ಉಡುಪಿ : ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರ ಜಾರಿಗೊಳಿಸಿರುವ ಯೋಜನೆಗಳು ಅರ್ಹರಿಗೆ ತಲುಪಬೇಕು. ಯಾವುದೇ ಕಾರ್ಮಿಕರು ತಮ್ಮ ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ಅಧಿಕಾರಿಗಳು ಕ್ರಮ ವಹಿಸಬೇಕು ಎಂದು ರಾಜ್ಯ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ.ಎಂ. ಶಾಹಿದ್ ತೆಕ್ಕಿಲ್ ಸೂಚಿಸಿದರು. ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿರುವ ಕಾರ್ಮಿಕ ಇಲಾಖೆಯ ಕಚೇರಿಯಲ್ಲಿ ಕಾರ್ಮಿಕ ಅಧಿಕಾರಿಗಳು ಹಾಗೂ ಜಿಲ್ಲೆಯ ಕಾರ್ಮಿಕ ಸಂಘಟನೆಗಳ ಮುಖಂಡರೊಂದಿಗೆ ನಡೆದ ಸಭೆಯಲ್ಲಿ ಅವರು ಮಾತನಾಡಿದರು.

ರಾಜ್ಯದಲ್ಲಿ ವಿವಿಧ ವಲಯಗಳಲ್ಲಿ ಸುಮಾರು 3.5 ಕೋಟಿ ಕಾರ್ಮಿಕರಿದ್ದು, ಅವರ ಹಿತಾಸಕ್ತಿ ರಕ್ಷಣೆಗೆ ಅಧಿಕಾರಿಗಳು ಯಾವುದೇ ಮುಲಾಜಿಲ್ಲದೆ ಕಾರ್ಯನಿರ್ವಹಿಸಬೇಕು. ಕಾರ್ಮಿಕರು ರಾಜ್ಯದ ಯಾವುದೇ ಭಾಗದವರಾಗಿದ್ದರೂ, ಅವರು ನಿರ್ವಹಿಸಿದ ಕೆಲಸಕ್ಕೆ ನಿಗದಿತ ಕನಿಷ್ಠ ವೇತನ ದೊರೆಯುತ್ತಿದೆಯೇ ಎಂಬುದನ್ನು ಪರಿಶೀಲಿಸಬೇಕು. ಈ ಕಾರ್ಯವನ್ನು ಮಾನವೀಯ ದೃಷ್ಟಿಕೋನದಿಂದ ಕೈಗೊಳ್ಳಬೇಕು ಎಂದರು.

ಜೀವನಶೈಲಿಯ ಬದಲಾವಣೆ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ಪರಿಗಣಿಸಿ, ಸರ್ಕಾರ ಒಂಬತ್ತು ವರ್ಷಗಳ ಬಳಿಕ ಕನಿಷ್ಠ ವೇತನ ಪರಿಷ್ಕರಣೆಗೆ ಮುಂದಾಗಿದೆ. ವಿವಿಧ ಹಂತಗಳಲ್ಲಿ ವೇತನ ನಿಗದಿಪಡಿಸುವ ಪ್ರಕ್ರಿಯೆ ನಡೆಯುತ್ತಿದ್ದು, ಕೆಲವರು ನ್ಯಾಯಾಲಯದ ಮೊರೆ ಹೋಗಿ ತಡೆಯಾಜ್ಞೆ ತಂದಿದ್ದಾರೆ. ಈ ಕುರಿತು ಸರ್ಕಾರದ ಮಟ್ಟದಲ್ಲಿ ಚರ್ಚೆ ನಡೆಯುತ್ತಿದ್ದು, ಶೀಘ್ರ ಸೂಕ್ತ ನಿರ್ಧಾರ ಹೊರಬೀಳುವ ನಿರೀಕ್ಷೆಯಿದೆ ಎಂದು ತಿಳಿಸಿದರು.ಕಾರ್ಮಿಕ ಸಂಘಟನೆಗಳು ಜಿಲ್ಲೆಯಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸಬೇಕು. ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿ ನೋಂದಣಿ ಮಾಡಿಕೊಂಡು ಸರ್ಕಾರದ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದರು.

ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಎ. ಗಫೂರ್ ಮಾತನಾಡಿ, ಅಸಂಘಟಿತ ಕಾರ್ಮಿಕರ ರಕ್ಷಣೆ ಎಲ್ಲರ ಜವಾಬ್ದಾರಿಯಾಗಿದೆ. ದುಡಿಯುವ ವರ್ಗದ ಹಿತಾಸಕ್ತಿ ಕಾಪಾಡುವುದರ ಜತೆಗೆ ಅವರು ಗೌರವಯುತ ಜೀವನ ನಡೆಸಲು ಅಗತ್ಯ ಅವಕಾಶಗಳನ್ನು ಕಲ್ಪಿಸಬೇಕು. ಹೊರಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುವ ನೌಕರರಿಗೆ ಕನಿಷ್ಠ ವೇತನದೊಂದಿಗೆ ಸಾಮಾಜಿಕ ಭದ್ರತಾ ಸೌಲಭ್ಯಗಳೂ ದೊರೆಯುವಂತಾಗಬೇಕು ಎಂದರು.ಕಾರ್ಮಿಕರ ಕಲ್ಯಾಣದಿಂದ ಸಮಾಜದ ಕಲ್ಯಾಣ ಸಾಧ್ಯ. ಕಟ್ಟಡ ಕಾರ್ಮಿಕರು ವರ್ಷದಲ್ಲಿ 90 ದಿನ ಕೆಲಸ ನಿರ್ವಹಿಸಿ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನೋಂದಣಿ ಮಾಡಿಕೊಂಡ ಬಳಿಕ, ಇತರ ಸೌಲಭ್ಯಗಳಿಗಾಗಿ ಆ ನೋಂದಣಿಯನ್ನು ರದ್ದುಗೊಳಿಸಬಾರದು ಎಂದು ಅವರು ಹೇಳಿದರು. ಸಭೆಯಲ್ಲಿ ಜಿಲ್ಲಾ ಕಾರ್ಮಿಕ ಅಧಿಕಾರಿ ಕಮಲ್ ಷಾ ಅಲ್ತಾಫ್ ಅಹಮದ್, ಕಾರ್ಮಿಕ ನಿರೀಕ್ಷಕರಾದ ಸಂಜಯ್ ಮತ್ತು ಮಲ್ಲಿಕ್ ಪ್ರಸಾದ್, ಉಡುಪಿ ಸಿಐಟಿಯು ಜಿಲ್ಲಾ ಅಧ್ಯಕ್ಷ ಶಶಿಧರ್ ಗೊಲ್ಲ, ಕಾರ್ಯದರ್ಶಿ ಚಂದ್ರಶೇಖರ್ ವಿ., ಜಿಲ್ಲಾ ಗ್ಯಾರೇಜ್ ಮಾಲೀಕರ ಸಂಘದ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.


