Monday, September 28, 2026

spot_img

ಎಸ್‌ಐಆರ್ ವಿವಾದ: ಸಿಇಸಿ ರಾಜೀನಾಮೆ, ಬಂಧನಕ್ಕೆ ಆಗ್ರಹಿಸಿ ಉಡುಪಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ

ಉಡುಪಿ : ವಿವಿಧ ರಾಜ್ಯಗಳಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)ಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಕಾಂಗ್ರೆಸ್ ಎತ್ತಿರುವ ಆಕ್ಷೇಪಗಳ ಹಿನ್ನೆಲೆಯಲ್ಲಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆ ಹಾಗೂ ಬಂಧನಕ್ಕೆ ಆಗ್ರಹಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಸೋಮವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಯಿತು.

ಪ್ರತಿಭಟನೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಜ್ಞಾನೇಶ್ ಕುಮಾರ್, ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಪ್ರತಿಕೃತಿಗಳನ್ನು ದಹಿಸಿ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲು ಮುಂದಾದ ಪ್ರತಿಭಟನಕಾರರನ್ನು ಪೊಲೀಸರು ಗೇಟ್ ಹಾಕಿ ತಡೆದರು. ಕೆಲ ಕಾರ್ಯಕರ್ತರು ಗೇಟ್ ಹತ್ತಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಬಳಿಕ ಗೇಟ್ ಎದುರು ಧರಣಿ ನಡೆಸಿ ಚುನಾವಣಾ ಆಯೋಗದ ವಿರುದ್ಧ ಘೋಷಣೆಗಳನ್ನು ಮೊಳಗಿಸಿದರು. ಎಸ್‌ಐಆರ್ ಪ್ರಕ್ರಿಯೆ ಕುರಿತು ಕಾಂಗ್ರೆಸ್ ದೇಶಾದ್ಯಂತ ಪ್ರತಿಭಟನೆಗಳನ್ನು ನಡೆಸುತ್ತಿದ್ದು, ಜ್ಞಾನೇಶ್ ಕುಮಾರ್ ಅವರ ರಾಜೀನಾಮೆ ಹಾಗೂ ಬಂಧನಕ್ಕೆ ಪಕ್ಷದ ನಾಯಕರು ಆಗ್ರಹಿಸುತ್ತಿದ್ದಾರೆ.

ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲ್, ಚುನಾವಣಾ ಆಯೋಗದ ಎಸ್‌ಐಆರ್ ಪ್ರಕ್ರಿಯೆ ಕುರಿತು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ಕೇಂದ್ರ ಸರ್ಕಾರ ಮತ್ತು ಚುನಾವಣಾ ಆಯೋಗ ಕಾರ್ಯನಿರ್ವಹಿಸುತ್ತಿವೆ ಎಂದು ಆರೋಪಿಸಿದರು.

ಜ್ಞಾನೇಶ್ ಕುಮಾರ್ ಅವರು ಕೂಡಲೇ ರಾಜೀನಾಮೆ ನೀಡಬೇಕು ಹಾಗೂ ಅವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ ಬಂಧಿಸಬೇಕು ಎಂದು ಒತ್ತಾಯಿಸಿದ ಅವರು, ಈ ಹೋರಾಟವನ್ನು ಮುಂದಿನ ದಿನಗಳಲ್ಲಿ ತಾಲೂಕು ಹಾಗೂ ಗ್ರಾಮೀಣ ಮಟ್ಟಕ್ಕೂ ವಿಸ್ತರಿಸಲಾಗುವುದು ಎಂದು ಹೇಳಿದರು. ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಎ. ಗಫೂರ್ ಮಾತನಾಡಿ, ಎಸ್‌ಐಆರ್ ಮೂಲಕ ಲಕ್ಷಾಂತರ ಜನರನ್ನು ಮತದಾನದ ಹಕ್ಕಿನಿಂದ ವಂಚಿಸುವ ಪ್ರಯತ್ನ ನಡೆದಿದೆ ಎಂದು ಆರೋಪಿಸಿದರು. ಬಡವರು, ಕಾರ್ಮಿಕರು, ಆದಿವಾಸಿಗಳು, ಅಲೆಮಾರಿಗಳು, ದಲಿತರು ಹಾಗೂ ಅಲ್ಪಸಂಖ್ಯಾತರ ಹೆಸರುಗಳನ್ನು ಉದ್ದೇಶಪೂರ್ವಕವಾಗಿ ಮತದಾರರ ಪಟ್ಟಿಯಿಂದ ತೆಗೆದುಹಾಕಲಾಗಿದೆ ಎಂದು ಅವರು ದೂರಿದರು.

