ಉಡುಪಿ : ಉಡುಪಿ ಜಿಲ್ಲೆಯಲ್ಲಿ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಪ್ರಧಾನಮಂತ್ರಿ ಕುಸುಮ್ ಸೋಲಾರ್ ಯೋಜನೆ ಅನುಷ್ಠಾನಕ್ಕೆ ಅಗತ್ಯ ಸರ್ಕಾರಿ ಜಾಗವನ್ನು ಜಿಲ್ಲಾಡಳಿತ ಮಂಜೂರು ಮಾಡಿದ್ದರೂ, ಅರಣ್ಯ ಇಲಾಖೆಯ ಅನುಮತಿ ವಿಳಂಬದಿಂದ ಕಾಮಗಾರಿ ಆರಂಭವಾಗದೆ ಸ್ಥಗಿತಗೊಂಡಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರನ್ನು ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಕುಂದಾಪುರ ಶಾಸಕ ಎ. ಕಿರಣ್ ಕುಮಾರ್ ಕೊಡ್ಗಿ ಭೇಟಿ ಮಾಡಿ ತಕ್ಷಣ ಮಧ್ಯಪ್ರವೇಶಿಸುವಂತೆ ಮನವಿ ಸಲ್ಲಿಸಿದರು.

ಉಡುಪಿ ಜಿಲ್ಲೆಯ ವಡ್ಡರ್ಸೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾವಡಿ, ಬೈಂದೂರಿನ ಕಿರಿಮಂಜೇಶ್ವರ, ಕಾಪು ತಾಲೂಕಿನ ಬೆಳ್ಳೆ, ಉಡುಪಿಯ ಅಂಜಾರು ಹಾಗೂ ಬಡಗುಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕುಸುಮ್ ಯೋಜನೆಯಡಿ ಸೋಲಾರ್ ಪಾರ್ಕ್ ಸ್ಥಾಪನೆಗೆ ಸ್ಥಳಗಳನ್ನು ಗುರುತಿಸಿ ಜಿಲ್ಲಾಧಿಕಾರಿಗಳು ಮಂಜೂರು ಮಾಡಿದ್ದರು. ಆದರೆ ಮಂಜೂರಾದ ಜಾಗಗಳಲ್ಲಿ ಅಕೇಶಿಯಾ ಮರಗಳಿರುವ ಕಾರಣ ಅರಣ್ಯ ಇಲಾಖೆ ಅನುಮತಿ ನೀಡದೆ ಇರುವುದರಿಂದ ಯೋಜನೆ ಅನುಷ್ಠಾನ ವಿಳಂಬವಾಗುತ್ತಿದೆ ಎಂದು ಮನವಿಯಲ್ಲಿ ವಿವರಿಸಲಾಗಿದೆ. ಈ ವಿಳಂಬದಿಂದ ಕೇಂದ್ರ ಸರ್ಕಾರ ಈಗಾಗಲೇ ಮಂಜೂರು ಮಾಡಿರುವ ರೂ 20 ಕೋಟಿ ಅನುದಾನ ವಾಪಸ್ ಹೋಗುವ ಸಾಧ್ಯತೆ ಇದ್ದು, ಯೋಜನೆಯ ಭವಿಷ್ಯದ ಮೇಲೂ ಅನಿಶ್ಚಿತತೆ ಉಂಟಾಗಿದೆ ಎಂದು ಸಂಸದರು ಹಾಗೂ ಶಾಸಕರು ಮುಖ್ಯ ಕಾರ್ಯದರ್ಶಿಯ ಗಮನಕ್ಕೆ ತಂದರು.

ಮನವಿಗೆ ಸ್ಪಂದಿಸಿದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಅಗತ್ಯ ನಿರ್ದೇಶನ ನೀಡಿ, ಮಂಜೂರಾದ ಜಾಗದಲ್ಲಿರುವ ಅಕೇಶಿಯಾ ಮರಗಳ ತೆರವು ಪ್ರಕ್ರಿಯೆಯನ್ನು ಶೀಘ್ರ ಪೂರ್ಣಗೊಳಿಸಿ ಸೋಲಾರ್ ಪಾರ್ಕ್ ನಿರ್ಮಾಣಕ್ಕೆ ಅವಕಾಶ ಕಲ್ಪಿಸುವಂತೆ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ಪ್ರಧಾನಮಂತ್ರಿ ಕುಸುಮ್ ಯೋಜನೆ ರೈತರಿಗೆ ಹಗಲಿನ ವೇಳೆಯಲ್ಲೇ ಗುಣಮಟ್ಟದ ವಿದ್ಯುತ್ ಪೂರೈಕೆ ಮಾಡುವುದರ ಜೊತೆಗೆ, ಉತ್ಪಾದನೆಯಾಗುವ ಹೆಚ್ಚುವರಿ ಸೌರ ವಿದ್ಯುತ್ ಅನ್ನು ಮಾರಾಟ ಮಾಡುವ ಮೂಲಕ ಗ್ರಾಮ ಪಂಚಾಯತ್‌ಗಳಿಗೆ ಹೆಚ್ಚುವರಿ ಆದಾಯದ ಮೂಲವನ್ನೂ ಒದಗಿಸುವ ಮಹತ್ವದ ಯೋಜನೆಯಾಗಿದೆ. ಹೀಗಾಗಿ ಯೋಜನೆ ವಿಳಂಬವಾಗದಂತೆ ತ್ವರಿತವಾಗಿ ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸಂಸದರು ಹಾಗೂ ಶಾಸಕರು ಸರ್ಕಾರವನ್ನು ಒತ್ತಾಯಿಸಿದ್ದಾರೆ.


