ಉಡುಪಿ: ಮುಂಬರುವ ಉಪಚುನಾವಣೆಗಳಲ್ಲಿ ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಸ್ಪಷ್ಟ ಬಹುಮತದಿಂದ ಜಯಗಳಿಸಲಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ವಿಶ್ವಾಸ ವ್ಯಕ್ತಪಡಿಸಿದರು. ಕುಂದಾಪುರ ತಾಲೂಕಿನ ಕೋಟೇಶ್ವರ ಸಮೀಪದ ಯುವ ಮೆರಿಡಿಯನ್ ಹೆಲಿಪ್ಯಾಡ್ ಬಳಿ ಗುರುವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸಾಮಾನ್ಯವಾಗಿ ಉಪಚುನಾವಣೆಗಳಲ್ಲಿ ಆಡಳಿತದಲ್ಲಿರುವ ಪಕ್ಷದತ್ತ ಮತದಾರರ ಒಲವು ಹೆಚ್ಚಿರುತ್ತದೆ. ಅದೇ ರೀತಿಯಲ್ಲಿ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳು ಜನಸಾಮಾನ್ಯರ ಮನೆಮನೆಗೂ ತಲುಪಿದ್ದು, ಅವುಗಳಿಂದ ಜೀವನಮಟ್ಟದಲ್ಲಿ ಸ್ಪಷ್ಟ ಸುಧಾರಣೆ ಕಂಡುಬಂದಿದೆ ಎಂದು ಹೇಳಿದರು.

ರಾಜ್ಯದ ಅಭಿವೃದ್ಧಿಯ ಜೊತೆಗೆ ಜನರ ಆದಾಯದಲ್ಲಿಯೂ ಏರಿಕೆ ಕಂಡುಬಂದಿದ್ದು, ವಿಶೇಷವಾಗಿ ಮಹಿಳಾ ಮತದಾರರಲ್ಲಿ ಸಂತೋಷದ ವಾತಾವರಣ ನಿರ್ಮಾಣವಾಗಿದೆ. ಈ ಎಲ್ಲಾ ಅಂಶಗಳು ಉಪಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಪೂರಕವಾಗಲಿವೆ ಎಂಬ ವಿಶ್ವಾಸವಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಯೊಬ್ಬರಿಗೂ ಟಿಕೆಟ್ ಕೇಳುವ ಹಕ್ಕಿದೆ. ಆದರೆ ಪಕ್ಷದ ದೃಷ್ಟಿಯಲ್ಲಿ ಗೆಲುವೇ ಪ್ರಮುಖ ಮಾನದಂಡವಾಗಿದೆ. ದಾವಣಗೆರೆ ದಕ್ಷಿಣ ಕ್ಷೇತ್ರವು ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾಗಿದ್ದು, ಅವರ ಕುಟುಂಬ ಸದಸ್ಯರಿಗೆ ಟಿಕೆಟ್ ನೀಡಿರುವುದು ಪಕ್ಷದ ಹೈಕಮಾಂಡ್‌ನ ನಿರ್ಧಾರವಾಗಿದ್ದು, ಅದಕ್ಕೆ ನಾವು ಬದ್ಧರಾಗಿದ್ದೇವೆ ಎಂದು ಸ್ಪಷ್ಟಪಡಿಸಿದರು.

ವರಾಹಿ ಯೋಜನೆಗೆ ಸಂಬಂಧಿಸಿದಂತೆ ಎರಡು ಭಾಗಗಳ ರೈತರು ಈಗಾಗಲೇ ತಮ್ಮ ಮನವಿಗಳನ್ನು ಸಲ್ಲಿಸಿದ್ದು, ಯಾರಿಗೂ ಅನ್ಯಾಯವಾಗದಂತೆ ಕ್ರಮ ಕೈಗೊಳ್ಳುವುದು ಸರ್ಕಾರದ ಮುಖ್ಯ ಉದ್ದೇಶವಾಗಿದೆ ಎಂದು ಸಚಿವೆ ತಿಳಿಸಿದರು. ಈ ಸಂಬಂಧ ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರೈತಾಪಿ ಜನರ ಹಿತವನ್ನು ಗಮನದಲ್ಲಿಟ್ಟುಕೊಂಡು ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಲು ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು.

ಬೈಂದೂರು ನೂತನ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣಕ್ಕೆ ಕೆಲವು ಸರ್ಕಾರಿ ಬಸ್‌ಗಳು ಪ್ರವೇಶಿಸದಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವೆ, ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ಸಭೆ ಕರೆದಿದ್ದು, ಸಮಸ್ಯೆಯನ್ನು ಶೀಘ್ರದಲ್ಲಿ ಬಗೆಹರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.