ಎಸ್‌ಐಆರ್‌ಗೆ ಸಂಬಂಧಿಸಿದಂತೆ ಮತದಾರರ ಪಟ್ಟಿಯಲ್ಲಿನ ಹೆಸರುಗಳ ಸೇರ್ಪಡೆ, ತೆಗೆದುಹಾಕುವಿಕೆ ಸೇರಿದಂತೆ ಹಲವು ವಿಷಯಗಳ ಕುರಿತು ಕಾಂಗ್ರೆಸ್ ಸೇರಿದಂತೆ ಪ್ರತಿಪಕ್ಷಗಳು ಚುನಾವಣಾ ಆಯೋಗದ ಕ್ರಮಗಳನ್ನು ಪ್ರಶ್ನಿಸುತ್ತಿವೆ. ಚುನಾವಣಾ ಆಯೋಗವು ಎಸ್‌ಐಆರ್-2026 ಸಂಬಂಧಿತ ಮತದಾರರ ಸೇವೆಗಳು ಮತ್ತು ಪಟ್ಟಿಗಳನ್ನು ತನ್ನ ಅಧಿಕೃತ ಪೋರ್ಟಲ್‌ನಲ್ಲಿ ಪ್ರಕಟಿಸಿದೆ. ಸಭೆಯಲ್ಲಿ ಮಾಜಿ ಶಾಸಕ ಗೋಪಾಲ ಪೂಜಾರಿ, ಕೆಪಿಸಿಸಿ ವಕ್ತಾರೆ ವೆರೋನಿಕಾ ಕರ್ನೆಲಿಯೋ, ಎನ್‌ಎಸ್‌ಯುಐ ಜಿಲ್ಲಾಧ್ಯಕ್ಷ ಸೌರಭ್ ಬಲ್ಲಾಳ್ ಮಾತನಾಡಿದರು.

ಪ್ರತಿಭಟನೆಯಲ್ಲಿ ಕಾಂಗ್ರೆಸ್ ಮುಖಂಡರಾದ ಪ್ರಸಾದ್‌ರಾಜ್ ಕಾಂಚನ್, ದಿನೇಶ್ ಹೆಗ್ಡೆ ಕೊಳ್ಕೆಬೈಲು, ಅಶೋಕ್ ಕುಮಾರ್ ಕೊಡವೂರು, ಪ್ರಶಾಂತ್ ಜತ್ತನ್ನ, ಪ್ರಖ್ಯಾತ್ ಶೆಟ್ಟಿ, ಹರಿಪ್ರಸಾದ್ ರೈ, ಜ್ಯೋತಿ ಹೆಬ್ಬಾರ್, ಹಬೀಬ್ ಅಲಿ, ಶಬ್ಬೀರ್ ಉಡುಪಿ, ಶೇಕ್ ವಾಹೀದ್, ಇಸ್ಮಾಯಿಲ್ ಆತ್ರಾಡಿ, ಎಂ.ಪಿ. ಮೊದಿನಬ್ಬ, ಅಬ್ದುಲ್ ಅಝೀಜ್ ಹೆಜಮಾಡಿ, ಹರೀಶ್ ಕಿಣಿ, ಗಣೇಶ್ ನೆರ್ಗಿ, ರಿಯಾಝ್ ಕೋಡಿ, ರಾಜು ಪೂಜಾರಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles