅಥವಾ ರಿಯಾಯಿತಿ ಪ್ರಯಾಣ ಸೌಲಭ್ಯ ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ. ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಸಾರಿಗೆ ಸೌಲಭ್ಯ ಅತ್ಯಂತ ಪ್ರಮುಖವಾಗಿದ್ದು, ಕರಾವಳಿ ಭಾಗದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಸರ್ಕಾರ ವಿಶೇಷ ಕ್ರಮ ಕೈಗೊಳ್ಳಬೇಕೆಂದು ಅವರು ಒತ್ತಾಯಿಸಿದ್ದಾರೆ.



