ಉಡುಪಿ : ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೃತರನ್ನು ಕೋಟೇಶ್ವರ ಸಮೀಪದ ಹೊದ್ರಾಳಿ ಕೊಳನಕಟ್ಟಿ ನಿವಾಸಿ ಮಹಾಬಲ ಆಚಾರ್ಯ ಅವರ ಪುತ್ರ ಪದ್ಮನಾಭ ಆಚಾರ್ಯ (37) ಎಂದು ಗುರುತಿಸಲಾಗಿದೆ. ಕುಂದಾಪುರದ ಹೆಂಚಿನ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ ಅವರು ಕಳೆದ ನಾಲ್ಕು ತಿಂಗಳಿಂದ ಕೆಲಸಕ್ಕೆ ತೆರಳುತ್ತಿರಲಿಲ್ಲ ಎನ್ನಲಾಗಿದೆ.

ಮಂಗಳವಾರ ಬೆಳಗ್ಗೆ ಮನೆಯಿಂದ ತೆರಳಿದ್ದ ಪದ್ಮನಾಭ ಅವರು ರಾತ್ರಿ ಮನೆಗೆ ವಾಪಸಾಗಿರಲಿಲ್ಲ. ಈ ನಡುವೆ ಕೋಟಿತೀರ್ಥ ದೇವಸ್ಥಾನದ ಸಮೀಪ ಅವರ ದ್ವಿಚಕ್ರ ವಾಹನ ಪತ್ತೆಯಾಗಿತ್ತು. ಪುಷ್ಕರಣಿಯ ಪೂರ್ವ ಭಾಗದ ಮೆಟ್ಟಿಲಿನಲ್ಲಿ ಚಪ್ಪಲಿ ಹಾಗೂ ಟೋಪಿ ಕಂಡುಬಂದ ಹಿನ್ನೆಲೆಯಲ್ಲಿ ಅವರು ನೀರಿಗೆ ಹಾರಿರುವ ಶಂಕೆ ವ್ಯಕ್ತವಾಗಿತ್ತು.

ಬುಧವಾರ ಬೆಳಗ್ಗೆ ಸ್ಥಳೀಯ ಈಜುಗಾರರು ಬೋಟ್ ಮೂಲಕ ಶೋಧ ನಡೆಸಿದಾಗ ಸುಮಾರು 9 ಗಂಟೆ ವೇಳೆಗೆ ಪುಷ್ಕರಣಿಯಲ್ಲಿ ಮೃತದೇಹ ಪತ್ತೆಯಾಯಿತು. ಬಳಿಕ ಮುಳುಗುತಜ್ಞ ಈಶ್ವರ ಮಲ್ಪೆ ಹಾಗೂ ತಂಡ ಸ್ಥಳೀಯ ಈಜುಗಾರರ ನೆರವಿನಿಂದ ಮೃತದೇಹವನ್ನು ಮೇಲಕ್ಕೆತ್ತಿದರು. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕುಂದಾಪುರ ಸರಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.


