ಉಡುಪಿ : ಉಡುಪಿ ಪರ್ಯಾಯ ಕಾರ್ಯಕ್ರಮದ ಹಿನ್ನೆಲೆ ಜಿಲ್ಲೆಯಲ್ಲಿನ ಮೂಲಸೌಕರ್ಯಗಳನ್ನು ಬಲಪಡಿಸಲು ಸುಮಾರು 6 ಕೋಟಿ ರೂಪಾಯಿ ವೆಚ್ಚದಲ್ಲಿ ಅಗತ್ಯ ವ್ಯವಸ್ಥೆಗಳನ್ನು ಕಲ್ಪಿಸುವಂತೆ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ಮಂಗಳವಾರ ಜಿಲ್ಲೆಯ ಶಾಸಕರು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ನಡೆದ ವಿಡಿಯೋ ಸಂವಾದದಲ್ಲಿ ಮಾತನಾಡಿದ ಸಚಿವೆ, ಪರ್ಯಾಯ ಕಾರ್ಯಕ್ರಮ ಸುಗಮವಾಗಿ ನಡೆಯಲು ರಸ್ತೆ ಅಭಿವೃದ್ಧಿ ಸೇರಿದಂತೆ ನಗರದಲ್ಲಿ ಅಗತ್ಯವಿರುವ ಎಲ್ಲಾ ಸೌಕರ್ಯಗಳನ್ನು ತ್ವರಿತವಾಗಿ ಒದಗಿಸಬೇಕು ಎಂದು ಸೂಚಿಸಿದರು.

ಸಮಯಾವಕಾಶ ಕಡಿಮೆ ಇರುವುದರಿಂದ ಹಗಲು-ರಾತ್ರಿ ಸಮರೋಪಾದಿಯಲ್ಲಿ ಕಾಮಗಾರಿಗಳನ್ನು ಕೈಗೊಳ್ಳಬೇಕು. ಜಿಲ್ಲೆಯ ಎಲ್ಲ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಯಾವುದೇ ಕೊರತೆ ಇಲ್ಲದಂತೆ ವ್ಯವಸ್ಥೆ ಕಲ್ಪಿಸಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ವಿಡಿಯೋ ಸಂವಾದದಲ್ಲಿ ಶಾಸಕರಾದ ಸುನಿಲ್ ಕುಮಾರ್, ಕಿರಣಕುಮಾರ್ ಕೊಡ್ಗಿ, ಗುರುರಾಜ ಗಂಟಿಹೊಳಿ, ಗುರ್ಮೆ ಸುರೇಶ್ ಶೆಟ್ಟಿ, ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.



